ಮಿನಿ ಅಂಗನವಾಡಿ ಕಾರ್ಯಕರ್ತೆಯರಿಂದ ಬೆಂಗಳೂರಿನಲ್ಲಿ ಅನಿರ್ದಿಷ್ಟಾವಧಿ ಧರಣಿ

ದಾವಣಗೆರೆ: ಮಿನಿ ಅಂಗನವಾಡಿ ಕೇಂದ್ರಗಳಿಗೆ ಸಹಾಯಕಿಯರ ನೇಮಕ ಹಾಗೂ ಮಿನಿ ಅಂಗನವಾಡಿ ಕಾರ್ಯಕರ್ತೆಯರಿಗೆ ಸಮಾನ ವೇತನ ಜಾರಿಗೊಳಿಸುವಂತೆ ಒತ್ತಾಯಿಸಿ ಎಐಟಿಯುಸಿ ಸಂಯೋಜಿತ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಫೆಡರೇಷನ್ ರಾಜ್ಯ ಸಮಿತಿ ವತಿಯಿಂದ ಇಂದು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಮಿನಿ ಅಂಗನವಾಡಿ ಕಾರ್ಯಕರ್ತೆಯರು ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದರು.
ಎಐಟಿಯುಸಿ ಸಂಯೋಜಿತ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಫೆಡರೇಷನ್ ರಾಜ್ಯ ಸಮಿತಿ ಕರೆ ಮೇರೆಗೆ ನಡೆಯುತ್ತಿರುವ ಈ ಧರಣಿ ನೇತೃತ್ವವನ್ನು ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಫೆಡರೇಷನ್ನ ರಾಜ್ಯಾಧ್ಯಕ್ಷರಾದ ಎನ್. ಶಿವಣ್ಣ, ಪ್ರಧಾನ ಕಾರ್ಯದರ್ಶಿ ಎಂ. ಜಯಮ್ಮ, ರಾಜ್ಯ ಉಪಾಧ್ಯಕ್ಷರಾದ ಹೊನ್ನಪ್ಪ ಮರೆಮ್ಮನವರ್, ರಾಜ್ಯ ಸಮಿತಿ ಸದಸ್ಯರಾದ ಗಿರಿಜಾ, ಎಸ್.ಎಸ್ ಮಲ್ಲಮ್ಮ ಮುಂತಾದವರು ವಹಿಸಿದ್ದರು.