ಮ್ಯಾನುಯಲ್ ಸ್ಕ್ಯಾವೆಂಜರ್ಸ್ ಗಳಿಗೆ ವಸತಿ ವ್ಯವಸ್ಥೆ ಕಲ್ಪಿಸಲು ಕ್ರಮ – ಡಿಸಿ ಮಹಾಂತೇಶ್ ಬೀಳಗಿ

ದಾವಣಗೆರೆ: ಮ್ಯಾನುವಲ್ ಸ್ಕ್ಯಾವೆಂಜರ್ಸ್ ನೇಮಕಾತಿ ನಿಷೇಧ ಮತ್ತು ಪುನರ್ವಸತಿ ಅಧಿನಿಯಮದಡಿ ವಸತಿ ರಹಿತರಿಗೆ ಪುನರ್ವಸತಿ ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು.

ಬುಧವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಮ್ಯಾನುವಲ್ ಸ್ಕ್ಯಾವೆಂಜರ್ಸ್ ನೇಮಕಾತಿ ನಿಷೇಧ ಮತ್ತು ಪುನರ್ವಸತಿ ಅಧಿನಿಯಮ-2013 ಮೇಲ್ವಿಚಾರಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸರ್ಕಾರದ ವತಿಯಿಂದ ಎಲ್ಲಾ ಮ್ಯಾನುಯೆಲ್ ಸ್ಕ್ಯಾವೆಂಜರ್ಸ್ ಕುಟುಂಬಗಳಿಗೆ 40,000 ರೂ. ಬಂದಿದೆ ಹಾಗೂ ಯಾರಿಗೆ ನಿವೇಶನ ಇಲ್ಲವೋ ಅವರಿಗೆ ನಿವೇಶನ ಮತ್ತು ನಿವೇಶನ ಹೊಂದಿದವರಿಗೆ ಮನೆಯನ್ನು ನಿರ್ಮಾಣ ಮಾಡಿಕೊಳ್ಳಲು ಸಹಾಯಧನ ಕಲ್ಪಿಸುವಂತೆ ಸಂಬಂಧಪಟ್ಟ ನಿಗಮಗಳಿಗೆ ಶಿಫಾರಸ್ಸು ಮಾಡಲಾಗುವುದು, ನಿವೇಶನ ಅಥವಾ ವಸತಿ ಸೌಲಭ್ಯಕ್ಕಾಗಿ ಫಲಾನುಭವಿಗಳು ಮಧ್ಯವರ್ತಿಗಳಿಗೆ ಯಾವುದೇ ರೀತಿಯ ಹಣನೀಡದೆ ನೇರವಾಗಿ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಮಾಡಿ ಎಂದರು.

ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ರೇಷ್ಮಾ ಕೌಸರ್ ಮಾಹಿತಿ ನೀಡಿ, ವಿಶೇಷ ಮರು ಸಮೀಕ್ಷೆಯಲ್ಲಿ ಗುರುತಿಸಿರುವ 380 ಜನ ಮ್ಯಾನುಯಲ್ ಸ್ಕ್ಯಾವೆಂಜರ್ಸ್‍ಗಳಲ್ಲಿ ನವದೆಹಲಿಯ ಎನ್.ಎಸ್.ಕೆ.ಎಫ್.ಡಿ.ಸಿ ನೀಡಿರುವ ಐಡಿ ಸಂಖ್ಯೆಯಂತೆ ಪ್ರಸ್ತುತ ಎಲ್ಲರಿಗೂ ಐಡಿ ಕಾರ್ಡ್ ವಿತರಿಸಲಾಗಿದ್ದು, 369 ಜನರಿಗೆ ರೂ. 40 ಸಾವಿರ ಹಣ ಬ್ಯಾಂಕ್ ಖಾತೆಗೆ ಬಿಡುಗಡೆಯಾಗಿದೆ ಬಾಕಿ ಇರುವ 11 ಜನರಿಗೆ ಹಣ ಬಿಡುಗಡೆ ಮಾಡಲು ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಯಾರಿಗೆ ಹಣ ಬಂದಿಲ್ಲವೋ ಅವರು ಶೀಘ್ರವೇ ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಅಥವಾ ತಾಂತ್ರಿಕ ಸಮಸ್ಯೆ ಸರಿಪಡಿಸಿ ಎಂದು ಹೇಳಿದರು.

