ಕೊವಿಡ್ ಮೊದಲ ಮತ್ತು ಎರಡನೆ ಅಲೆಯಲ್ಲಿ ಮಾಡಿದ ತಪ್ಪನ್ನು ಈ ಬಾರಿ ಮಾಡುವುದಿಲ್ಲ.! – ಡಿಸಿ ಮಹಾಂತೇಶ್ ಬೀಳಗಿ

WhatsApp Image 2021-12-07 at 10.35.21 PM

 

ದಾವಣಗೆರೆ: ಜಿಲ್ಲೆಯಲ್ಲಿ ಕಳೆದ ಹತ್ತು ದಿನಗಳಿಂದೀಚೆಗೆ ಪಾಸಿಟೀವ್ ಪ್ರಮಾಣ ಏರು ಗತಿಯಲ್ಲಿ ಸಾಗಿದ್ದು, ಸರ್ಕಾರದ ಸೂಚನೆಯಂತೆ ಜಿಲ್ಲೆಯ ಎಲ್ಲ ಹಾಸ್ಟೆಲ್‌ಗಳಲ್ಲಿನ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳಿಗೆ ಆರ್‌ಟಿಪಿಸಿಆರ್ ಪರೀಕ್ಷೆಯನ್ನು ಎರಡು ದಿನಗಳ ಒಳಗಾಗಿ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಡಳಿತ ಭವನದ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ ಕೋವಿಡ್ ನಿರ್ವಹಣೆ ಕುರಿತ ತುರ್ತು ಸಭೆ ಹಾಗೂ ವೈದ್ಯಕೀಯ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಕಳೆದ ಹತ್ತುದಿನಗಳಿಂದೀಚೆಗೆ ಕೋವಿಡ್ ಪಾಸಿಟಿವ್ ಪ್ರಕರಣಗಳ ಪ್ರಮಾಣ ಏರುತ್ತಾ ಸಾಗಿದ್ದು, ಪ್ರಕರಣಗಳ ಸಂಖ್ಯೆ ಜಿಲ್ಲೆಯಲ್ಲಿ ಹೆಚ್ಚಳವಾಗುವ ಎಲ್ಲ ಸಾಧ್ಯತೆಗಳು ಕಂಡುಬರುತ್ತಿವೆ. ಕೋವಿಡ್‌ನ 3ನೇ ಅಲೆ ಸಮರ್ಥವಾಗಿ ಎದುರಿಸಲು ನಾವು ಈಗಿನಿಂದಲೇ ಸನ್ನದ್ಧರಾಗಬೇಕಿದೆ. ಪ್ರತಿನಿತ್ಯ 1500 ರಿಂದ 2000 ಟೆಸ್ಟ್ ಕೈಗೊಳ್ಳುವಂತೆ ಸೂಚನೆ ನೀಡಿದರು.

ಕೇರಳ ಮತ್ತು ಮಹಾರಾಷ್ಟ್ರ ರಾಜ್ಯದಿಂದ ಆಗಮಿಸುವವರು 72 ಗಂಟೆಯೊಳಗಿನ ಆರ್‌ಟಿಪಿಸಿಆರ್ ನೆಗೆಟಿವ್ ವರದಿ ಹೊಂದಿರುವುದು ಕಡ್ಡಾಯವಾಗಿದ್ದು, ದಾವಣಗೆರೆ ಜಿಲ್ಲೆಯನ್ನು ರಿಸ್ಕ್ಗೆ ಒಳಪಡಿಸಲು ನಾವು ಸಿದ್ಧವಿಲ್ಲ, ಹೀಗಾಗಿ ದಾವಣಗೆರೆ ಮತ್ತು ಹರಿಹರದ ರೈಲ್ವೆ ನಿಲ್ದಾಣ ಹಾಗೂ ರಾಷ್ಟಿçÃಯ ಹೆದ್ದಾರಿಯಿಂದ ಜಿಲ್ಲೆಯೊಳಗೆ ಪ್ರವೇಶಿಸುವ ಪ್ರದೇಶಗಳಲ್ಲಿ ಚೆಕ್‌ಪೋಸ್ಟ್ ಹಾಕಿ, ಪರಿಶೀಲಿಸುವಂತೆ ಪೊಲೀಸ್ ಇಲಾಖೆ ಹಾಗೂ ಆರೋಗ್ಯ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ಹೇಳಿದರು.

