ರಾಜ್ಯ ಸರ್ಕಾರಿ ನೌಕರರ ವೇತನ ಹೆಚ್ಚಳಕ್ಕೆ ಆಯೋಗ ರಚನೆ, ವಿಧಾನಸಭೆಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಘೋಷಣೆ
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ ಹೆಚ್ಚಳಕ್ಕೆ ಆಯೋಗ ರಚನೆ ಮಾಡುವುದಾಗಿ ಸಿಎಂ ಬಸವರಾಜ್ ಬೊಮ್ಮಾಯಿ ಇಂದು ವಿಧಾನಸಭೆಯಲ್ಲಿ ಘೋಷಿಸಿದ್ದಾರೆ. ಕೇಂದ್ರ ಸರ್ಕಾರದ ಮಾದರಿಯಲ್ಲಿ ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಮಾಡುವ ಸಂಬಂಧ ಸದ್ಯದಲ್ಲೇ ಆಯೋಗ ರಚನೆ ಮಾಡುವ ಸಾಧ್ಯತೆಯಿದ್ದು, ರಾಜ್ಯ ಸರ್ಕಾರಿ ನೌಕರರಿಗೆ, ಕೇಂದ್ರ ಸರ್ಕಾರಿ ನೌಕರರಿಗೆ ಸರಿಸಮಾನವಾದ ವೇತನ ಜಾರಿ ಮಾಡಬೇಕೆಂಬ ಕೂಗು ಹಲವು ವರ್ಷಗಳಿಂದ ಕೇಳಿಬರುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಈ ಬಜೆಟ್‌ನಲ್ಲಿ ವೇತನ ಆಯೋಗ ರಚಿಸುತ್ತಾರೆ ಎಂಬ ನಿರೀಕ್ಷೆಯಲ್ಲಿ ಸರ್ಕಾರಿ ನೌಕರರು ಇದ್ದರು. ಆದರೆ ಮುಖ್ಯಮಂತ್ರಿಗಳು ಮಂಡಿಸಿದ ಬಜೆಟ್‌ನಲ್ಲಿ ವೇತನ ಆಯೋಗ ರಚನೆ ಬಗ್ಗೆ ಯಾವುದೇ ಪ್ರಸ್ತಾಪ ಮಾಡಿರಲಿಲ್ಲ. ಸೂಕ್ತವಾದ ಸಮಯದಲ್ಲಿ ವೇತನ ಹೆಚ್ಚಳ ಸಂಬಂಧ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದರು. ನೌಕರರ ವೇತನ ಪರಿಷ್ಕರಣೆ ಸಂಬಂಧ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸಹ ಬೊಮ್ಮಾಯಿಯವರಿಗೆ ಈ ಹಿಂದೆ ಪತ್ರ ಬರೆದಿದ್ದರು. ಸದ್ಯ 7ನೇ ವೇತನ ಆಯೋಗ ಅಸ್ತಿತ್ವಕ್ಕೆ ಬರಲಿದ್ದು ನೌಕರರಿಗೆ ಎಷ್ಟು ಪ್ರಮಾಣದಲ್ಲಿ ವೇತನ ಹೆಚ್ಚಳವಾಗಲಿದೆ ಎಂದು ಕಾದು ನೋಡಬೇಕಿದೆ.