ಬೊಮ್ಮಾಯಿ ಸರ್ಕಾರದ ಭ್ರಷ್ಟಾಚಾರದ ವಿರುದ್ದ ಆಕ್ರೋಶ ಸ್ಫೋಟ; ಮಾರ್ಚ್ 9ರಂದು ‘ಕರ್ನಾಟಕ ಬಂದ್‌’ಗೆ ಕರೆ..

An outburst of outrage against the corruption of the Bommai government; Call for 'Karnataka Bandh' on March 9.

ಬೊಮ್ಮಾಯಿ ಸರ್ಕಾರದ ಭ್ರಷ್ಟಾಚಾರದ ವಿರುದ್ದ ಆಕ್ರೋಶ ಸ್ಫೋಟ

ಬೆಂಗಳೂರು: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರನ ಲಂಚಾವತಾರ ಪ್ರಕರಣ ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿರುವಂತೆಯೇ, ಬೊಮ್ಮಾಯಿ ಸರ್ಕಾರದ ಭ್ರಷ್ಟಾಚಾರ ಆರೋಪಗಳನ್ನು ಖಂಡಿಸಿ ಪ್ರತಿಪಕ್ಷ ಕಾಂಗ್ರೆಸ್ ಮಾರ್ಚ್ 9ರಂದು ಕರ್ನಾಟಕ ಬಂದ್‌ಗೆ ಕರೆ ನೀಡಿದೆ.
ಈ ಕುರಿತಂತೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಭ್ರಷ್ಟ ಜನತಾ ಪಕ್ಷದ (ಬಿಜೆಪಿ) ಭ್ರಷ್ಟಾಚಾರ ವಿರೋಧಿಸಿ ಕರ್ನಾಟಕ ಬಂದ್ ನಡೆಸಲಾಗುವುದು ಎಂದಿದ್ದಾರೆ.

ಭ್ರಷ್ಟಾಚಾರದ ಕಿಂಗ್ ಆಗಿರುವ ಬಿಜೆಪಿ ವಿರುದ್ಧ ಕಾಂಗ್ರೆಸ್ ಹೋರಾಟ ಇದಾಗಿದೆ ಎಂದಿರುವ ಡಿಕೆಶಿ, ರಾಜ್ಯದಲ್ಲಿ ಬಿಜೆಪಿಯ ಭ್ರಷ್ಟಾಚಾರದ ದುರ್ವಾಸನೆ ವಾಕರಿಕೆ ತರಿಸಿದೆ. 40% ಸರ್ಕಾರ ಎಲ್ಲ ವರ್ಗದ ಜನರ ಬದುಕು ನಾಶ ಮಾಡಿದೆ. ಭ್ರಷ್ಟಾಸುರ ಬೊಮ್ಮಾಯಿ ಸರ್ಕಾರವು ಭ್ರಷ್ಟಾಚಾರದಿಂದ, ಭ್ರಷ್ಟಾಚಾರಕ್ಕಾಗಿ, ಭ್ರಷ್ಟಾಚಾರಕ್ಕೋಸ್ಕರದ ಸರ್ಕಾರವಾಗಿದೆ ಎಂದು ಆರೋಪಿಸಿದ್ದಾರೆ.

ಬಿಜೆಪಿ ಸರ್ಕಾರದ ವಿರುದ್ಧದ ಆರೋಪಗಳು ;

  • ಪ್ರತಿಯೊಂದು ಗುತ್ತಿಗೆಯಲ್ಲೂ 40% ಕಮಿಷನ್,

  • ಶಾಲಾ ಅನುದಾನದಲ್ಲಿ 40% ಕಮಿಷನ್

  • ಧಾರ್ಮಿಕ ಮಠಗಳ ಅನುದಾನದಲ್ಲಿ 30% ಕಮಿಷನ್

  • ಮೈಸೂರು ಸ್ಯಾಂಡಲ್ ಸೋಪ್ ಅಕ್ರಮದಲ್ಲಿ ಲಂಚ

  • ವರ್ಗಾವಣೆ, ಪೋಸ್ಟಿಂಗ್‌ಗೆ ಲಂಚ

  • ಪಿಎಸ್ಐ, ಸಹಾಯಕ ಪ್ರಾಧ್ಯಾಪಕ, ಸಹಾಯಕ ಇಂಜಿನಿಯರ್, ಜೂನಿಯರ್ ಇಂಜಿನಿಯರ್, ಜಿಲ್ಲಾ ಸಹಕಾರಿ ಬ್ಯಾಂಕ್, ಪೌರಕಾರ್ಮಿಕ ಕೆಲಸ, ಕೆಎಂಎಫ್ ಹುದ್ದೆ, ಸಹಾಯಕ ರಿಜಿಸ್ಟ್ರಾರ್ ಹುದ್ದೆ ನೇಮಕಾತಿ ಅಕ್ರಮಗಳು.

ಸಾರ್ವಜನಿಕರಿಗೆ ತೊಂದರೆ ಆಗದಂತೆ ಎಚ್ಚರವಹಿಸಲು ಬೆಳಗ್ಗೆ 9 ಗಂಟೆಯಿಂದ ಬೆಳಗ್ಗೆ 11 ಗಂಟೆವರೆಗೂ ಸಾಂಕೇತಿಕ ಬಂದ್ ಮಾಡಲಾಗುವುದು. ಶೈಕ್ಷಣಿಕ ಸಂಸ್ಥೆಗಳು, ಆಸ್ಪತ್ರೆ, ಸಾರಿಗೆ ಹಾಗೂ ಇತರ ಅಗತ್ಯ ಸೇವೆಗಳನ್ನು ಬಂದ್ ವ್ಯಾಪ್ತಿಯಿಂದ ಹೊರಗಿಡಲು ತೀರ್ಮಾನಿಸಲಾಗಿದೆ ಎಂದಿರುವ ಡಿಕೆಶಿ, ಕಾಂಗ್ರೆಸ್ ಪಕ್ಷ ರಾಜ್ಯದ ಪ್ರತಿ ನಗರದಲ್ಲಿ ಬಿಜೆಪಿ ಹಾಗೂ ಬೊಮ್ಮಾಯಿ ಸರ್ಕಾರದ ಭ್ರಷ್ಟಾಚಾರ ವಿರೋಧಿಸಿ ಪ್ರತಿಭಟನೆ ನಡೆಸಲಿದೆ. ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಕನ್ನಡಿಗರು ಈ ಭ್ರಷ್ಟ ಸರ್ಕಾರವನ್ನು ಕಿತ್ತೊಗೆಯಲು ಪಣ ತೊಟ್ಟಿದ್ದಾರೆ ಎಂದರು.

ನಮ್ಮ ಬೇಡಿಕೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ರಾಜೀನಾಮೆ ನೀಡಬೇಕು ಅಥವಾ ಅವರನ್ನು ವಜಾಗೊಳಿಸಬೇಕು ಎಂಬುದಾಗಿದೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!