ದಾವಣಗೆರೆ ಸೇರಿ 10 ಜಿಲ್ಲೆಯ 899 ಕೆರೆಗಳಿಗೆ, ನೀರು ತುಂಬಿಸುವ ಯೋಜನೆ ಜಾರಿಗೆ

ಬೆಂಗಳೂರು: ರಾಜ್ಯದ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು 172 ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದ್ದು, ಇವುಗಳಲ್ಲಿ 19 ಕೆರೆ ತುಂಬಿಸುವ ಯೋಜನೆಗಳನ್ನು 770 ಕೋಟಿ ರೂ. ವೆಚ್ಚದಲ್ಲಿ ಪೂರ್ಣಗೊಳಿಸಿ, ಬೆಳಗಾವಿ, ದಾವಣಗೆರೆ, ಬಳ್ಳಾರಿ, ಹಾವೇರಿ, ಗದಗ, ಬೀದರ್, ಉತ್ತರ ಕನ್ನಡ, ವಿಜಯನಗರ, ಕೊಪ್ಪಳ, ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಗಳ 899 ಕೆರೆಗಳಿಗೆ ನೀರು ತುಂಬಿಸಲಾಗುವುದು.
ನಮ್ಮ ಸರ್ಕಾರದ ಅವಧಿಯಲ್ಲಿ ತೀವ್ರಗತಿಯಲ್ಲಿ ಪೂರ್ಣಗೊಳಿಸಲು ಚಾಲನೆಗೊಳಿಸಿದ್ದ 12,912 ಕೋಟಿ ರೂ. ಮೊತ್ತದ ಎತ್ತಿನ ಹೊಳೆ ಯೋಜನೆಯನ್ನು ಹಿಂದಿನ ಸರ್ಕಾರವು ಸಕಾಲದಲ್ಲಿ ಪೂರ್ಣಗೊಳಿಸದ ಕಾರಣ ದರ ಹೆಚ್ಚಳಗೊಂಡು ಈ ಯೋಜನೆಯು 23,252 ಕೋಟಿ ರೂ. ಮೊತ್ತಕ್ಕೆ ಪರಿಷ್ಕೃತಗೊಂಡಿದೆ. ಯೋಜನೆಯಡಿ ಬಾಕಿ ಇರುವ ಕಾಮಗಾರಿಗಳನ್ನು ಪೂರ್ಣಗೊಳಿಸಲು ಕ್ರಮವಹಿಸಿ ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಬೆಂಗಳೂರು ಗ್ರಾಮಾಂತರ ಮತ್ತು ತುಮಕೂರು ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಸಲು ಆದ್ಯತೆಯ ಮೇಲೆ ಕ್ರಮ ತೆಗೆದುಕೊಳ್ಳಲಾಗುವುದು.