Agri Products Price: ಕೃಷಿ ಉತ್ಪನ್ನಗಳಿಗೆ ವೈಜ್ಞಾನಿಕ ಬೆಂಬಲ ಬೆಲೆ: ಭಾರತೀಯ ಕಿಸಾನ್ ಸಂಘ ದಿಂದ ಜಿಲ್ಲಾಡಳಿತ ಭವನ ಬಳಿ ಪ್ರತಿಭಟನೆ

IMG-20210908-WA0008

 

ದಾವಣಗೆರೆ: ಕೃಷಿ ಉತ್ಪನ್ನಗಳಿಗೆ ಲಾಭದಾಯಕ ಬೆಲೆ ಘೋಷಿಸುವಂತೆ ಒತ್ತಾಯಿಸಿ ಭಾರತೀಯ ಕಿಸಾನ್ ಸಂಘದ ಜಿಲ್ಲಾ ಘಟಕದಿಂದ ನಗರದ ಜಿಲ್ಲಾಧಿಕಾರಿಗಳ ಕಛೇರಿ ಎದುರು ಇಂದು ಧರಣಿ ಸತ್ಯಾಗ್ರಹ ನಡೆಸಲಾಯಿತು.‌ ನಂತರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಜೀವನಕ್ಕೆ ಅತ್ಯಾವಶ್ಯಕವಾಗಿ ಬೇಕಾದ ಆಹಾರವನ್ನು ಉತ್ಪಾದಿಸುವ ಕೃಷಿ ಕ್ಷೇತ್ರವು ಇಂದು ದುಸ್ಥಿತಿಯತ್ತ ಸಾಗುತ್ತಿದೆ. 1990 ರ ದಶಕದಿಂದ 3.5 ಲಕ್ಷಕ್ಕೂ ಅಧಿಕ ರೈತರು ಆತ್ಮಹತ್ಯೆಯ ದಾರಿ ಹಿಡಿದಿದ್ದಾರೆ. ಪ್ರತಿ ವರ್ಷ ಕೃಷಿ ತ್ಯಜಿಸಿ ನಗರದತ್ತ ಸಾಗುತ್ತಿರುವವರ ಸಂಖ್ಯೆ ಗಣನೀಯವಾಗಿ ಏರುತ್ತಿದೆ. ರೈತರು ತಾವು ಬೆಳೆದ ಬೆಳೆಗಳ ಒಳಸುರಿಗಳ ವೆಚ್ಚ ಅಧಿಕವಾಗಿ ಪ್ರಕೃತಿ ವಿಕೋಪದಿಂದ ನಷ್ಟವುಂಟಾಗಿ ಮತ್ತು ಲಾಭದಾಯಕ ಬೆಲೆ ಸಿಗದ ಕಾರಣ ಕೃಷಿಯಿಂದ ವಿಮುಖರಾಗುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಬೇರೆ ಕ್ಷೇತ್ರಗಳ ಉತ್ಪಾದಕರು ತಾವು ಉತ್ಪಾದಿಸಿದ ಉತ್ಪನ್ನಗಳಿಗೆ ತಾವೇ ದರ ನಿಗದಿಪಡಿಸಿದ್ದು, ರೈತನಿಗೆ ಮಾತ್ರ ಇದು ಸಾಧ್ಯವಾಗುತ್ತಿಲ್ಲ . ಮತ್ಯಾರೋ ದರ ನಿಗದಿ ಮಾಡುತ್ತಿದ್ದಾರೆ. ಇದೇ ಪರಿಸ್ಥಿತಿ ಹೀಗೆ ಮುಂದುವರಿದರೆ ಕೃಷಿ ಕ್ಷೇತ್ರ ಅವನತಿಗೊಂಡು ಆಹಾರದ ಅಭಾವ ಉಂಟಾಗುತ್ತದೆ ಎಂದರು.
ಈ ವ್ಯವಸ್ಥೆ ಸರಿಯಾಗಬೇಕಾದರೆ ರೈತರಿಗೆ ಉತ್ಪಾದನಾ ವೆಚ್ಚದ ಆಧಾರದ ಮೇಲೆ ಲಾಭದಾಯಕ ಬೆಲೆ ದೊರೆಯುವಂತಾಗಬೇಕು .

