ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ 150ಕ್ಕೂ ಹೆಚ್ಚು ಸ್ಥಾನ ಖಚಿತ: ಧರ್ಮೇಂದ್ರ ಪ್ರಧಾನ್

ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ 150ಕ್ಕೂ ಹೆಚ್ಚು ಸ್ಥಾನ ಖಚಿತ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಅಸೆಂಬ್ಲಿ ಚುನಾವಣೆಯಲ್ಲಿ ಬಿಜೆಪಿ 150ಕ್ಕೂ ಹೆಚ್ಚು ಶಾಸಕ ಸ್ಥಾನಗಳನ್ನು ಗೆಲ್ಲಲಿದೆ ಎಂದು ಕೇಂದ್ರ ಸಚಿವ ಮತ್ತು ಕರ್ನಾಟಕದ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಪಕ್ಷವು ಉತ್ತಮ ಸಂಘಟನೆಯನ್ನು ಹೊಂದಿದೆ. ರೈತರು, ಮಹಿಳೆಯರು, ಎಸ್ಸಿ, ಎಸ್ಟಿ, ಒಬಿಸಿ ಸಮುದಾಯದ ಅಭಿವೃದ್ಧಿ, ಕರಾವಳಿ ಪ್ರದೇಶ ಸೇರಿ ರಾಜ್ಯದ ಅಭಿವೃದ್ಧಿಗೆ ಮಾಡಿದ ಕೆಲಸಗಳು ಮಾತ್ರವಲ್ಲದೆ ಮೋದಿಜಿ ಅವರ ನಾಯಕತ್ವದಿಂದ ನಮ್ಮ ಗೆಲುವು ಸುಲಭವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕರ್ನಾಟಕ ರಾಜ್ಯವು ಹಲವು ದಶಕಗಳಿಂದ ಬಿಜೆಪಿ ಭದ್ರಕೋಟೆಯಾಗಿದೆ. ಇಲ್ಲಿನ ಜನರು ಪ್ರಧಾನಿ ನರೇಂದ್ರ ಮೋದಿಜಿ ಅವರ ಜೊತೆಗಿದ್ದಾರೆ ಎಂಬ ವಿಶ್ವಾಸ ನನಗಿದೆ. ಮೋದಿಜಿ ಅವರ ಸರಕಾರ, ಯಡಿಯೂರಪ್ಪ- ಬಸವರಾಜ ಬೊಮ್ಮಾಯಿ ಅವರ ಸರಕಾರಗಳು ಮಾಡಿದ ಸಾಧನೆಯ ಹಿನ್ನೆಲೆ ನಮಗಿದೆ ಎಂದರು.
ಪ್ರಧಾನಿ ನರೇಂದ್ರ ಮೋದಿಯವರು ಈಗಾಗಲೇ ಕೆಲವು ಬಾರಿ ರಾಜ್ಯಕ್ಕೆ ಭೇಟಿ ಕೊಟ್ಟಿದ್ದು, ಇನ್ನಷ್ಟು ಬಾರಿ ಬರಲಿದ್ದಾರೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಜ್ಯದ ಉಸ್ತುವಾರಿ ಅರುಣ್ ಸಿಂಗ್ ಅವರು ರಾಜ್ಯದಲ್ಲಿ ಪ್ರವಾಸ ಮಾಡುತ್ತಿದ್ದಾರೆ. ಅವರೆಲ್ಲರೂ ಪಕ್ಷಕ್ಕಾಗಿ ಪ್ರಚಾರ ಮಾಡಲಿದ್ದಾರೆ. ಶೀಘ್ರದಲ್ಲೇ ಪ್ರಚಾರ ಯಾತ್ರೆಗಳನ್ನು ಆರಂಭಿಸಲಾಗುತ್ತದೆ. ಯಾತ್ರೆಯಲ್ಲಿ ಕೇಂದ್ರ ಮತ್ತು ರಾಜ್ಯದ ಹಿರಿಯ ನಾಯಕರು ಭಾಗವಹಿಸಿ ಸಾಧನೆಗಳನ್ನು ಜನರಿಗೆ ತಿಳಿಸಲಿದ್ದಾರೆ ಎಂದು ತಿಳಿಸಿದರು.
ಕೇಂದ್ರ ಸಚಿವ ಮತ್ತು ಕರ್ನಾಟಕದ ಚುನಾವಣಾ ಸಹ ಉಸ್ತುವಾರಿ ಮನ್ಸುಖ್ ಮಾಂಡವೀಯ ಮತ್ತು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಚುನಾವಣಾ ಸಹ ಉಸ್ತುವಾರಿ ಕೆ. ಅಣ್ಣಾಮಲೈ, ಸಂಸದ ಪಿ.ಸಿ.ಮೋಹನ್, ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥನಾರಾಯಣ್, ರಾಜ್ಯ ಮುಖ್ಯ ವಕ್ತಾರ ಮಹೇಶ್ ಎಂ.ಜಿ ಅವರು ಹಾಜರಿದ್ದರು.

Leave a Reply

Your email address will not be published. Required fields are marked *

error: Content is protected !!