ಮಾದರಿ ಗ್ರಾಮಗಳನ್ನಾಗಿ ಮಾಡಲು ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಉತ್ತಮ ಕೆಲಸ ಮಾಡಿ – ಮಹಾಂತೇಶ್ ಬೀಳಗಿ

IMG-20210723-WA0010

ದಾವಣಗೆರೆ: ದೇಶದ ಹೃದಯ ಗ್ರಾಮಗಳಲ್ಲಿದೆ. ಗ್ರಾಮಗಳು ಬೆಳೆದರೆ ಮಾತ್ರ ದೇಶ ಅಭಿವೃದ್ಧಿಯಾಗುತ್ತದೆ, ಹೊಸ ಹೊಸ ಅಭಿವೃದ್ಧಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿ ಗ್ರಾಮಗಳನ್ನು ಸ್ವಾವಲಂಬಿಗಳನ್ನಾಗಿಸುವ ಮಹತ್ವದ ಜವಾಬ್ದಾರಿ ಗ್ರಾಮ ಪಂಚಾಯತಿಗಳ ಮೇಲಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಹೇಳಿದರು.

75ನೇ ವರ್ಷದ ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆ, ಮೈಸೂರು ಹಾಗೂ ಜಿಲ್ಲಾ ಪಂಚಾಯತಿ ಇವರುಗಳ ಸಹಯೋಗದಲ್ಲಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಿಗಳ ನೂತನ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಅಭಿವೃದ್ಧಿ ವಿಷಯಗಳ ಕುರಿತು ನಗರದ ಹದಡಿ ರಸ್ತೆಯಲ್ಲಿನ ಶಾಮನೂರು ಶಿವಶಂಕರಪ್ಪ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಏರ್ಪಡಿಸಿದ ಒಂದು ದಿನದ ಕಾರ್ಯಗಾರ ಉದ್ಘಾಟಿಸಿ ಅವರು ಮಾತಾಡಿದರು.

ಕೋವಿಡ್ ಸಂಕಷ್ಟದ ನಡುವೆಯೇ ಗ್ರಾಮ ಪಂಚಾಯತಿಗಳಿಗೆ ಸಾರ್ವತ್ರಿಕ ಚುನಾವಣೆ ಹಾಗೂ ಗ್ರಾ.ಪಂ. ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಜರುಗಿಸಿದ್ದು ಸವಾಲಿನ ವಿಷಯವಾಗಿತ್ತು. ಇವೆಲ್ಲವನ್ನೂ ಮೀರಿ ಯಶಸ್ವಿಯಾಗಿ ಚುನಾವಣೆ ನಡೆಸಿ ಅನುಷ್ಠಾನಗೊಳಿಸಿದ್ದೇವೆ. ಈ ಬಾರಿ ಸ್ನಾತಕೋತ್ತರ ಪದವಿ, ಸಾಫ್ಟ್ವೇರ್ ಇಂಜಿನಿಯರ್‌ಗಳು ಕೂಡ ಗ್ರಾಮ ಪಂಚಾಯತಿ ಸದಸ್ಯರು, ಅಧ್ಯಕ್ಷರುಗಳಾಗಿರುವುದು ಒಳ್ಳೆಯ ಬೆಳವಣಿಗೆಯಾಗಿದ್ದು, ಅಂತಹವರು ತಮ್ಮ ಪ್ರತಿಭೆ, ಸಾಮರ್ಥ್ಯ ವಿನಿಯೋಗಿಸಿ, ಹೊಸ ಹೊಸ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸುವ ಮೂಲಕ ಮಾದರಿ ಗ್ರಾಮಗಳನ್ನು ನಿರ್ಮಿಸಲು, ಸ್ವಾವಲಂಬಿ ಗ್ರಾಮಗಳ ನಿರ್ಮಾಣಕ್ಕೆ ಒಳ್ಳೆಯ ಸದಾವಕಾಶವಿದೆ ಎಂದರು.

