drought; ರೈತರ ಜಮೀನಿನಲ್ಲಿ ಬರ ಅಧ್ಯಯನ ಅಧಿಕಾರಿಗಳಿಂದ ಬರ, ಬೆಳೆ ವೀಕ್ಷಣೆ

ದಾವಣಗೆರೆ, ಅ.07: ಮುಂಗಾರು ಮಳೆ ಕೊರತೆಯಿಂದ ಉಂಟಾಗಿರುವ ಬರ (drought) ಪರಿಸ್ಥಿತಿ ಪರಿಶೀಲಿಸಲು ಕೇಂದ್ರ ಬರ ಅಧ್ಯಯನ ತಂಡ ಶನಿವಾರ ಜಗಳೂರು ತಾಲ್ಲೂಕಿನ ದೊಣ್ಣೆಹಳ್ಳಿಗೆ ಭೇಟಿ ನೀಡಿತು.

ಕೇಂದ್ರ ಜಲಶಕ್ತಿ ಆಯೋಗದ ನಿರ್ದೇಶಕ ವಿ.ಅಶೋಕ್ ಕುಮಾರ್, ಎಂ.ಎನ್.ಸಿ.ಎಫ್.ಸಿ ಉಪನಿರ್ದೇಶಕ ಕರಣ್ ಚೌಧರಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪಕಾರ್ಯದರ್ಶಿ ಸಂಗೀತ್ ಕುಮಾರ್ ಹಾಗೂ ರಾಜ್ಯ ಪ್ರಕೃತಿ ವಿಕೋಪ ನಿರ್ವಹಣಾ ಕೇಂದ್ರದ ಹಿರಿಯ ಸಲಹೆಗಾರ ಡಾ. ಶ್ರೀನಿವಾಸ ರೆಡ್ಡಿ ಅವರನ್ನು ಒಳಗೊಂಡ ಕೇಂದ್ರ ಬರ ಅಧ್ಯಯನ ತಂಡವನ್ನು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಹಾಗೂ ಜಿಲ್ಲಾ ಪಂಚಾಯಿತಿ ಸಿಇಒ ಸುರೇಶ್ ಬಿ. ಇಟ್ನಾಳ್ ಅವರು ಸ್ವಾಗತಿಸಿದರು.

ಕೇಂದ್ರ ಜಲಶಕ್ತಿ ಆಯೋಗದ ನಿರ್ದೇಶಕ ವಿ.ಅಶೋಕ್ ಕುಮಾರ್ ನೇತೃತ್ವದ ತಂಡವು ಜಗಳೂರು ತಾಲ್ಲೂಕಿನ ವಿವಿಧೆಡೆ ರೈತರ ಜಮೀನುಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ರೈತರು ಮತ್ತು ಅಧಿಕಾರಿಗಳಿಂದ ಅಗತ್ಯ ಮಾಹಿತಿ ಪಡೆದುಕೊಂಡಿತು.

ಬರಪೀಡಿತ ಪ್ರದೇಶಗಳಿಗೆ ತೆರಳಿ ಪರಿಶೀಲನೆ ನಡೆಸಲು ಕೇಂದ್ರ ಬರ ಅಧ್ಯಯನ ತಂಡವು ಮೊದಲಿಗೆ ಜಗಳೂರು ತಾಲ್ಲೂಕಿನ ದೊಣ್ಣೆಹಳ್ಳಿ ಗ್ರಾಮದ ರೈತರಾದ ಜಯಮ್ಮ ಅವರ 4 ಎಕರೆ ರಾಗಿ, ಸೋಮಶೇಖರ್ ಅವರ 1.39 ಎಕರೆಯಲ್ಲಿ ಬೆಳೆದಿರುವ ರಾಗಿ, ತಿಪ್ಪೇರುದ್ರಪ್ಪ ಅವರ 3 ಎಕರೆ ಮೆಕ್ಕೆಜೋಳ ಬೆಳೆ ವೀಕ್ಷಣೆ ನಂತರ ಶಾಂತಮ್ಮ ನವರು ಬೆಳೆದ ನವಣೆ ವೀಕ್ಷಣೆ ಮಾಡಿತು. ರೈತರು ಹಾಗೂ ಅಧಿಕಾರಿಗಳು ಮಳೆಯ ಕೊರತೆಯಿಂದ ಬೆಳೆ ಹಾನಿಯಾದ ಬಗ್ಗೆ ಪೈರುಗಳನ್ನು ತೋರಿಸಿ, ಬರದ ತೀವ್ರತೆಯ ಬಗ್ಗೆ ಮನವರಿಕೆ ಮಾಡಿಕೊಟ್ಟರು.

drought; 4860 ಕೋಟಿ ರೂ. ಬೆಳೆ ಪರಿಹಾರಕ್ಕಾಗಿ ಕೇಂದ್ರಕ್ಕೆ ಒತ್ತಾಯ: ಮುಖ್ಯಮಂತ್ರಿ

ರೈತರು ಮುಂಗಾರು ಮಳೆ ಇಲ್ಲದೆ ಬೆಳೆ ಹಾನಿಯಾದ ಬಗ್ಗೆ ಹಾಗೂ ಉಂಟಾದ ನಷ್ಟದ ಬಗ್ಗೆ ತಮ್ಮ ಅಳಲನ್ನು ತೋಡಿಕೊಂಡು, ಬೆಳೆ ನಷ್ಟ ಪರಿಹಾರಕ್ಕೆ ರೈತರು ಮನವಿ ಮಾಡಿದರು.

