ಆಶಾ ಕಾರ್ಯಕರ್ತೆಯರ ವೇತನದ ಹೆಚ್ಚಳ ಸದ್ಯಕ್ಕಿಲ್ಲ : ಸಚಿವ ದಿನೇಶ್ ಗುಂಡೂರಾವ್
ಬೆಂಗಳೂರು : ಆಶಾ ಕಾರ್ಯಕರ್ತೆಯರ ಬಹುಕಾಲದ ಬೇಡಿಕೆಗೆ ಸರ್ಕಾರ ಮಣೆ ಹಾಕಿತ್ತಿಲ್ಲ. ರಾಜ್ಯದಲ್ಲಿ ಕಾರ್ಯನಿರ್ವಸುತ್ತಿರುವ ಆಶಾ ಕಾರ್ಯಕರ್ತೆಯರ ವೇತನ ಹೆಚ್ಚಳದ ಬಹುಕಾಲದ ಬೇಡಿಕೆ ಈಡೇರಿಸಲು ಸರ್ಕಾರ ನಿರಾಕರಿಸಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಅಧಿವೇಶನದಲ್ಲಿ ಸೋಮವಾರ ಹೇಳಿಕೆ ನೀಡಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಆಶಾ ಕಾರ್ಯಕರ್ತೆಯರ ವೇತನ ಹೆಚ್ಚಳ ಸದ್ಯಕ್ಕಿಲ್ಲ ಎಂದಿದ್ದಾರೆ.
ವಿಧಾನಪರಿಷತ್ ನಲ್ಲಿ ಸೋಮವಾರ ಪ್ರಶ್ನೋತ್ತರ ವೇಳೆ ಜೆಡಿಎಸ್ ಸದಸ್ಯ ತಿಪ್ಪೇಸ್ವಾಮಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ 41,119 ಆಶಾ ಕಾರ್ಯಕರ್ತೆಯರು ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರತಿ ತಿಂಗಳು 5,000 ರೂಪಾಯಿ ಗೌರವ ಧನ ನೀಡಲಾಗುತ್ತಿದೆ ಎಂದ ಅವರು,. ಈ ವೇತನ ಹೆಚ್ಚಳದ ಪ್ರಸ್ತಾವ ಸರ್ಕಾರದ ಮುಂದಿಲ್ಲ ಎಂದು ತಿಳಿಸಿದರು.
ಕೊಟ್ಟ ಭರವಸೆ ಮರೆತ ಸರ್ಕಾರ
ಆಶಾ ಕಾರ್ಯಕರ್ತೆಯರು ಆರೋಗ್ಯ ಕ್ಷೇತ್ರದಲ್ಲಿ ಹೆಚ್ಚಿನ ಜವಾಬ್ಧಾರಿ ವಹಿಸಿ ಕಾರ್ಯನಿರ್ವಹಿಸುತ್ತಿರುವ ಹಿನ್ನೆಲೆಯಲ್ಲಿ ವೇತನ ಹೆಚ್ಚಳ ಮಾಡಬೇಕೆಂದು ಬಹುಕಾಲದಿಂದ ಹೋರಾಟ ನಡೆಯುತ್ತಲೇ ಇದೆ. ಈ ನಡುವೆ, ಆಶಾ ಕಾರ್ಯಕರ್ತೆಯರ ವೇತನ ಹೆಚ್ಚಳದ ಬಗ್ಗೆ ಚುನಾವಣಾ ಸಂದರ್ಭದಲ್ಲಿ ಭರವಸೆ ನೀಡಿದ್ದ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಬಳಿಕ ಮರೆತಿದೆ ಎಂದು ಆಶಾ ಕಾರ್ಯಕರ್ತೆಯರು ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.