ರೈತರ ಕಲ್ಯಾಣಕ್ಕೆ ಒತ್ತು ನೀಡಿರುವ ಬಜೆಟ್: ಸಹಕಾರ ಸಚಿವ ST ಸೋಮಶೇಖರ್

ಸಹಕಾರ ಸಚಿವ ST ಸೋಮಶೇಖರ್
ಬೆಂಗಳೂರು: ರೈತರ ಕಲ್ಯಾಣಕ್ಕೆ ಒತ್ತು ನೀಡಿರುವ ಬಜೆಟ್ ಇದಾಗಿದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಬಣ್ಣಿಸಿದ್ದಾರೆ. ರೈತರ ಸಾಲದ ಮಿತಿ ಹೆಚ್ಚಳ, 10 ಸಾವಿರ ರೂ. ಹೆಚ್ಚುವರಿ ಸಹಾಯಧನದ ಘೋಷಣೆ ಸ್ವಾಗತಾರ್ಹ ಎಂದವರು ಹೇಳಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಿರುವ ಬಜೆಟ್ ಕುರಿತಂತೆ ಪ್ರತಿಕ್ರಿಯಿಸಿರುವ ಸಚಿವ ಎಸ್.ಟಿ.ಸೋಮಶೇಖರ್, ರೈತರ ಆರ್ಥಿಕ ಅಭಿವೃದ್ಧಿಗೆ ಒತ್ತು ನೀಡಿದೆ. ಎಲ್ಲಾ ವರ್ಗದ ಜನತೆಯ ಹಿತ ಕಾಯುವ ಜನಪರ ಬಜೆಟ್ ಇದಾಗಿದೆ ಎಂದಿದ್ದಾರೆ.
ರೈತರಿಗೆ ನೀಡುವ ಬಡ್ಡಿ ರಹಿತ ಅಲ್ಪಾವಧಿ ಸಾಲದ ಮಿತಿಯನ್ನು 3 ಲಕ್ಷ ರೂ.ಗಳಿಂದ 5 ಲಕ್ಷ ರೂ.ಗಳಿಗೆ ಹೆಚ್ಚಿಸುವ ಮೂಲಕ ರೈತರ ಕಲ್ಯಾಣಕ್ಕೆ ಒತ್ತು ನೀಡಲಾಗಿದೆ. 30 ಲಕ್ಷಕ್ಕಿಂತ ಹೆಚ್ಚಿನ ರೈತರಿಗೆ 25 ಸಾವಿರ ಕೋಟಿ ರೂ.ಗಳಷ್ಟು ಸಾಲ ವಿತರಿಸಲಾಗುವುದು. ಇದರಿಂದ ರೈತರಿಗೆ ಕೃಷಿ ಚಟುವಟಿಕೆಗಳಿಗೆ ರೈತರಿಗೆ ಸುಲಭವಾಗಿ ಸಾಲ ಸೌಲಭ್ಯ ಸಿಗಲಿದೆ ಎಂದವರು ಹೇಳಿದ್ದಾರೆ.
ಕಿಸಾನ್ ಕ್ರೆಡಿಟ್ ಕಾರ್ಡ್ ಹೊಂದಿರುವ ರೈತರಿಗೆ ‘ಭೂಸಿರಿ’ ಎಂಬ ನೂತನ ಯೋಜನೆಯಡಿ 10 ಸಾವಿರ ರೂ.ಗಳ ಹೆಚ್ಚುವರಿ ಸಹಾಯಧನ ನೀಡಲು ನಿರ್ಧರಿಸಲಾಗಿದೆ. ಈ ಮೊತ್ತದಲ್ಲಿ ರಾಜ್ಯ ಸರ್ಕಾರದ 2500 ರೂ. ಹಾಗೂ ನಬಾರ್ಡ್ ನ 7500 ರೂ. ಸೇರಿದ್ದು, ರಾಜ್ಯದ ಸುಮಾರು 50 ಲಕ್ಷ ರೈತರಿಗೆ ಅನುಕೂಲವಾಗಲಿದೆ. 45 ಸಾವಿರ ಮಹಿಳಾ ಸ್ವಸಹಾಯ ಗುಂಪುಗಳಿಗೆ 1800 ಕೋಟಿ ರೂ.ಗಳಷ್ಟು ಸಾಲವನ್ನು ಶೂನ್ಯ ಬಡ್ಡಿ ದರದಲ್ಲಿ ವಿತರಿಸುವ ಗುರಿ ಹೊಂದುವ ಮೂಲಕ ಮಹಿಳೆಯರು ಆರ್ಥಿಕವಾಗಿ ಸದೃಢರಾಗಲು ಒತ್ತು ನೀಡಲಾಗಿದೆ ಎಂದು ತಿಳಿಸಿದರು.
ಹಾವೇರಿಯಲ್ಲಿ 1 ಲಕ್ಷ ಲೀಟರ್ ಸಾಮರ್ಥ್ಯದ ಮೆಗಾ ಡೈರಿ ಸ್ಥಾಪನೆಗೆ 90 ಕೋಟಿ ರೂ. ಅನುದಾನ ನೀಡುವುದರ ಜೊತೆಗೆ ಬಳ್ಳಾರಿ ಜಿಲ್ಲೆಯಲ್ಲಿ ನಿತ್ಯ 2 ಲಕ್ಷ ಲೀಟರ್ ಹಾಲು ಸಂಸ್ಕರಣಾ ಸಾಮರ್ಥ್ಯದ ಮೆಗಾ ಡೈರಿಯನ್ನು 100 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸುವ ಮೂಲಕ ಹೈನುಗಾರಿಕೆಗೆ ಪ್ರೋತ್ಸಾಹ ನೀಡಲಾಗಿದೆ ಎಂದು ವಿವರಿಸಿದ ಎಸ್.ಸೋಮಶೇಖರ್, ರೈತರು, ಮಹಿಳೆಯರು ಮತ್ತು ಎಲ್ಲಾ ವರ್ಗದ ಜನರ ಹಿತ ಕಾಯುವ ಬಜೆಟ್ ಇದಾಗಿದೆ. ದೂರದೃಷ್ಟಿಯ, ರಾಜ್ಯದ ಸಮಗ್ರ ಅಭಿವೃದ್ಧಿಗೆ ಪೂರಕವಾದ ಬಜೆಟ್ ಇದಾಗಿದೆ ಎಂದೂ ಬಣ್ಣಿಸಿದ್ದಾರ.