ಮಹಾನಗರಪಾಲಿಕೆ ಆಯುಕ್ತ ವಿಶ್ವನಾಥ್ ಮಾತನಾಡಿ, ಪಾಲಿಕೆಯಿಂದ 20 ಜನ ಫಲಾನುಭವಿಗಳಿಗೆ ಬೀದಿಬದಿ ತಳ್ಳುವ ಗಾಡಿ ವಿತರಿಸಿದೆ. 46 ಜನ ಫಲಾನುಭವಿಗಳಿಗೆ ಜೆರಾಕ್ಸ್ ಯಂತ್ರ ವಿತರಿಸಿದ್ದು, 55 ಜನರಿಗೆ ಹೊಲಿಗೆ ಯಂತ್ರ ಹಾಗೂ 18 ಜನ ಫಲಾನುಭವಿಗಳಿಗೆ ಹೊರಗುತ್ತಿಗೆ ಆಧಾರದ ಮೇರೆಗೆ ಯು.ಜಿ.ಡಿ ಕಾರ್ಮಿಕರನ್ನಾಗಿ ನೇಮಕ ಮಾಡಲಾಗಿದೆ ಎಂದರು.
ನಾಮ ನಿರ್ದೇಶಿತ ಸದಸ್ಯರಾದ ಬಾಬಣ್ಣ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಸಾಕಷ್ಟು ಜನರು ಮ್ಯಾನುಯಲ್ ಸ್ಕ್ಯಾವೆಂಜರ್ಸ್ ಇದ್ದು ಅವರಿಗೆ ಸೌಲಭ್ಯಗಳು ತಲುಪುತ್ತಿಲ್ಲ ಎಂದರು. ಜಿಲ್ಲಾಧಿಕಾರಿ ಪ್ರತಿಕ್ರಿಯಿಸಿ ಎಲ್ಲಾ ಮ್ಯಾನುಯಲ್ ಸ್ಕ್ಯಾವೆಂಜರ್ಸ್‍ಗಳ ಪಟ್ಟಿ ಮಾಡಿಕೊಡಿ ಅವರಿಗೆ ಬೇಕಾದ ಅಗತ್ಯ ಸೌಲಭ್ಯಗಳನ್ನು ಒದಗಿಸುವ ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು.

ಮತ್ತೊಬ್ಬ ಸದಸ್ಯ ವಾಸು ಮಾತನಾಡಿ ಮಹಾನಗರ ಪಾಲಿಕೆಗೆ ನಮ್ಮ ಸಮಸ್ಯೆಗಳ ಕುರಿತು ಹೇಳಿಕೊಳ್ಳಲು ಹೋದಾಗ ಅಲ್ಲಿನ ಅಧಿಕಾರಿಗಳು ನಮಗೆ ಸರಿಯಾಗಿ ಸ್ಪಂದನೆ ನೀಡುತ್ತಿಲ್ಲ ಎಂದು ದೂರಿದರು. ಜಿಲ್ಲಾಧಿಕಾರಿ ಪ್ರತಿಕ್ರಿಯಿಸಿ ಪಾಲಿಕೆ ಅಧಿಕಾರಿಗಳು ತಮ್ಮ ಇತರೆ ಕೆಲಸಗಳ ನಡುವೆಯೂ ಮ್ಯಾನುಯಲ್ ಸ್ಕ್ಯಾವೆಂಜರ್ಸ್‍ಗಳ ಸಮಸ್ಯೆಗಳನ್ನು ಆಲಿಸಿ ಅವರಿಗೆ ಸೂಕ್ತ ಮಾರ್ಗದರ್ಶನ ನೀಡಿ ಎಂದು ಸೂಚಿಸಿದರು.
ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸಫಾಯಿ ಕರ್ಮಚಾರಿ ಮತ್ತು ಮ್ಯಾನುಯಲ್ ಸ್ಕ್ಯಾವೆಂಜರ್ಸ್‍ಗಳ ಸಮಸ್ಯೆ ಕುರಿತು ಅಹವಾಲುಗಳನ್ನು ಸ್ವೀಕರಿಸಿ ಪರಿಹರಿಸುವ ಭರವಸೆ ನೀಡಿದರು.

ಸಭೆಯಲ್ಲಿ ಜಿ.ಪಂ ಸಿಇಒ ಡಾ.ಎ.ಚನ್ನಪ್ಪ, ಡಿಯುಡಿಸಿ ಅಧಿಕಾರಿ ನಜ್ಮಾ, ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ರಮೇಶ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಮಂಜನಾಯ್ಕ ಸೇರಿದಂತೆ ಮ್ಯಾನುಯಲ್ ಸ್ಕ್ಯಾವೆಂಜರ್ಸ್ ಮೇಲ್ವಿಚಾರಣಾ ಸಮಿತಿ ಸದಸ್ಯರು, ಪದಾಧಿಕಾರಿಗಳು ಹಾಜರಿದ್ದರು.

www.garuda voice.com 9740365719

Leave a Reply

Your email address will not be published. Required fields are marked *

error: Content is protected !!