ಹಾಸ್ಟೆಲ್ ವಿದ್ಯಾರ್ಥಿ, ಸಿಬ್ಬಂದಿಗಳಿಗೆ ಟೆಸ್ಟ್ ಕಡ್ಡಾಯ : ಜಿಲ್ಲೆಯಲ್ಲಿನ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ ಸೇರಿದಂತೆ ಹಿಂದುಳಿದ ವರ್ಗ, ಅಲ್ಪಸಂಖ್ಯಾತರ, ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಬರುವ ಪ್ರತಿಯೊಂದು ಹಾಸ್ಟೆಲ್‌ಗಳು ಅಲ್ಲದೆ, ಖಾಸಗಿ ವಸತಿಯುತ ಶಾಲೆಗಳಲ್ಲಿನ ವಿದ್ಯಾರ್ಥಿಗಳು, ಶಿಕ್ಷಕರು, ಉಪನ್ಯಾಸಕರು, ಸಿಬ್ಬಂದಿಗಳು, ಅಡುಗೆಯವರು. ನರ್ಸಿಂಗ್, ಪ್ಯಾರಾಮೆಡಿಕಲ್, ವೈದ್ಯಕೀಯ ವಿದ್ಯಾರ್ಥಿಗಳು, ಸಿಬ್ಬಂದಿಗಳು, ಅಂಗನವಾಡಿ ಸಹಾಯಕಿ ಮತ್ತು ಮೇಲ್ವಿಚಾರಕರು ಎಲ್ಲರಿಗೂ ಆರ್‌ಟಿಪಿಸಿಆರ್ ಪರೀಕ್ಷೆಯನ್ನು ಎರಡ್ಮೂರು ದಿನಗಳ ಒಳಗಾಗಿ ಕೈಗೊಳ್ಳಲೇಬೇಕು. ಇದರ ಜೊತೆಗೆ ಆರೋಗ್ಯ ಇಲಾಖೆಯು ಹೆಚ್ಚು ರಿಸ್ಕ್ ವಲಯದಲ್ಲಿ ಬರುವ ಡ್ರೈವರ್, ಕಂಡೆಕ್ಟರ್, ಹೋಟೆಲ್, ರೆಸ್ಟೋರೆಂಟ್, ಹೆಚ್ಚು ಜನಸಂದಣಿ ಇರುವೆಡೆ ಕೆಲಸ ಮಾಡುವ ಹಮಾಲರು ಮುಂತಾದವರಿಗೂ ಆರ್‌ಟಿಪಿಸಿಆರ್ ಟೆಸ್ಟ್ ಮಾಡಬೇಕು. ಇದು ಜಿಲ್ಲೆಯ ಎಲ್ಲ ತಾಲ್ಲೂಕು ಮಟ್ಟದಲ್ಲೂ ಕೂಡ ಪರೀಕ್ಷೆ ನಡೆಯಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಜಿಲ್ಲೆಯ ಎಲ್ಲ ಖಾಸಗಿ ವಸತಿಯುತ ಶಾಲೆಗಳಿಗೆ ಕೂಡಲೆ ಭೇಟಿ ನೀಡಿ, ವಿದ್ಯಾರ್ಥಿಗಳ ಹಾಗೂ ಶಿಕ್ಷಕರು, ಸಿಬ್ಬಂದಿಗಳ ಆರೋಗ್ಯ ವಿವರವನ್ನು ಖುದ್ದು ಸಂಗ್ರಹಿಸಿ, ಜಿಲ್ಲಾಧಿಕಾರಿಗಳ ಕಚೇರಿಗೆ ವರದಿ ಸಲ್ಲಿಸುವಂತೆ ಡಿಡಿಪಿಐ ಅವರಿಗೆ ಸೂಚನೆ ನೀಡಿದರು.

ಹೋಂ ಐಸೋಲೇಷನ್ ಇಲ್ಲ : ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಬಂದ ಸೋಂಕಿತರಿಗೆ ಯಾವುದೇ ಕಾರಣಕ್ಕೂ ಹೋಂ ಐಸೋಲೇಷನ್‌ನಲ್ಲಿರಲು ಯಾರಿಗೂ ಅವಕಾಶ ಇರುವುದಿಲ್ಲ. ರೋಗ ಲಕ್ಷಣ ಇರಲಿ, ಇಲ್ಲದಿರಲಿ ಕಡ್ಡಾಯವಾಗಿ ಆಸ್ಪತ್ರೆಯಲ್ಲಿಯೇ ದಾಖಲಾಗಿ ಚಿಕಿತ್ಸೆ ಪಡೆಯಬೇಕು. ಕಳೆದ ಮೊದಲ ಮತ್ತು ಎರಡನೆ ಅಲೆಯಲ್ಲಿ ಮಾಡಿದ ತಪ್ಪನ್ನು ಈ ಬಾರಿ ಮಾಡುವುದಿಲ್ಲ. ಸೋಂಕಿತರು ಎಷ್ಟೇ ಪ್ರಭಾವಿಗಳಾಗಿದ್ದರೂ, ಎಲ್ಲರನ್ನೂ ತಪ್ಪದೆ ಆಸ್ಪತ್ರೆಗೆ ದಾಖಲಿಸಿಯೇ ಚಿಕಿತ್ಸೆ ನೀಡಬೇಕು ಎಂದು ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ತಾಕೀತು ಮಾಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಡಿಹೆಚ್‌ಒ ಡಾ. ನಾಗರಾಜ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ರಾಘವನ್, ಆರ್‌ಸಿಹೆಚ್ ಅಧಿಕಾರಿ ಡಾ. ಮೀನಾಕ್ಷಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವಿಜಯಕುಮಾರ್, ಮಹಾನಗರಪಾಲಿಕೆ ಆಯುಕ್ತ ವಿಶ್ವನಾಥ ಮುದಜ್ಜಿ ಸೇರಿದಂತೆ ಆರೋಗ್ಯ ಇಲಾಖೆಯ ಅನುಷ್ಠಾನ ಅಧಿಕಾರಿಗಳು, ವಿವಿಧ ವೈದ್ಯಕೀಯ ಸಂಸ್ಥೆಗಳ ತಜ್ಞ ವೈದ್ಯರು, ವೈದ್ಯಕೀಯ ಸಲಹಾ ಸಮಿತಿಯ ಸದಸ್ಯರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

error: Content is protected !!