Heavy Rain : ಕರಾವಳಿ ಪ್ರದೇಶದಲ್ಲಿ ಇಂದು ಭಾರೀ ಮಳೆಯ ಸಾಧ್ಯತೆ, ಹವಾಮಾನ ಇಲಾಖೆ ಮುನ್ಸೂಚನೆ
ಮಂಗಳೂರು: ಕರಾವಳಿ ಪ್ರದೇಶದಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಮುಂಗಾರು ಬಿರುಸುಗೊಂಡಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಕರಾವಳಿಯಲ್ಲಿ ಗುರುವಾರ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಂಗಳೂರು ಸೇರಿದಂತೆ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದೆ. ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ತಗ್ಗು ಪ್ರದೇಶಗಳು ಜಲಾವೃತವಾಗಿವೆ. ಮಂಗಳೂರು ನಗರದ ಹಲವೆಡೆ ರಸ್ತೆಗಳಲ್ಲಿ ನೀರು ನಿಂತಿದ್ದರಿಂದ, ವಾಹನ ಸಂಚಾರಕ್ಕೂ ಅಡ್ಡಿಯುಂಟಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಮೂಡಬಿದ್ರಿ, ಪುತ್ತೂರು, ಬೆಳ್ತಂಗಡಿ, ಸುಳ್ಯ ಸೇರಿದಂತೆ ಹಲವೆಡೆ ನಿರಂತರ ಮಳೆಯಾಗುತ್ತಿದೆ.
ಉಡುಪಿ ಜಿಲ್ಲೆಯಲ್ಲೂ ವರುಣಾರ್ಭಟ ಮುಂದುವರಿದಿದೆ. ಹೆಬ್ರಿ, ಕಾರ್ಕಳ ಸೇರಿದಂತೆ ಜಿಲ್ಲೆಯ ವಿವಿಧೆಡೆಯಲ್ಲಿ ತಗ್ಗು ಪ್ರದೇಶಗಳು ಜಲಾವೃತವಾಗಿದ್ದರಿಂದ ಆ ಭಾಗದ ಜನರು ಪರದಾಡುವಂತಾಗಿದೆ. ಸಮುದ್ರದ ಅಲೆಗಳ ಅಬ್ವರವೂ ಜೋರಾಗಿದೆ. ಇದೇ ವೇಳೆ, ದಕ್ಷಿಣ ಕನ್ನಡ ಮಾದರಿಯಲ್ಲೇ ಉಡುಪಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಗುರುವಾರವೂ ರಜೆ ವಿಸ್ತರಿಸಲಾಗಿದೆ.
ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲೂ ಭಾರೀ ಮಳೆಯಾಗುತ್ತಿದ್ದು ಹಳ್ಳ ಕೊಳ್ಳಗಳು ತುಂಬಿವೆ. ಉತ್ತರ ಕನ್ನಡ ಜಿಲ್ಲೆಯಲ್ಲೂ ರೆಡ್ ಅಲರ್ಟ್ ಘೋಷಿಸಲಾಗಿದೆ.