ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಅವರಿಗೆ ಅವರ ನಿವಾಸದಲ್ಲೇ ಭಾರತ ರತ್ನ ಪ್ರಶಸ್ತಿ ಪ್ರದಾನ
ಬಿಜೆಪಿ ಹಿರಿಯ ನಾಯಕ, ಮಾಜಿ ಗೃಹ ಸಚಿವ ಎಲ್.ಕೆ.ಅಡ್ವಾಣಿ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಗೌರವ ಭಾರತ ರತ್ನ ಪ್ರಶಸ್ತಿಯನ್ನು ಅವರ ನಿವಾಸದಲ್ಲೇ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರದಾನ ಮಾಡಿದರು.
ಈ ವೇಳೆ ಪ್ರಧಾನಿ ನರೇಂದ್ರ ಮೋದಿ , ಉಪರಾಷ್ಟ್ರಪತಿ ಜಗದೀಪ್ ಧನಕರ್, ಮಾಜಿ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಉಪಸ್ಥಿತರಿದ್ದರು.
ಶನಿವಾರ ರಾಷ್ಟ್ರಪತಿ ಭವನದಲ್ಲಿ ಮಾಜಿ ಪ್ರಧಾನಿಗಳಾದ ಚೌಧರಿ ಚರಣ್ ಸಿಂಗ್, ಪಿ.ವಿ. ನರಸಿಂಹ ರಾವ್, ಕೃಷಿ ವಿಜ್ಞಾನಿ ಎಂ.ಎಸ್. ಸ್ವಾಮಿನಾಥನ್ ಮತ್ತು ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್ ಅವರಿಗೆ ಮರಣೋತ್ತರವಾಗಿ ಭಾರತ ರತ್ನ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗಿತ್ತು. ಅನಾರೋಗ್ಯದ ಕಾರಣ ಶನಿವಾರ ನಡೆದ ಸಮಾರಂಭದಲ್ಲಿ ಭಾರತ ರತ್ನ ಪ್ರಶಸ್ತಿ ಸ್ವೀಕರಿಸಲು ಅಡ್ವಾಣಿ ಆಗಮಿಸಿರಲಿಲ್ಲ.
ಬಿಜೆಪಿ ಹಿರಿಯ ನಾಯಕ ಅಡ್ವಾಣಿ ಅವರಿಗೆ ಭಾರತ ರತ್ನ ನೀಡಲಾಗುವುದು ಪ್ರಧಾನಿ ನರೇಂದ್ರ ಮೋದಿ ಈ ವರ್ಷದ ಫೆಬ್ರವರಿಯಲ್ಲಿ ಪ್ರಕಟಿಸಿದ್ದರು.
ಎಲ್ ಕೆ ಅಡ್ವಾಣಿ ಜಿ ಅವರಿಗೆ ಭಾರತ ರತ್ನ ನೀಡಲಾಗುವುದು ಎಂದು ಹಂಚಿಕೊಳ್ಳಲು ನನಗೆ ತುಂಬಾ ಸಂತೋಷವಾಗಿದೆ. ನಾನು ಕೂಡ ಅವರೊಂದಿಗೆ ಮಾತನಾಡಿ ಈ ಗೌರವಕ್ಕೆ ಪಾತ್ರರಾಗಿದ್ದಕ್ಕೆ ಅಭಿನಂದಿಸಿದ್ದೇನೆ ಎಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಿ ತಿಳಿಸಿದ್ದರು