ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ಖಂಡಿಸಿ ಬಿಜೆಪಿ ಎಸ್ ಸಿ ಮೋರ್ಚಾ ದಿಂದ ಪ್ರತಿಭಟನೆ

ದಾವಣಗೆರೆ: ದಲಿತರ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿರುವ ಮಾಜಿ ಸಿಎಂ, ವಿಪಕ್ಷನಾಯಕ ಸಿದ್ದರಾಮಯ್ಯ ವಿರುದ್ಧ ನಗರದಲ್ಲಿ ಬುಧವಾರ ಜಿಲ್ಲಾ ಬಿಜೆಪಿ ಎಸ್‌ಸಿ ಮೋರ್ಚಾದಿಂದ ಪ್ರತಿಭಟನೆ ನಡೆಸಲಾಯಿತು.
ನಗರದ ಜಿಲ್ಲಾ ಬಿಜೆಪಿ ಕಾರ್ಯಾಲಯದಿಂದ ಪ್ರತಿಭಟನಾ ಮೆರವಣಿಗೆ ಹೊರಟ ಪ್ರತಿಭಟನಾಕಾರರು ಅಂಬೇಡ್ಕರ್ ವೃತ್ತಕ್ಕೆ ತೆರಳಿ, ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿ, ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾ ಬಿಜೆಪಿ ಎಸ್‌ಸಿ ಮೋರ್ಚಾ ಅಧ್ಯಕ್ಷ ಹನುಮಂತ ನಾಯ್ಕ ಮಾತನಾಡಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ದಲಿತರು ಹೊಟ್ಟೆ ಪಾಡಿಗಾಗಿ ಬಿಜೆಪಿ ಹೋಗಿದ್ದಾರೆಂದು ಹೇಳುವ ಮೂಲಕ ಇಡೀ ದಲಿತ ಸಮುದಾಯಕ್ಕೆ ಅಪಮಾನ ಮಾಡಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದರು.
ಅಹಿಂದ ಪರ ಎನ್ನುವ ಸಿದ್ದರಾಮಯ್ಯನವರಿಗೆ ಚುನಾವಣೆ ವೇಳೆಯಲ್ಲಿ ಮಾತ್ರ ದಲಿತರು ನೆನಪಾಗುತ್ತಾರೆ. ದಲಿತರನ್ನು ಕೇವಲ ಮತಬ್ಯಾಂಕ್‌ಗೆ ಮಾತ್ರ ಬಳಸಿಕೊಳ್ಳುತ್ತಾರೆ. ಮಾಜಿ ಮುಖ್ಯಮಂತ್ರಿಯಾಗಿದ್ದ ಅವರಿಗೆ ಇಂತಹ ಹೇಳಿಕೆ ಶೋಭೆ ತರುವುದಿಲ್ಲ ಎಂದರು.
ಶಾಸಕ ಪ್ರೊ. ಲಿಂಗಣ್ಣ ಮಾತನಾಡಿ, ಸಿಂಧಗಿ ಉಪ ಚುನಾವಣೆಯಲ್ಲಿ ಸೋತು ಹತಾಶರಾಗಿರುವ ಕಾರಣ ಸಿದ್ದರಾಮಯ್ಯನವರು ದಲಿತರಿಗೆ ಅಪಮಾನ ಮಾಡುವ ರೀತಿಯಲ್ಲಿ ಮಾತನಾಡಿದ್ದಾರೆ. ದಲಿತರು ಹೊಟ್ಟೆಪಾಡಿಗಾಗಿ ಯಾವ ಪಕ್ಷವನ್ನು ಸೇರುವುದಿಲ್ಲ. ಅವರೇನಿದ್ದರೂ ಶ್ರಮಿಕವರ್ಗದವರು. ಕೂಡಲೇ ಸಿದ್ದರಾಮಯ್ಯ ತಾವು ನೀಡಿರುವ ಹೇಳಿಕೆಗೆ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದರು.
ಮಾಜಿ ಶಾಸಕ ಎಂ.ಬಸವರಾಜ ನಾಯ್ಕ ಮಾತನಾಡಿ, ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಬೇಳೆ ಬೇಯಿಸಿಕೊಳ್ಳುವಾಗ ಮಾತ್ರ ದಲಿತರು ನೆನಪಾಗುತ್ತಾರೆ. ನಂತರ ದಲಿತರನ್ನು ಮರೆತುಬಿಡುತ್ತಾರೆ. ಬಿಜೆಪಿ ದಲಿತರ ಅಭ್ಯುದಯಕ್ಕೆ ಶ್ರಮನಿಸುತ್ತಿದೆ. ಹಾಗಾಗಿ, ದಲಿತರು ಬಿಜೆಪಿಗೆ ಸೇರ್ಪಡೆಗೊಳ್ಳುತ್ತಿದ್ದಾರೆ ಎಂದರು.
ಪ್ರತಿಭಟನೆಯಲ್ಲಿ ಮಹಾನಗರ ಪಾಲಿಕೆ ಮಹಾಪೌರ ಎಸ್.ಟಿ.ವೀರೇಶ್, ಪ್ರಧಾನ ಕಾರ್ಯದರ್ಶಿ ಜಿ.ವಿ. ಗಂಗಾಧರ್ ಮುಖಂಡರಾದ ಅಂಜನಪ್ಪ, ಎಲ್.ಡಿ ಗೋಣೆಪ್ಪ, ಮಂಜಾ ನಾಯಕ್, ಸಂಗನಗೌಡ್ರು, ದೇವೇಂದ್ರಪ್ಪ, ಕೃಷ್ಣಮೂರ್ತಿ ಸೇರಿದಂತೆ ಇತರರು ಭಾಗವಹಿಸಿದ್ದರು.