ದಾವಣಗೆರೆ: ಅಖಿಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರಾಧ್ಯಕ್ಷ ಡಾ. ಶಾಮನೂರು ಶಿವಶಂಕರಪ್ಪ ಅವರನ್ನು ಸಿಎಂ ಆಗಿ ನೇಮಕ ಮಾಡಬೇಕು ಹಾಗೂ ಮಾಜಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಅವರಿಗೆ ಕ್ಯಾಬಿನೆಟ್ ದರ್ಜೆ ಸಚಿವ ಸ್ಥಾನ ನೀಡಬೇಕು ಎಂದು ಮಹಾನಗರ ಪಾಲಿಕೆ ವಿರೋಧ ಪಕ್ಷದ ಮಾಜಿ ನಾಯಕ ಗಡಿಗುಡಾಳ್ ಮಂಜುನಾಥ್ ಮನವಿ ಮಾಡಿದ್ದಾರೆ.
93 ವರ್ಷ ವಯಸ್ಸಿನ ಕಾಂಗ್ರೆಸ್‌ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪನವರು ಯಾವುದೇ ಅಧಿಕಾರಕ್ಕೆ ಆಸೆ ಪಟ್ಟವರಲ್ಲ. ಇದುವರೆಗೆ ವಿಧಾನಸಭೆ ಚುನಾವಣೆಯಲ್ಲಿ ಸೋಲಿಲ್ಲದ ಸರದಾರ ಎನಿಸಿಕೊಂಡಿದ್ದಾರೆ. ಈ ಬಾರಿ ವೀರಶೈವ ಲಿಂಗಾಯತ ಶಾಸಕರು ಕಾಂಗ್ರೆಸ್‌ನಿಂದ ಹೆಚ್ಚಾಗಿ ಆಯ್ಕೆಯಾಗಿದ್ದಾರೆ. ಹಾಗಾಗಿ ಶಾಮನೂರು ಶಿವಶಂಕರಪ್ಪರಿಗೆ ಸಿಎಂ ಸ್ಥಾನ ನೀಡುವ ಮೂಲಕ ಗೌರವ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ದಾವಣಗೆರೆ ಜಿಲ್ಲೆಯ ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ನೀಡಿರುವ ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರಿಗೆ ಒಳ್ಳೆಯ ಖಾತೆ ನೀಡಬೇಕು. ಕ್ಯಾಬಿನೆಟ್ ದರ್ಜೆಯ ಸ್ಥಾನಮಾನ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ತಂದೆ – ಮಗ ಕಾಂಗ್ರೆಸ್ ಪಕ್ಷಕ್ಕಾಗಿ ದುಡಿದಿದ್ದಾರೆ. ಜಿಲ್ಲೆಯ ಹರಪನಹಳ್ಳಿ ಸೇರಿದಂತೆ ಏಳು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಲು ಪ್ರಮುಖ ಕಾರಣಕರ್ತರಾಗಿದ್ದಾರೆ. ವೀರಶೈವ ಲಿಂಗಾಯತ ಸಮುದಾಯಕ್ಕೆ ಆದ್ಯತೆ ನೀಡಬೇಕು ಎಂದು ಕಾಂಗ್ರೆಸ್ ಹೈಕಮಾಂಡ್ ಅನ್ನು ಆಗ್ರಹಿಸಿದ್ದಾರೆ.