ದಾವಣಗೆರೆ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಮಾತನಾಡಿ, ಜಿಲ್ಲೆಯ ಬರಪರಿಸ್ಥಿತಿ ಅಧ್ಯಯನ ಮಾಡಲು ಹಾಗೂ ವಿಸ್ರುತ ವರದಿ ನೀಡಲು ಜಿಲ್ಲೆಯ ಜಗಳೂರು ತಾಲ್ಲೂಕಿಗೆ ಕೇಂದ್ರ ಬರ ಅಧ್ಯಯನ ತಂಡ ಆಗಮಿಸಿದ್ದು, ಜಗಳೂರು ತಾಲ್ಲೂಕಿನ ವಿವಿಧೆಡೆ ರೈತರ ಜಮೀನುಗಳಿಗೆ ಭೇಟಿ ನೀಡಿ, ಬರಪರಿಶೀಲನೆ ನಡೆಸಲಾಗಿದೆ ಎಂದರು.

ದಾವಣಗೆರೆ ಜಿಲ್ಲೆಯಲ್ಲಿ ಶೇ.93ರಷ್ಟು ಬಿತ್ತನೆಯಾಗಿದ್ದು, ತೀವ್ರ ಬರಪರಿಸ್ಥಿತಿ ಕಾರಣದಿಂದಾಗಿ ಜಿಲ್ಲೆಯ ಎಲ್ಲಾ ಆರು ತಾಲ್ಲೂಕುಗಳನ್ನು ಬರ ಪೀಡಿತ ತಾಲೂಕುಗಳು ಎಂದು ರಾಜ್ಯ ಸರ್ಕಾರ ಘೋಷಣೆ ಮಾಡಿದ್ದು, ಅದರಂತೆ ಜಂಟಿ ಸಮೀಕ್ಷೆ ಮಾಡಿ 1.57 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ಎನ್‍ಡಿಆರ್ಎಫ್ ಮಾರ್ಗಸೂಚಿಯಂತೆ ಇನ್‍ಪುಟ್ ಸಬ್ಸಿಡಿ ನೀಡುವಂತೆ ವರದಿ ಸಲ್ಲಿಸಿದ್ದು, ಆ ವರದಿಯಂತೆ ಬರಪರಿಸ್ಥಿತಿ ಪರಿಶೀಲಿಸಿ, ವಿಸ್ತೃತ ವರದಿ ನೀಡಲು ಕೇಂದ್ರ ಬರ ಅಧ್ಯಯನ ಮೂರನೇ ತಂಡದ ನೇತೃತ್ವ ವಹಿಸಿರುವ ತಂಡ ಆಗಮಿಸಿದ್ದು, ಈ ತಂಡವು ರಾಗಿ ಮತ್ತು ಮೆಕ್ಕೆಜೋಳ ಬೆಳೆದ ರೈತರ ಜಮೀನುಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದೆ. ಇನ್ನೂ ಹಲವು ರೈತರ ಜಮೀನುಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ಮಾಡಲಿದೆ. ಒಟ್ಟಾರೆಯಾಗಿ ಜಿಲ್ಲೆಯ ಬರದ ಸ್ಥಿತಿಯ ಕುರಿತು ವಾಸ್ತವ ಸ್ಥಿತಿಯನ್ನು ಮನವರಿಕೆ ಮಾಡಿಕೊಡಲಾಗಿದೆ. ಕೇಂದ್ರ ಸರ್ಕಾರ ಪರಿಹಾರ ನೀಡಿದ ತಕ್ಷಣ ಎಲ್ಲ ರೈತರಿಗೆ ಪರಿಹಾರ ವಿತರಣೆಗೆ ಕ್ರಮಕೈಗೊಳ್ಳಲಾಗುವುದು ಎಂದರು.

