ಪ್ರತಿ ಜಿಲ್ಲೆಗೂ ಪ್ರತ್ಯೇಕ ಪ್ರಣಾಳಿಕೆ: ಸಿಎಂ
ಬೆಂಗಳೂರು: ರಾಜ್ಯದ ಪ್ರತಿ ಜಿಲ್ಲೆಗಳಿಂದಲೂ ಮಾಹಿತಿ ತರಿಸಿಕೊಂಡು ಪಕ್ಷದ ಪ್ರಣಾಳಿಕೆ ಸಿದ್ಧಪಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಶುಕ್ರವಾರ ಬಿಜೆಪಿ ಕಚೇರಿಯಲ್ಲಿ ನಡೆದ ಪಕ್ಷದ ಪ್ರಮುಖ ನಾಯಕರ ಸಭೆ ಬಳಿಕ ಅವರು ಪತ್ರಕರ್ತರೊಂದಿಗೆ ಮಾತನಾಡಿದರು.
ಇಂದಿನ ಸಭೆಯಲ್ಲಿ ಪ್ರಣಾಳಿಕೆ ಸಿದ್ಧಪಡಿಸುವುದು, ಬಜೆಟ್ ಅಧಿವೇಶನ, ಪಕ್ಷದ ಸಂಘಟನೆ, ಜನ ಸಂಕಲ್ಪ ಯಾತ್ರೆಯ ಮುಂದುವರಿಕೆ, ರಾಷ್ಟ್ರೀಯ ನಾಯಕರ ಕಾರ್ಯಕ್ರಮಗಳ ಆಯೋಜನೆ ಕುರಿತು ಚರ್ಚಿಸಲಾಗಿದೆ ಎಂದು ಹೇಳಿದರು.
ಶನಿವಾರದಿಂದ (ಜ.21) ಪ್ರಾರಂಭವಾಗುವ ಬೂತ್ಮಟ್ಟದ ವಿಜಯಸಂಕಲ್ಪ ಯಾತ್ರೆಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಅವರು ಭಾಗವಹಿಸಲಿದ್ದಾರೆ. ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಾರ್ಯಕ್ರಮಗಳ ಪಟ್ಟಿಯನ್ನು ಮನೆ ಮನೆಗೆ ತಲುಪಿಸಲಾಗುವುದು. ತಾಲ್ಲೂಕು ಮಟ್ಟದ ಸಮ್ಮೇಳನ, ಹಲವು ಮೋರ್ಚಾಗಳ ಜಿಲ್ಲಾಮಟ್ಟದ ಸಮಾವೇಶ ಆಯೋಜಿಸಲು ತೀರ್ಮಾನಿಸಲಾಗಿದೆ ಎಂದು ಮಾಹಿತಿ ನೀಡಿದರು.