ಗ್ರಾಮೀಣ ಪ್ರದೇಶಗಳಲ್ಲಿ ಶುದ್ಧ ಕುಡಿಯುವ ನೀರು, ವಿದ್ಯುತ್ ಪೂರೈಕೆ, ಗ್ರಾಮಗಳ ಸ್ವಚ್ಛತೆಯ ಸಂಪೂರ್ಣ ಜವಾಬ್ದಾರಿ ಗ್ರಾಮ ಪಂಚಾಯತಿಗಳ ಮೇಲಿದೆ. ಹೀಗಾಗಿಯೇ ಕೇಂದ್ರ ಸರ್ಕಾರದಿಂದ ವಿವಿಧ ಅಭಿವೃದ್ಧಿ ಯೋಜನೆಗಳ ಅನುದಾನ ನೇರವಾಗಿ ಗ್ರಾಮ ಪಂಚಾಯತಿಗಳಿಗೆ ಬಂದು ಸೇರುತ್ತದೆ. ಗ್ರಾಮ ಪಂಚಾಯತಿ ಚುನಾವಣೆ ಪಕ್ಷ ರಹಿತ ಚುನಾವಣೆಯಾಗಿದ್ದು, ಗ್ರಾ.ಪಂ. ಪ್ರತಿನಿಧಿಗಳು ರಾಜಕೀಯ ಮಾಡುವುದನ್ನು ಬಿಟ್ಟು, ಗ್ರಾಮಗಳ ಅಭಿವೃದ್ಧಿಯತ್ತ ಗಮನ ಹರಿಸಬೇಕು ಎಂದು ಜಿಲ್ಲಾಧಿಕಾರಿ ಮನವಿ ಮಾಡಿದರು.

ಗ್ರಾಮ ಪಂಚಾಯತಿಗಳಲ್ಲಿ ಅಧ್ಯಕ್ಷರಾಗಿರುವ ಮಹಿಳೆಯರ ಗಂಡಂದಿರು ತಾವೇ ಗ್ರಾ.ಪಂ. ಅಧ್ಯಕ್ಷರೆಂದು ಹೇಳಿಕೊಂಡು ಓಡಾಡುತ್ತಾರೆ. ಖುದ್ದು ನಾನೇ ಇದನ್ನು ಕಂಡಿದ್ದೇನೆ. ಹೀಗಾಗಿ ಮಹಿಳಾ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ತಮ್ಮ ಅಧಿಕಾರವನ್ನು ತಾವೇ ಚಲಾಯಿಸಬೇಕು. ಒಂದು ವೇಳೆ ಯಾವುದೇ ಮಾಹಿತಿ ತಿಳಿಯದಿದ್ದರೆ ಪಿಡಿಒ ಗಳಿಗೆ ಅಥವಾ ಉನ್ನತ ಅಧಿಕಾರಿಗಳೊಂದಿಗೆ ಚರ್ಚಿಸಿ ತಿಳಿದುಕೊಳ್ಳಲು ಪ್ರಯತ್ನಿಸಬೇಕು.

ಯಾವುದೇ ಕಾರಣಕ್ಕೂ ಕಾನೂನು ಬಾಹಿರ ಕೆಲಸಗಳಿಗೆ ಕೈ ಹಾಕಬೇಡಿ, ಒಂದು ವೇಳೆ ಒತ್ತಡ ಬಂದಲ್ಲಿ, ಉನ್ನತ ಅಧಿಕಾರಿಗಳಿಂದ ಮಾರ್ಗದರ್ಶನ ಪಡೆದುಕೊಳ್ಳಬೇಕು. ಗ್ರಾಮ ಪಂಚಾಯತಿಗಳು ಸ್ವಾವಲಂಬಿಗಳಾಗಲು ತೆರಿಗೆ ಸಂಗ್ರಹಕ್ಕೆ ಆದ್ಯತೆ ನೀಡಬೇಕು. ಕಳೆದ ವರ್ಷ ಉತ್ತಮವಾಗಿ ತೆರಿಗೆ ಸಂಗ್ರಹವಾಗಿದ್ದು, ಈ ಬಾರಿಯೂ ತೆರಿಗೆ ಸಂಗ್ರಹಕ್ಕೆ ಹೆಚ್ಚಿನ ಒತ್ತು ನೀಡಿ ಎಂದು ಜಿಲ್ಲಾಧಿಕಾರಿ ಕರೆ ನೀಡಿದರು.