ದಾವಣಗೆರೆ ಜಿಲ್ಲೆಯಲ್ಲಿ 2.27 ಲಕ್ಷ ಹೆಕ್ಟೇರ್ ಪೈಕಿ 1.57 ಲಕ್ಷ ಹೆಕ್ಟೇರ್ ಬೆಳೆ ಹಾನಿಯಾಗಿದೆ. ವಿಮೆ ಕಂಪನಿಗಳ ಪ್ರತಿನಿಧಿಗಳ ಜೊತೆ ಸಭೆ ನಡೆಸಿ ಕಟ್ಟುನಿಟ್ಟಿನ ಕ್ರಮಕೈಗೊಂಡು 47 ಸಾವಿರ ರೈತರಿಗೂ ಬೆಳೆ ವಿಮೆ ಪರಿಹಾರ ವಿತರಣೆಗೆ ಕ್ರಮವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ ಇಟ್ನಾಳ್, ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕ, ತೋಟಗಾರಿಕೆ ಇಲಾಖೆ, ಪಶುಪಾಲನಾ ಮತ್ತು ಪಶುವೈದ್ಯಕೀಯ ಇಲಾಖೆ ಅಧಿಕಾರಿಗಳು, ಕಂದಾಯ ಇಲಾಖೆ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

siddaramaiah; 3 ಎಕರೆ ಜಾಗ, 4 ಕೋಟಿ ರೂ. ಕಾವಾಡಿಗರಹಟ್ಟಿ ಅಭಿವೃದ್ದಿಗೆ ನೀಡಿದ ಸಿಎಂ

ಬರ: ಸರ್ಕಾರಕ್ಕೆ ವಾಸ್ತವ ವರದಿ ಸಲ್ಲಿಕೆ

ಸರ್ಕಾರದ ಮಾರ್ಗಸೂಚಿಯನ್ವಯ ಜಿಲ್ಲೆಯ ಬರಪರಿಸ್ಥಿತಿಯ ವಾಸ್ತವ ಸ್ಥಿತಿಯ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಕೇಂದ್ರ ಬರ ಅಧ್ಯಯನ ಮೂರನೇ ತಂಡದ ನೇತೃತ್ವವಹಿಸಿರುವ ಕೇಂದ್ರ ಜಲಶಕ್ತಿ ಆಯೋಗದ ನಿರ್ದೇಶಕ ವಿ.ಅಶೋಕ್ ಕುಮಾರ್ ಹೇಳಿದರು.

ಜಿಲ್ಲೆಯ ಜಗಳೂರು ತಾಲ್ಲೂಕಿನ ವಿವಿಧೆಡೆ ರೈತರ ಜಮೀನುಗಳಿಗೆ ಭೇಟಿ ನೀಡಿ, ಮಳೆ ಕೊರತೆಯಿಂದ ಉಂಟಾದ ಬೆಳೆ ಹಾನಿ ವೀಕ್ಷಣೆ ಮಾಡಿ ನಂತರ ಮಾಧ್ಯಮದರೊಂದಿಗೆ ಮಾತನಾಡಿದರು.

ಈಗಾಗಲೇ ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳ ಬರ ಅಧ್ಯಯನ ಕಾರ್ಯಕೈಗೊಂಡು, ಶನಿವಾರ ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲೆಯ ವಿವಿಧೆಡೆ ರೈತರ ಜಮೀನುಗಳಿಗೆ ಭೇಟಿ ನೀಡಿ, ಬರ ಪರಿಸ್ಥಿತಿಯ ಅಧ್ಯಯನ ಮಾಡಲಾಗುತ್ತಿದೆ. ಜಿಲ್ಲೆಯ ಬರ ಪರಿಸ್ಥಿತಿಯ ಕುರಿತು ರೈತರೊಂದಿಗೆ ಸಂವಾದ ನಡೆಸಿ, ಮಾಹಿತಿ ಪಡೆಯಲಾಗುತ್ತಿದೆ. ಇದರ ಜೊತೆಗೆ ಜಿಲ್ಲಾಡಳಿತವು ಸಹ ಬರದ ವಾಸ್ತವ ಸ್ಥಿತಿಯನ್ನು ಮನವರಿಕೆ ಮಾಡಿಕೊಟ್ಟಿದೆ ಎಂದು ತಿಳಿಸಿದ ಅವರು, ಜಿಲ್ಲೆಯ ವಾಸ್ತವ ಸ್ಥಿತಿಯ ವರದಿಯನ್ನು ರಾಜ್ಯದ ಬರ ಅಧ್ಯಯನ ತಂಡದ ನೇತೃತ್ವ ವಹಿಸಿರುವ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯದ ಜಂಟಿಕಾರ್ಯದರ್ಶಿ ಅಜಿತ್ ಕುಮಾರ್ ಸಾಹು ಅವರಿಗೆ ಸಲ್ಲಿಸಲಾಗುವುದು, ಬಳಿಕ ರಾಜ್ಯದ ಸಂಗ್ರಹಿತ ಕ್ರೋಢೀಕೃತ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ತಿಳಿಸಿದರು.

Leave a Reply

Your email address will not be published. Required fields are marked *

error: Content is protected !!