545 ಸಬ್ ಇನ್ಸ್‌ಪೆಕ್ಟರ್ ನೇಮಕಾತಿ ಹಗರಣ: ಸರ್ಕಾರಕ್ಕೆ ಹೈಕೋರ್ಟ್ ಮಹತ್ವದ ಸೂಚನೆ

ಬೆಂಗಳೂರು: ಪೊಲೀಸ್ ಸಬ್‌ ಇನ್ಸ್‌ಪೆಕ್ಟರ್ ನೇಮಕಾತಿ ಅಕ್ರಮದ ಬಗ್ಗೆ ಹೊಸ ಪರೀಕ್ಷೆ ನಡೆಸುತ್ತಿರುವ ಬಗ್ಗೆ ಮತ್ತು ಕೈಗೊಳ್ಳಬೇಕಾದ ನೂತನ ಕ್ರಮಗಳ ಕುರಿತು ಹೈಕೋರ್ಟ್‌ ನ್ಯಾಯಪೀಠ ರಾಜ್ಯ ಸರ್ಕಾರಕ್ಕೆ ಸ್ಪಷ್ಟ ನಿರ್ದೇಶನ ಹಾಗೂ ಸೂಚನೆಗಳನ್ನು ನೀಡಿದೆ.

ಪಿಎಸ್‌ಐ ನೇಮಕಾತಿ ನಡೆಸಿದ್ದ ಪರೀಕ್ಷೆ ರದ್ದುಪಡಿಸಿ ಹೊಸದಾಗಿ ಪರೀಕ್ಷೆ ನಡೆಸಲು ಹಿಂದಿನ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಆದೇಶ ಹೊರಡಿಸಿತ್ತು. ಈ ಆದೇಶ ರದ್ದುಪಡಿಸಬೇಕು ಮತ್ತು ನೇಮಕಾತಿ ಅಕ್ರಮ ಎಸಗಿದ ಆರೋಪ ಎದುರಿಸುತ್ತಿರುವ ಅಭ್ಯರ್ಥಿಗಳನ್ನು ಕೈಬಿಟ್ಟು ಕಳಂಕ ರಹಿತ ಅಭ್ಯರ್ಥಿಗಳ ನೇಮಕಾತಿ ಮಾಡಲು ಆದೇಶ ಮಾಡಬೇಕು ಎಂದು ಕೋರಿ ಆಯ್ಕೆ ಪಟ್ಟಿಯಲ್ಲಿ ಇರುವ ಅಭ್ಯರ್ಥಿಗಳು ಹೈಕೋರ್ಟ್‌ ಮೆಟ್ಟಿಲೇರಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ವಿಭಾಗೀಯ ನ್ಯಾಯಪೀಠ, ಸರ್ಕಾರದ ಪರ ಹಾಜರಿದ್ದ ಅಡ್ವಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರಿಂದ ಮಾಹಿತಿ ಪಡೆದಿತ್ತು.

ಪೊಲೀಸ್ ಸಬ್‌ ಇನ್ಸ್‌ಪೆಕ್ಟರ್ ನೇಮಕಾತಿ ಅಕ್ರಮದಲ್ಲಿ ಹೆಸರು ಇಲ್ಲದ ಅಭ್ಯರ್ಥಿಗಳಿಗೆ ಪುನಃ ಪರೀಕ್ಷೆ ನಡೆಸುವ ಕುರಿತು ಜುಲೈ 5, 2023 ರ ಒಳಗೆ ಸ್ಪಷ್ಟನೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.

ಜೂನ್ 15ರಂದು ಈ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್‌ 545 ಪಿಎಸ್‌ಐ ಹುದ್ದೆಗಳಿಗೆ ಆಯ್ಕೆಯಾಗಿದ್ದ ಅಭ್ಯರ್ಥಿಗಳಲ್ಲಿ ಆರೋಪ ಪಟ್ಟಿಯಲ್ಲಿ ಹೆಸರು ಇದ್ದವರನ್ನು ಕೈಬಿಟ್ಟು ಉಳಿದವರಿಗೆ ಮಾತ್ರವೇ ಪರೀಕ್ಷೆ ನಡೆಸಿ, ಈ ಪರೀಕ್ಷೆಯ ಫಲಿತಾಂಶದ ಆಧಾರದಲ್ಲಿ ಅವರನ್ನು ಹುದ್ದೆಗೆ ಪರಿಗಣಿಸಲು ಸಾಧ್ಯವೇ ಎಂಬುದರ ಕುರಿತು ಸ್ಪಷ್ಟನೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.

Leave a Reply

Your email address will not be published. Required fields are marked *

error: Content is protected !!