ನನ್ನ ಹೆಸರಿನಲ್ಲಿ ಕಿಡಿಗೇಡಿಗಳಿಂದ ನಕಲಿ ಪತ್ರ: ಸಿದ್ದರಾಮಯ್ಯ ಆರೋಪ

ಸಿದ್ದರಾಮಯ್ಯ ಆರೋಪ
ಬೆಂಗಳೂರು: ನನ್ನ ಹೆಸರನ್ನು ದುರ್ಬಳಕೆ ಮಾಡಿಕೊಂಡ ನಕಲಿ ಪತ್ರವೊಂದು ಹರಿದಾಡುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ನನ್ನ ಮತ್ತು ಕೆಪಿಸಿಸಿ ಅಧ್ಯಕ್ಷರ ಸಂಬಂಧವನ್ನು ಕೆಡಿಸುವ ದುರುದ್ದೇಶದಿಂದಲೇ ಯಾರೋ ಕಿಡಿಗೇಡಿಗಳು ಈ ಕೃತ್ಯ ನಡೆಸಿದ್ದಾರೆ. ಈ ಪತ್ರಕ್ಕೂ ನನಗೂ ಸಂಬಂಧ ಇಲ್ಲ ಎಂದವರು ಸ್ಪಷ್ಟಪಡಿಸಿದ್ದಾರೆ.
ಪತ್ರದ ಸಮೇತ ಟ್ವಿಟ್ ಮಾಡಿರುವ ಅವರು, ನನ್ನ ಹೆಸರಿನಲ್ಲಿ ಕಾಂಗ್ರೆಸ್ ಹೈಕಮಾಂಡ್ಗೆ ಬರೆದಿರುವ ಪತ್ರ ನಕಲಿ ಎಂದು ಹೇಳಿದ್ದಾರೆ.
ಭಾರತ್ ಜೋಡೊ ಯಾತ್ರೆಯ ಸಮಾರೋಪದಲ್ಲಿ ಸಿದ್ದರಾಮಯ್ಯ ಭಾಗಿಯಾಗಿರಲಿಲ್ಲ ಹಾಗೂ ಟಿಕೆಟ್ ಹಂಚಿಕೆ ಕುರಿತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ನಡುವೆ ಗುಂಪುಗಾರಿಕೆ ಇದೆ. ಇದು ಬಂಡಾಯಕ್ಕೆ ಕಾರಣವಾಗುತ್ತದೆ ಎನ್ನುವ ಅರ್ಥದಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರಿಗೆ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ ಎಂದು ನಕಲಿ ಪತ್ರದಲ್ಲಿ ಬಿಂಬಿಸಲಾಗಿದೆ.
ಈ ಪತ್ರದ ಪ್ರತಿಯನ್ನು ಹಂಚಿಕೊಂಡು ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, ನಾನು ಈ ರೀತಿಯ ಯಾವುದೇ ಪತ್ರ ಬರೆದಿಲ್ಲ. ಇದು ದುರುದ್ದೇಶಪೂರಿತ ನಕಲಿ ಪತ್ರ. ನಮ್ಮ ಕಾರ್ಯಕರ್ತರಲ್ಲಿ ಗೊಂದಲ ಮೂಡಿಸಲು ಈ ರೀತಿ ಬಿಜೆಪಿ ಕಾರ್ಯಕರ್ತರು ಕುತಂತ್ರ ನಡೆಸಿದ್ದಾರೆ. ಬಿಜೆಪಿ ಕಾರ್ಯಕರ್ತರು ತಮ್ಮ ನಾಯಕರಂತೆಯೇ ತೀರಾ ಕೆಳಮಟ್ಟಕ್ಕೆ ಇಳಿದಿದ್ದಾರೆ ಎಂದು ಕಿಡಿಕಾರಿದ್ದಾರೆ.