ಕೇಂದ್ರ ಬಜೆಟ್ : ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ

ಭದ್ರಾ ಮೇಲ್ದಂಡೆ
ನವದೆಹಲಿ: ಕರ್ನಾಟಕದ ಪ್ರಮುಖ ನೀರಾವರಿ ಯೋಜನೆಯಾದ ಭದ್ರಾ ಮೇಲ್ದಂಡೆ ಯೋಜನೆಗಾಗಿ ಕೇಂದ್ರ ಸರ್ಕಾರ 5,300 ಕೋಟಿ ರೂ.ಗಳನ್ನು ನೀಡಲಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬುಧವಾರ ಮಂಡಿಸಿರುವ ಬಜೆಟ್‌ನಲ್ಲಿ ಘೋಷಿಸಿದ್ದಾರೆ.
ಲೋಕಸಭೆಯಲ್ಲಿಂದು ಬಜೆಟ್ ಮಂಡಿಸಿದ ನಿರ್ಮಲಾ ಸೀತಾರಾಮನ್, ಬರ ಪೀಡಿತ ಮಧ್ಯ ಕರ್ನಾಟಕದಲ್ಲಿ ಭದ್ರಾ ಮೇಲ್ದಂಡೆ ಯೋಜನೆ ಅನುಷ್ಠಾನಕ್ಕಾಗಿ ಕೇಂದ್ರದಿಂದ ರೂ. 5,300 ಕೋಟಿ ನೆರವು ನೀಡಲಾಗುವುದು ಎಂದರು.
ಈ ಯೋಜನೆಯಡಿ ಮೊದಲ ಹಂತದಲ್ಲಿ ತುಂಗಾ ನದಿಯಿಂದ 17.40 ಸಾವಿರ ಮಿಲಿಯನ್ ಟಿಎಂಸಿ ನೀರನ್ನು ಭದ್ರಾಗೆ ಮತ್ತು ಎರಡನೇ ಹಂತದಲ್ಲಿ ಭದ್ರಾ ಜಲಾಶಯದಿಂದ 29.90 ಟಿಎಂಸಿ ನೀರನ್ನು ಕೃಷ್ಣಾ ಜಲಾನಯನ ಪ್ರದೇಶದ ತುಂಗಭದ್ರಾ ಉಪ ಜಲಾನಯನ ಪ್ರದೇಶದಲ್ಲಿರುವ ಅಜ್ಜಂಪುರ ಬಳಿಯ ಸುರಂಗಕ್ಕೆ ಎತ್ತುವ ಉದ್ದೇಶ ಹೊಂದಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಬಾರಿಯ ಬಜೆಟ್ ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ರೂ. 5,300 ಕೋಟಿ ಅನುದಾನ ಒದಗಿಸುವ ಘೋಷಣೆಗಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹಾಗೂ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಧನ್ಯವಾದ ಸಲ್ಲಿಸಿದ್ದಾರೆ. ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸುವಂತೆಯೂ ಮುಖ್ಯಮಂತ್ರಿ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
