electricity; ಆಕಸ್ಮಿಕ ಸಂದರ್ಭಕ್ಕೆ ಅಗತ್ಯ ಸಿದ್ದತೆ ಏಕೆ ಮಾಡಿಕೊಂಡಿಲ್ಲ: ಖಾರವಾಗಿ ಪ್ರಶ್ನಿಸಿದ ಮುಖ್ಯಮಂತ್ರಿ
ಬೆಂಗಳೂರು, ಅ.13: ರೈತರಿಗೆ ವಿದ್ಯುತ್ (electricity) ಕೊರತೆ ಆಗದಂತೆ ಆಕಸ್ಮಿಕ ಸಂದರ್ಭಕ್ಕೆ ಅಗತ್ಯವಾದ ಯೋಜನೆ/ ಸಿದ್ಧತೆ ಏಕೆ ಮಾಡಿಕೊಂಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂಧನ ಇಲಾಖೆ ಅಧಿಕಾರಿಗಳನ್ನು ಖಾರವಾಗಿ ಪ್ರಶ್ನಿಸಿದರು.
ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಇಂಧನ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸುವ ವೇಳೆಯಲ್ಲಿ ಹಲವು ಜಿಲ್ಲೆಗಳಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಗಳನ್ನು ಪ್ರಸ್ತಾಪಿಸಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಇರುವ ವಿದ್ಯುತ್ ಅನ್ನು ವೈಜ್ಞಾನಿಕವಾಗಿ ಬೇರೆ ಬೇರೆ ಬ್ಯಾಚ್ ಗಳಲ್ಲಿ ಸರಬರಾಜು ಮಾಡಲು ಕ್ರಮ ವಹಿಸಬೇಕು. ಮೊದಲೇ ಹೀಗೆ ಮಾಡಿದ್ದರೆ ವಿದ್ಯುತ್ ಕೊರತೆಯ ನಡುವೆಯೂ ರೈತರಿಗೆ ಸಮಸ್ಯೆ ಆಗದಂತೆ ನಿರ್ವಹಿಸಬಹುದಿತ್ತು. ಕಚೇರಿಯಲ್ಲೇ ಕುಳಿತರೆ ಸಮಸ್ಯೆ ಬಗೆಹರಿಯುವುದಿಲ್ಲ. ಚೀಫ್ ಎಂಜಿನಿಯರ್ ಗಳು ಫೀಲ್ಡ್ ಗೆ ಹೋಗಬೇಕು. ಪರಿಸ್ಥಿತಿಯನ್ನು ರೈತರಿಗೆ ಮನವರಿಕೆ ಮಾಡಿಸಿ ಅವರ ಸಮಸ್ಯೆಗಳನ್ನು ಆಲಿಸಬೇಕು ಎಂದು ಸ್ಪಷ್ಟ ಸೂಚನೆ ನೀಡಿದರು.
drought prone; 161 ತೀವ್ರ ಬರಪೀಡಿತ, 34 ಸಾಧಾರಣ ಬರಪೀಡಿತ ತಾಲ್ಲೂಕು, ಘೋಷಣೆ
ಹಿಂದಿನ ಸರ್ಕಾರದಲ್ಲಿ ಉತ್ತಮವಾದ ಅಗತ್ಯ ಮಳೆ ಆಗಿದ್ದರೂ ವಿದ್ಯುತ್ ಉತ್ಪಾದನೆ ಮಾಡಲಿಲ್ಲ. ನಮ್ಮ ಸರ್ಕಾರ ಬಂದ ಮೇಲೆ ಮಳೆ ಕೊರತೆ ಆಗಿ, ಬರಗಾಲ ಬಂದಿದೆ. ಇದನ್ನು ರೈತರಿಗೆ ಮನವರಿಕೆ ಮಾಡಿಸಬೇಕು. ರೈತರಿಗೆ ಯಾವ ವೇಳೆ ಎಷ್ಟು ವಿದ್ಯುತ್ ಅಗತ್ಯವಿದೆ ಎನ್ನುವುದನ್ನು ಸರಿಯಾಗಿ ಅರ್ಥಮಾಡಿಕೊಂಡು ಇರುವ ವಿದ್ಯುತ್ ಅನ್ನೇ ಅವರಿಗೆ ಅಗತ್ಯ ವೇಳೆಯಲ್ಲಿ ಸರಬರಾಜು ಮಾಡಬೇಕು ಎಂದು ಸೂಚಿಸಿದರು.
ವಿದ್ಯುತ್ ಕಳ್ಳತನ ಮತ್ತು ವಿದ್ಯುತ್ ಸೋರಿಕೆ ಬಗ್ಗೆ ಏನು ಕ್ರಮ ಕೈಗೊಂಡಿದ್ದೀರಿ ? ವಿಚಕ್ಷಣಾ ದಳದಲ್ಲಿ ಎಷ್ಟು SP ಗಳು ಇದ್ದೀರಿ ? ಏನು ಮಾಡುತ್ತಿದ್ದೀರಿ? ಇವರು ಎಷ್ಟು ವಿದ್ಯುತ್ ಕಳ್ಳತನ ಪತ್ತೆ ಹಚ್ಚಿದ್ದಾರೆ ಎನ್ನುವುದನ್ನು ನಿಗಾ ವಹಿಸಿ ಕ್ರಿಯಾಶೀಲವಾಗಿ ಕೆಲಸ ಮಾಡಲು ಸೂಚನೆ ನೀಡಿ ಎನ್ನುವ ನಿರ್ದೇಶನವನ್ನು ಮುಖ್ಯಮಂತ್ರಿಗಳು ನೀಡಿದರು.
ಸಭೆಯಲ್ಲಿ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ವಿದ್ಯುತ್ ಉತ್ಪಾದನೆ, ಪ್ರಸರಣೆ ಮತ್ತು ವಿತರಣೆಗೆ ಸಂಬಂಧಿಸಿದ ಸಂಸ್ಥೆಗಳ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.