ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ

ದಾವಣಗೆರೆ: ಸರ್ಕಾರದ ಮಹತ್ವಕಾಂಕ್ಷಿ ಐದು ಗ್ಯಾರಂಟಿ ಯೋಜನೆಗಳ ಯಶಸ್ವಿ ಅನುಷ್ಟಾನ ಕುರಿತು ಮಂಗಳವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು.

ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿ ಅಧ್ಯಕ್ಷರಾದ ಶಾಮನೂರು ಟಿ.ಬಸವರಾಜ್ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅರ್ಹರಿಗೆ ಗ್ಯಾರಂಟಿ ಯೋಜನೆಗಳನ್ನು ತಲುಪಿಸಲು ಅಧಿಕಾರಿಗಳು, ಸಂಬಂಧಿಸಿದವರು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಎಂದು ಹೇಳಿದರು.
ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಮೀಪ ಚಾಲಕರು ಬಸ್ ನಿಲ್ಲಿಸುವುದಿಲ್ಲ ಹಾಗೂ ವಿವಿಧ ಗ್ರಾಮಗಳಿಗೆ ಸಾರಿಗೆ ವ್ಯವಸ್ಥೆ ಸರಿಯಿಲ್ಲ ಎಂದು ಜನರು ದೂರುತ್ತಿದ್ದಾರೆ ಎಂದು ಸದಸ್ಯರು ತಿಳಿಸಿದಾಗ ಪ್ರಕರಣಗಳ ಬಗ್ಗೆ ಗಮನಿಸುತ್ತೇವೆ ಎಂದು ಹೇಳಿದರು.

ಗೃಹಜ್ಯೋತಿ ಯೋಜನೆಯಡಿ ದಾವಣಗೆರೆ ಜಿಲ್ಲೆಯಲ್ಲಿ 487228 ಜನರು ಹೆಸರನ್ನು ನೋಂದಾಯಿಸಿಕೊಂಡಿದ್ದು 433758 ಆರ್.ಆರ್. ಸಂಖ್ಯೆ ಹೊಂದಿರುವ ಗ್ರಾಹಕರು ಇದರ ಲಾಭ ಪಡೆಯುತ್ತಿದ್ದಾರೆ. 53470 ಗ್ರಾಹಕರು ನೋಂದಾಯಿಸಿ ಕೊಂಡಿಲ್ಲ ಎಂದು ಸಭೆಯಲ್ಲಿ ತಿಳಿಸಿದಾಗ ಮುಂದಿನ ಸಭೆಯೊಳಗೆ ಎಲ್ಲ ಅರ್ಜಿ ವಿಲೇವಾರಿ ಮಾಡಿ ಅರ್ಹರಿಗೆ ಯೋಜನೆ ಲಾಭ ಮುಟ್ಟಿಸಬೇಕು ಎಂದು ತಿಳಿಸಿದರು.

ಉಚಿತ ವಿದ್ಯುತ್ ಪೂರೈಕೆಯಿಂದ ಜನರು ಸಾಕಷ್ಟು ಪ್ರಯೋಜನ ಪಡೆಯುತ್ತಿದ್ದಾರೆ. ಅನ್ನಭಾಗ್ಯ ಯೋಜನೆಯಡಿ ಅಕ್ಕಿ ಜತೆಗೆ ಮಾಸಿಕ ಅಕ್ಕಿ ಹಣ ಫಲಾನುಭವಿಗಳ ಖಾತೆಗೆ ಜಮಾ ಆಗುತ್ತಿದೆ. ಇನ್ನೂ ಯುವ ನಿಧಿ ಸಹ ಚಾಲ್ತಿಯಲ್ಲಿದೆ ಆದರೇ ಸಣ್ಣಪುಟ್ಟ ಸಮಸ್ಯೆಗಳಿಂದಾಗಿ ಇನ್ನೂ ಸಾಕಷ್ಟು ಜನರಿಗೆ ಕೆಲ ಗ್ಯಾರಂಟಿಗಳ ಸೌಲಭ್ಯ ದಕ್ಕುತ್ತಿಲ್ಲ. ಈ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಇದನ್ನು ಗಂಭೀರವಾಗಿ ಪರಿಗಣಿಸಿ, ಯಾವ ಕಾರಣಕ್ಕಾಗಿ ಸೌಲಭ್ಯ ಸಿಗುತ್ತಿಲ್ಲ, ಇದಕ್ಕಾಗಿ ಏನು ಮಾಡಬೇಕೆಂಬ ಬಗ್ಗೆ ಜನಸಾಮಾನ್ಯರಲ್ಲಿ ಅರಿವು ಮೂಡಿಸುವಂತಹ ಕೆಲಸ ಆಯಾ ಇಲಾಖೆಗಳು ಮಾಡಬೇಕು ಎಂದು ತಿಳಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ ಇಟ್ನಾಳ್ ಮಾತನಾಡಿ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಟಾನಕ್ಕೆ ಸಂಬಂಧಿಸಿದಂತೆ ಕಾರ್ಯಪ್ರವೃತ್ತರಾಗಲು ಈಗಾಗಲೇ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಕಾರ್ಯನಿರ್ವಹಿಸಲಾಗುತ್ತದೆ. ತಾಲೂಕು ಮಟ್ಟದಲ್ಲಿನ ಅಧಿಕಾರಿಗಳೊಂದಿಗೆ ಸಹ ಸಭೆ ನಡೆಸಿ ಪ್ರಾಧಿಕಾರದ ಸದಸ್ಯರು ನೀಡಿದ ಸಲಹೆ, ಪ್ರಸ್ತಾಪಿಸಿದ ಅಂಶಗಳ ಬಗ್ಗೆ ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಉಪಾಧ್ಯಕ್ಷರಾದ ನಂಜಾನಾಯ್ಕ, ಕೆ.ಎಸ್.ಮಂಜುನಾಥ, ಅನೀಶ್ ಪಾಷ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಅಧಿಕಾರಿಗಳು, ಸದಸ್ಯರು ಹಾಗೂ ಇನ್ನಿತರರು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

error: Content is protected !!