Gandhi Bhavan: ನೂತನ ಗಾಂಧಿ ಭವನದಲ್ಲಿ ಅಕ್ಟೋಬರ್ 2 ರಂದು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರೀಜಿ ಜಯಂತಿ – ಡಿಸಿ

ದಾವಣಗೆರೆ: ನಗರದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಗಾಂಧಿ ಭವನದಲ್ಲಿ ಅ.02 ರಂದು ಬೆಳಿಗ್ಗೆ 9 ಗಂಟೆಗೆ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರೀಜೀಯವರ ಜಯಂತಿಯನ್ನು ಸರಳವಾಗಿ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರೀಜಿಯವರ ಜಯಂತಿ ಪ್ರಯುಕ್ತ ಏರ್ಪಡಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರತಿ ವರ್ಷ ಗಾಂಧಿ ಜಯಂತಿಯನ್ನು ಪಾಲಿಕೆಯಲ್ಲಿ ಹಮ್ಮಿಕೊಳ್ಳಲಾಗುತ್ತಿತ್ತು, ಈ ಬಾರಿ ನಗರದಲ್ಲಿ ನೂತನವಾಗಿ ಉದ್ಘಾಟನೆಯಾಗಿರುವ ಗಾಂಧಿ ಭವನದಲ್ಲಿ ಸರಳವಾಗಿ ಹಾಗೂ ವಿಶೇಷವಾಗಿ ಆಚರಿಸಲಾಗುವುದು ಎಂದರು.
ಕೋವಿಡ್ ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಸರ್ಕಾರ ಹೊರಡಿಸಿರುವ ಮಾರ್ಗಸೂಚಿಯನ್ವಯ ಕಾರ್ಯಕ್ರಮ ನಡೆಸಲಾಗುವುದು. ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಶಾಸಕರು ಹಾಗೂ ಗಣ್ಯಾತಿಗಣ್ಯರನ್ನು ಆಹ್ವಾನಿಸಲಾಗುವುದು. ಕಾರ್ಯಕ್ರಮದ ಅಂಗವಾಗಿ ಸರ್ವಧರ್ಮ ಪ್ರಾರ್ಥನೆ, ಗಾಂಧೀಜಿಯವರ ಜೀವನ ಸಾಧನೆ ಕುರಿತಂತೆ ಹಾಗೂ ಗಾಂಧಿ ಭವನದಲ್ಲಿ ನಿರ್ಮಾಣವಾಗಿರುವ ಕಲಾಕೃತಿಗಳ ಕುರಿತು ವಿಶೇಷ ಉಪನ್ಯಾಸ ಹಾಗೂ ಮಾಹಿತಿ ನೀಡಲಾಗುವುದು ಎಂದರು.
ಗಾಂಧಿ ಜಯಂತಿಯಂದು ನಗರಾದ್ಯಂತ ಬೆಳಿಗ್ಗೆ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಎಂದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್, ಅಪರ ಜಿಲ್ಲಾಧಿಕಾರಿ ಪೂಜಾರ್ ವೀರಮಲ್ಲಪ್ಪ, ಮಹಾನಗರ ಪಾಲಿಕೆ ಆಯುಕ್ತ ವಿಶ್ವನಾಥ ಮುದಜ್ಜಿ, ಎಸಿ ಮಮತ ಹೊಸಗೌಡರ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಕೌಸರ್ ರೇಷ್ಮ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ವಿಜಯಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರವಿಚಂದ್ರ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

 
                         
                       
                       
                       
                       
                       
                       
                      