ಸಂತ್ರಸ್ತರಿಗೆ ಪರಿಹಾರ ನೀಡಿ : ಎಚ್‌ಡಿಕೆ ಆಗ್ರಹ

2

ತುಮಕೂರು: ಜಿಲ್ಲೆಯ ಪಾವಗಡ ತಾಲೂಕು ವ್ಯಾಪ್ತಿಯ ಪಳವಳ್ಳಿಕಟ್ಟೆಯ ಕೆರೆ ಬಳಿ ಖಾಸಗಿ ಬಸ್ ಪಲ್ಟಿಯಾಗಿ ಭೀಕರ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಸರ್ಕಾರ ದಿಂದ ಪರಿಹಾರ ನೀಡಬೇಕೆಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ತುಮಕೂರು ಅಪಘಾತದ ಕುರಿತು ಅವರು ಸರಣಿ ಟ್ವೀಟ್ ಮಾಡಿದ್ದು, “ತುಮಕೂರು ಜಿಲ್ಲೆಯ ಪಳವಳ್ಳಿ ಕಟ್ಟೆ ಬಳಿ ಖಾಸಗಿ ಬಸ್ ಅಪಘಾತಕ್ಕೀಡಾಗಿ ಎಂಟು ಪ್ರಯಾಣಿಕರು ಸಾವನ್ನಪ್ಪಿರುವುದು ನನಗೆ ತೀವ್ರ ಆಘಾತ ಉಂಟು ಮಾಡಿದೆ” ಎಂದು ಮೊದಲ ಟ್ವೀಟಿನಲ್ಲಿ ಬರೆದುಕೊಂಡಿದ್ದಾರೆ. ಶನಿವಾರ ಬೆಳಗ್ಗೆ 9.20 ಗಂಟೆ ಸುಮಾರಿಗೆ ನಡೆದ ಭೀಕರ ಅಪಘಾತದಲ್ಲಿ 8 ಮಂದಿ ಸಾವನ್ನಪ್ಪಿದ್ದಾರೆ. 25ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಗಂಭೀರವಾಗಿ ಗಾಯಗೊಂಡವರನ್ನು ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬAಧ ಪಾವಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇನ್ನೂ ಕುಮಾರಸ್ವಾಮಿ ಅವರು ಎರಡನೇ ಟ್ವೀಟ್ ಮಾಡಿದ್ದು, “ಸಾರಿಗೆ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಪರಿಹಾರ ಕಾರ್ಯ ಕೈಗೊಳ್ಳಬೇಕು. ದುರಂತದಲ್ಲಿ ಸಾವನ್ನಪ್ಪಿದವರಿಗೆ ದೊಡ್ಡ ಪ್ರಮಾಣದ ಪರಿಹಾರ ನೀಡಬೇಕು. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡಿ ಅವರಿಗೂ ಪರಿಹಾರ ಕೊಡ ಬೇಕು,” ಎಂದು ಆಗ್ರಹಿಸಿದ್ದಾರೆ. ಮೂರನೇ ಟ್ವೀಟ್‌ನಲ್ಲಿ “ಖಾಸಗಿ ಬಸ್‌ಗಳ ಗುಣಮಟ್ಟ, ಪರವಾನಗಿ, ತಾಂತ್ರಿಕ ಕ್ಷಮತೆ, ವೇಗದ ಚಾಲನೆ ಇತ್ಯಾದಿಗಳ ಬಗ್ಗೆ ನಿರಂತರ ವಾಗಿ ದೂರು ಬರುತ್ತಲೇ ಇದ್ದರೂ ಸರ್ಕಾರವು ನಿರ್ಲಕ್ಷ್ಯ ಧೋರಣೆಯಲ್ಲೇ ಇದೆ. ಗ್ರಾಮೀಣ ಸಾರಿಗೆಯನ್ನು ಉತ್ತಮಪಡಿಸುವ ಸರ್ಕಾರದ ಮಾತುಗಳು ಕೇವಲ ಹೇಳಿಕೆಗಳಿಗೆ ಮಾತ್ರ ಸೀಮಿತವಾಗಿದೆ,” ಎಂದು ಬರೆದುಕೊಂಡಿದ್ದಾರೆ.

ನಾಲ್ಕನೇ ಟ್ವೀಟ್‌ನಲ್ಲಿ “ಅತಿವೇಗ ಹಾಗೂ ಚಾಲಕನ ನಿರ್ಲಕ್ಷ್ಯದಿಂದ ಅಪಘಾತ ಸಂಭವಿಸಿದೆ ಎಂಬ ಮಾಹಿತಿ ಸಿಕ್ಕಿದ್ದು, ಬಸ್ಸಿನ ಟಾಪ್ ಮೇಲೆಯೇ 40ಕ್ಕೂ ಹೆಚ್ಚು ಪ್ರಯಾಣಿಕರು ಕೂತಿದ್ದರು ಎಂದು ಮಾಧ್ಯಮಗಳು ವರದಿ ಮಾಡಿವೆ. ಇದು ಸಾರಿಗೆ ಇಲಾಖೆ ನಿರ್ಲಕ್ಷ್ಯದ ಪರಮಾವಧಿ,” ಎಂದು ದೂರಿದ್ದಾರೆ. ಐದನೇ ಟ್ವೀಟ್‌ನಲ್ಲಿ “ಈ ಬಗ್ಗೆ ಸರ್ಕಾರ ಕಠಿಣ ಕ್ರಮ ವಹಿಸಬೇಕು. ಕರ್ತವ್ಯ ಲೋಪ ಎಸಗಿರುವ ಸಾರಿಗೆ ಇಲಾಖೆ ಅಧಿಕಾರಿಗಳ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು. ದುರಂತದಲ್ಲಿ ಜೀವ ಕಳೆದು ಕೊಂಡ ಎಲ್ಲ ಅಮೂಲ್ಯ ಜೀವಗಳಿಗೆ ನನ್ನ ಶ್ರದ್ಧಾಂಜಲಿ ಹಾಗೂ ಎಲ್ಲ ಗಾಯಾಳುಗಳು ಆದಷ್ಟು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ,” ಎಂದು ಕುಮಾರಸ್ವಾಮಿ ಸರಣಿ ಟ್ವೀಟ್ ಮಾಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!