ಮುಂದಿನ ಚುನಾವಣೆವರೆಗೂ ಬೊಮ್ಮಾಯಿಯವರೆ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ – ಬಿ ವೈ ವಿಜಯೇಂದ್ರ

ದಾವಣಗೆರೆ: ಬಿಟ್ ಕಾಯಿನ್ ಪ್ರಕರಣದಲ್ಲಿ ಬಿಜೆಪಿಯವರು ಭಾಗಿಯಾಗಿದ್ದಾರೆ ಎಂದು ಕಾಂಗ್ರೆಸ್ ಮಾಡಿರುವ ಆರೋಪದಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಸ್ಪಷ್ಟ ಪಡಿಸಿದ್ದಾರೆ.
ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಕಾಂಗ್ರೆಸ್‌ನವರು ರಾಜ್ಯದ ಜನರ ದಾರಿ ತಪ್ಪಿಸುವ ಪ್ರಯತ್ನ ಮಾಡುತ್ತಿದ್ದಾರೆ. ಅವರ ಆರೋಪದಲ್ಲಿ ಯಾವುದೇ ಹುರುಳಿಲ್ಲ. ಅಸಲಿಗೆ ಕಾಂಗ್ರೆಸ್ ಮುಖಂಡರೇ ಪ್ರಕರಣದಲ್ಲಿ ಭಾಗಿಯಾಗಿರುವುದು ಕಂಡುಬಂದಿದೆ ಎಂದು ಆರೋಪಿಸಿದರು.
ಈಗ ವಿಧಾನ ಪರಿಷತ್ ಚುನಾವಣೆ ಘೋಷಣೆಯಾಗಿದ್ದು, ಕಾಂಗ್ರೆಸ್‌ನವರಿಗೆ ಚುನಾವಣೆ ಎದುರಿಸಲು ಯಾವುದೇ ಸಾಧನೆಗಳಿಲ್ಲ. ಆದ್ದರಿಂದ ಬಿಟ್‌ಕಾಯಿನ್ ವಿಚಾರಕ್ಕೆ ಮುನ್ನೆಲೆಗೆ ತರುತ್ತಿದ್ದಾರೆ. ಸರ್ಕಾರವನ್ನು ಈ ಪ್ರಕರಣದಲ್ಲಿ ಎಳೆದು ತರುವ ಪ್ರಯತ್ನ ನಡೆಸಿದ್ದಾರೆ ಎಂದು ಕಿಡಿಕಾರಿದರು.
ಮುಖ್ಯಮಂತ್ರಿ ಬದಲಾವಣೆಯ ಮಾತು ಕಪೋಲ ಕಲ್ಪಿತವಾದದ್ದು, ಇದೆಲ್ಲ ಕಾಂಗ್ರೆಸ್ ಪಕ್ಷದ ಪಿತೂರಿ ಅಷ್ಟೇ. ಮುಂದಿನ ಚುನಾವಣೆವರೆಗೂ ಬೊಮ್ಮಾಯಿಯವರೆ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ ಎಂದು ಹೇಳಿದರು.
ಬಿಟ್‌ಕಾಯಿನ್ ಪ್ರಕರಣದಲ್ಲಿ ಯಾರೇ ಪ್ರಭಾವಿಗಳಿದ್ದರು ಅವರ ಮೇಲೆ ತನಿಖೆ ಆಗುತ್ತದೆ. ಅವರನ್ನು ಬಿಡುವ ಪ್ರಶ್ನೆಯೇ ಇಲ್ಲ ಎಂದು ಈಗಾಗಲೇ ಮುಖ್ಯಮಂತ್ರಿಗಳು ಸ್ಪಷ್ಟವಾಗಿ ಹೇಳಿದ್ದಾರೆ. ತನಿಖೆ ನಡೆಸಿದ ನಂತರ ತಪ್ಪಿತಸ್ಥರು ಯಾರೆಂಬುದು ತಿಳಿಯಲಿದೆ. ಆಗ ಅವರ ವಿರುದ್ಧ ಕಾನೂನು ಕ್ರಮ ಜರುಗಲಿದೆ ಎಂದು ಹೇಳಿದರು.
ರಾಜ್ಯದ ೨೫ ವಿಧಾನ ಪರಿಷತ್ ಚುನಾವಣೆ ನಡೆಯಲಿದ್ದು, ಬಿಜೆಪಿ ಈ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದೆ. ಎಲ್ಲ ಕ್ಷೇತ್ರಗಳಲ್ಲೂ ಬಿಜೆಪಿಗೆ ಗೆಲುವು ಸಿಗುವ ಅವಕಾಶ ಹೆಚ್ಚಾಗಿದೆ. ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರೊಂದಿಗೆ ಚರ್ಚೆ ನಡೆದಿದ್ದು, ಅತಿ ಹೆಚ್ಚು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.