ಡಾ.ಸುಧಾಕರ್ ಗುತ್ತಿಗೆದಾರರಿಗೆ ತಾಕೀತು ಮಾಡಿದ್ಯಾಕೆ..? ಚಿಗಟೇರಿ ಆಸ್ಪತ್ರೆಯಲ್ಲಿ ಸಚಿವರ ಪರಿಶೀಲನೆ ಹೇಗಿತ್ತು ನೋಡಿ

ದಾವಣಗೆರೆ: ಜಿಲ್ಲಾಸ್ಪತ್ರೆ ಆವರಣದಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ 100 ಹಾಸಿಗೆ ಸಾಮರ್ಥ್ಯದ ತಾಯಿ-ಮಕ್ಕಳ ಆಸ್ಪತ್ರೆ ಕಟ್ಟಡ ಬರುವ ಸಂಕ್ರಾಂತಿ ಹಬ್ಬದ ವೇಳೆಗೆ ಉದ್ಘಾಟನೆಗೆ ಸಿದ್ಧವಾಗಿರಬೇಕು ಎಂದು ಆರೋಗ್ಯ ಮತ್ತು ಶಿಕ್ಷಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ತಾಕೀತು ಮಾಡಿದರು.
ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ನಿರ್ಮಿಸಲಾಗುತ್ತಿರುವ ತಾಯಿ ಮಕ್ಕಳ ಆಸ್ಪತ್ರೆ ಹಾಗೂ ಟ್ರಾಮಾ ಕೇರ್ ಸೇಂಟರ್ ಕಟ್ಟಡ ನಿರ್ಮಾಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು.
ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ನಿರ್ಮಿಸಲಾಗುತ್ತಿರುವ 100 ಹಾಸಿಗೆ ಸಾಮರ್ಥ್ಯದ ತಾಯಿ ಮಕ್ಕಳ ಆರೈಕೆ ಆಸ್ಪತ್ರೆ ಕಟ್ಟಡ ನಿರ್ಮಾಣಕ್ಕೆ 15 ತಿಂಗಳ ಕಾಲಮಿತಿ ನಿಗದಿಪಡಿಸಲಾಗಿತ್ತು. ಈಗಾಗಲೆ 12 ತಿಂಗಳು ಕಳೆದಿದ್ದು, ಇನ್ನೂ ನಿರ್ಮಾಣ ಕಾರ್ಯ ಪೂರ್ಣಗೊಳ್ಳುವ ಹಂತಕ್ಕೆ ಬಂದಿಲ್ಲ ಎಂದು ಸಚಿವರು ಅಸಮಾಧಾನ ವ್ಯಕ್ತಪಡಿಸಿದರು.
ಇದಕ್ಕೆ ಉತ್ತರಿಸಿದ ಗುತ್ತಿಗೆದಾರರು, ಕೋವಿಡ್ ಲಾಕ್‌ಡೌನ್ ಕಾರಣದಿಂದಾಗಿ ಕಾರ್ಮಿಕರ ಕೊರತೆ ಮೊದಲಾದ ಕಾರಣಕ್ಕೆ ಕಟ್ಟಡ ನಿರ್ಮಾಣ ಕಾರ್ಯದಲ್ಲಿ ನಿರೀಕ್ಷಿತ ಪ್ರಮಾಣದ ಕಾಮಗಾರಿ ಆಗಲಿಲ್ಲ ಎಂದು ಸಮಾಜಾಯಿಷಿ ನೀಡಿದರು.
ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಕೋವಿಡ್ ಲಾಕ್‌ಡೌನ್ ಸಂದರ್ಭದಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿಗೆ, ಕಾರ್ಮಿಕರ ಹಾಗೂ ಸಾಮಗ್ರಿಗಳ ಸಾಗಾಣಿಕೆಗೆ ಯಾವುದೇ ನಿರ್ಬಂಧವಿರಲಿಲ್ಲ. ಅಲ್ಲದೆ, ಆಸ್ಪತ್ರೆ ಕಟ್ಟಡ ಅತ್ಯಂತ ಅವಶ್ಯಕ ಕ್ಷೇತ್ರದ ನಿರ್ಮಾಣ ಕಾಮಗಾರಿಯಾಗಿದ್ದು, ನೀವು ನೀಡುವ ಕಾರಣ ಸಮಂಜಸವಾಗಿಲ್ಲ. ಆದಾಗ್ಯೂ ಇನ್ನು ಆರು ತಿಂಗಳ ಒಳಗಾಗಿ ಕಟ್ಟಡ ನಿರ್ಮಾಣ ಕಾರ್ಯ ಪೂರ್ಣಗೊಂಡು, ಬರುವ ಸಂಕ್ರಾಂತಿ ಹಬ್ಬದ ವೇಳೆಗೆ ಉದ್ಘಾಟನೆಗೆ ಸಿದ್ಧವಿರಬೇಕು. ಕಾಮಗಾರಿ ಗುಣಮಟ್ಟದಲ್ಲಿ ಯಾವುದೇ ಲೋಪದೋಷಗಳು ಕಂಡುಬಂದರೆ ಸಹಿಸುವುದಿಲ್ಲ ಖಡಕ್ ಎಚ್ಚರಿಕೆ ನೀಡಿದರು.
ಸರ್ಕಾರಿ ಮೆಡಿಕಲ್ ಕಾಲೇಜಿಗೆ ಸ್ಥಳ ಪರಿಶೀಲನೆ : ಚಿಗಟೇರಿ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ನಿರ್ಮಾಣ ಮಾಡಲು ಜಿಲ್ಲೆಯ ಸಂಸದರು ಮುಂತಾದ ಜನಪ್ರತಿನಿಧಿಗಳಿಂದ ಕೋರಿಕೆ ಬಂದಿರುವ ಹಿನ್ನೆಲೆಯಲ್ಲಿ, ಆರೋಗ್ಯ ಸಚಿವರು, ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಸ್ಥಳ ಪರಿಶೀಲನೆ ನಡೆಸಿದರು. ಬಳಿಕ ಜಿಲ್ಲಾ ಶಸ್ತ್ರಚಿಕಿತ್ಸಕರ ಕೊಠಡಿಯಲ್ಲಿ ಸಂಸದರು, ಶಾಸಕರು, ಅಧಿಕಾರಿಗಳೊಂದಿಗೆ, ಜಿಲ್ಲಾ ಆಸ್ಪತ್ರೆ ಆವರಣದ ಸಂಪೂರ್ಣ ನಕ್ಷೆ, ಪ್ರಸ್ತಾವಿತ ಸರ್ಕಾರಿ ಮೆಡಿಕಲ್ ಕಾಲೇಜಿಗೆ ಹಾಗೂ ಜಯದೇವ ಹೃದ್ರೋಗ ಉಪಕೇಂದ್ರಕ್ಕೆ ನಿಗದಿಪಡಿಸಿರುವ ನಿವೇಶನದ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಂಡರು.
ಶಾಸಕರುಗಳಾದ ಎಸ್.ಎ. ರವೀಂದ್ರನಾಥ್, ರಾಮಚಂದ್ರಪ್ಪ, ಪ್ರೊ. ಲಿಂಗಣ್ಣ, ಜಿಲ್ಲಾ ಪಂಚಾಯತ್ ಸಿಇಒ ಡಾ.ವಿಜಯ ಮಹಾಂತೇಶ್, ಡಿಹೆಚ್‌ಒ ಡಾ. ನಾಗರಾಜ್, ಜಿಲ್ಲಾ ಸರ್ಜನ್ ಡಾ. ಜಯಪ್ರಕಾಶ್ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.