ರೈತರ ಆದಾಯ ದ್ವಿಗುಣಗೊಳ್ಳಬೇಕೆಂಬುದು ಸರ್ಕಾರದ ಒಳ್ಳೆಯ ಚಿಂತನೆಯೇ ಸರಿ. ಆದರೆ ಸರ್ಕಾರ ಕೇವಲ ಕನಿಷ್ಠ ಬೆಂಬಲ ಬೆಲೆಯನ್ನು ( ಎಂಎಸ್ ಪಿ ) ಘೋಷಿಸಿದರೆ ಸಾಲದು ರೈತನ ಉತ್ಪನ್ನಗಳಿಗೆ ಲಾಭದಾಯಕ ಬೆಲೆ ಘೋಷಿಸಿ , ಖರೀದಿ ಗ್ಯಾರಂಟಿ ನೀಡಿ , ಘೋಷಿತ ಬೆಲೆಗಿಂತ ಕಡಿಮೆ ಬೆಲೆಗೆ ಖರೀದಿಯಾಗಬಾರದು. ರೈತ ಗೌರವಯುತ ಜೀವನ ನಡೆಸಬೇಕಾದರೆ ಉತ್ಪನ್ನಗಳಿಗೆ ಲಾಭದಾಯಕ ಬೆಲೆ ಘೋಷಿಸಿ , ಖರೀದಿಸಬೇಕೆಂದು ಒತ್ತಾಯಿಸಿದರು.

ಪ್ರತಿ ವರ್ಷ ಬೆಲೆ ಘೋಷಣೆಯು ಹಣದುಬ್ಬರ ದರಕ್ಕೆ ಅನುಗುಣವಾಗಿರಲಿ. ಮಂಡಿ ಒಳಗೆ ಅಥವಾ ಹೊರಗೆ ಘೋಷಿತ ಬೆಲೆಗಿಂತ ಕಡಿಮೆ ದರದಲ್ಲಿ ಖರೀದಿಸಿದರೆ ಶಿಕ್ಷಾರ್ಹವಾಗಿಸಬೇಕು . ಈ ಮೇಲ್ಕಂಡ ಅಂಶಗಳನ್ನು ಕಠಿಣ ಕಾನೂನು ರೂಪಿಸುವುದರ ಮೂಲಕ ಜಾರಿಗೊಳಿಸಬೇಕು. ಇಲ್ಲದಿದ್ದರೆ ಭಾರತೀಯ ಕಿಸಾನ್ ಸಂಘವು ಮುಂಬರುವ ಅಧಿವೇಶನದಲ್ಲಿ ಸಂಸದರ ಮೂಲಕ ಒತ್ತಡ ಹೇರಿ ಖಾಸಗಿ ಬಿಲ್ ಮಂಡಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ಸಂಘಟನೆಯ ಜಿಲ್ಲಾಧ್ಯಕ್ಷ ಚಿದಾನಂದಪ್ಪ, ಪ್ರಾಂತ ಕಾರ್ಯದರ್ಶಿ ಪ್ರವೀಣ್, ಮಹಿಳಾ ಪ್ರಮುಖ ವಸಂತಮ್ಮ, ಕೋಶಾಧ್ಯಕ್ಷ ಎಂ.ಕೆ. ಶಾಂತರಾಜ್, ತಿಪ್ಪೇಶ್, ಮುರುಗೇಶ್, ಹನುಮಂತಪ್ಪ, ಸಂತೋಷ್, ಪ್ರಭು, ನೀಲಕಂಠ ಸೇರಿದಂತೆ ಮತ್ತಿತರರು ಇದ್ದರು

Leave a Reply

Your email address will not be published. Required fields are marked *

error: Content is protected !!