ಬೆಂಗಳೂರು: ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ವೀರಶೈವ-ಲಿಂಗಾಯಿತ ಸಮುದಾಯದವರಿಗೆ ಆಯ್ದ 75 ವಿಧಾನಸಭೆ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲು ಅನುವು ಮಾಡಿಕೊಡಬೇಕೆಂದು ಅಖಿಲ ಭಾರತ ವೀರಶೈವ- ಮಹಾಸಭಾದ ಅಧ್ಯಕ್ಷ ಡಾ|| ಶಾಮನೂರು ಶಿವಶಂಕರಪ್ಪನವರು ಎಐಸಿಸಿಗೆ ಆಗ್ರಹಿಸಿದ್ದಾರೆ.
ಇಂದು ಬೆಂಗಳೂರಿನಲ್ಲಿ ಎಐಸಿಸಿ ಸ್ಕ್ರಿನಿಂಗ್ ಕಮಿಟಿಯ ಅಧ್ಯಕ್ಷ ಮೋಹನ್ ಪ್ರಕಾಶ್ ಅವರನ್ನು ಡಾ|| ಶಾಮನೂರು ಶಿವಶಂಕರಪ್ಪನವರ ನೇತೃತ್ವದಲ್ಲಿ ಭೇಟಿ ಮಾಡಿದ ವೀರಶೈವ-ಲಿಂಗಾಯಿತ ಮುಖಂಡರು ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ 75 ಕ್ಷೇತ್ರಗಳಲ್ಲಿ ಗೆದ್ದೇ ಗೆಲ್ಲುವ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿಯನ್ನು ನೀಡಿದರು.
ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರ ಬೆಂಗಳೂರಿನ ನಿವಾಸದಲ್ಲಿ ವೀರಶೈವ ಲಿಂಗಾಯತ ಸಮಾಜದ ಕಾಂಗ್ರೆಸ್ ನಾಯಕರು ಎರಡು ಸುತ್ತಿನ ಸಭೆ ಮಾಡಿದ ನಾಯಕರು, ಟಿಕೆಟ್ ಆಕಾಂಕ್ಷಿಗಳ ಸಭೆಯಲ್ಲಿ ವ್ಯಕ್ತವಾದ ಅಭಿಪ್ರಾಯಗಳ ಚರ್ಚೆ ನಡೆಸಿ 75 ಕ್ಷೇತ್ರಗಳಲ್ಲಿ ಗೆದ್ದೇ ಗೆಲ್ಲುವ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿ ರೆಡಿ ಮಾಡಿದ್ದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಮಾಜಿ ಕೆಪಿಸಿಸಿ ಅಧ್ಯಕ್ಷ ಅಲ್ಲಂ ವೀರಭದ್ರಪ್ಪ, ಮಾಜಿ ಸಚಿವರಾದ ವಿನಯ್ ಕುಲಕರ್ಣಿ, ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್, ಮಾಜಿ ಮೇಯರ್ ಪುಟ್ಟರಾಜ್, ಅಖಿಲ ಭಾರತ ವೀರಶೈವ- ಮಹಾಸಭಾದ ಕಾರ್ಯದರ್ಶಿ ರೇಣುಕ ಪ್ರಸನ್ನ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ ಮತ್ತಿತರರಿದ್ದರು.