ಕಾರ್ಯಾಗಾರ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದ ಜಿ.ಪಂ. ಸಿಇಒ ಡಾ. ವಿಜಯ ಮಹಾಂತೇಶ್ ದಾನಮ್ಮನವರ್ ಅವರು, ನೂತನವಾಗಿ ಗ್ರಾ.ಪಂ. ಅಧ್ಯಕ್ಷರು, ಉಪಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಕೆಲವೇ ದಿನಗಳಲ್ಲಿ, ಕೋವಿಡ್ 02ನೇ ಅಲೆಯ ಸಂಕಷ್ಟ ಎದುರಾಗಿತ್ತು. ಕೋವಿಡ್ ನಿಯಂತ್ರಣಕ್ಕೆ ರಚಿಸಲಾದ ಗ್ರಾ.ಪಂ. ಕಾರ್ಯಪಡೆಯ ಮುಖ್ಯಸ್ಥರಾಗಿ ಅಧ್ಯಕ್ಷರು, ಸೋಂಕು ದೃಢಪಟ್ಟವರಿಗೆ ಆಸ್ಪತ್ರೆ ಅಥವಾ ಆರೈಕೆ ಕೇಂದ್ರಗಳಿಗೆ ಸ್ಥಳಾಂತರಿಸುವುದು ಸೇರಿದಂತೆ ಕೋವಿಡ್ ಸರಪಳಿಯನ್ನು ತುಂಡರಿಸಲು ಕೈಗೊಂಡ ಕಾರ್ಯ ನಿಜಕ್ಕೂ ಶ್ಲಾಘನೀಯ ಎಂದರು.

ಕಾರ್ಯಕ್ರಮದ ಅಂಗವಾಗಿ ರಾಜ್ಯ ಕುಡಿಯುವ ನೀರು ಮತ್ತು ನೈರ್ಮಲ್ಯ ಆಯುಕ್ತಾಲಯದ ನಿರ್ದೇಶಕ ಪರಮೇಶ್ವರ ಹೆಗಡೆ ಅವರು ‘ಜಲಜೀವನ್ ಮಿಷನ್’ ಯೋಜನೆ ಕುರಿತು ಹಾಗೂ ಕಾರ್ಡಿಯಾ ಸಂಸ್ಥೆಯ ಮುಖ್ಯಸ್ಥ ಸುದರ್ಶನ ಅವರು ‘ಜೀವ ವೈವಿಧ್ಯತೆ’ ಕುರಿತು ವಿಶೇಷ ಉಪನ್ಯಾಸ ನೀಡಿದರು. ಜಿ.ಪಂ. ಉಪಕಾರ್ಯದರ್ಶಿ ಬಿ. ಆನಂದ್, ಮುಖ್ಯ ಯೋಜನಾಧಿಕಾರಿ ಲೋಕೇಶಪ್ಪ, ಯೋಜನಾ ನಿರ್ದೇಶಕ ಜಗದೀಶ್ ಉಪಸ್ಥಿತರಿದ್ದರು.

ಕಾರ್ಯಗಾರದಲ್ಲಿ ಜಿಲ್ಲೆಯ ಗ್ರಾಮ ಪಂಚಾಯತಿಗಳ ಅಧ್ಯಕ್ಷರು, ಉಪಾಧ್ಯಕ್ಷರು, ಪಿಡಿಒಗಳು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

error: Content is protected !!