ಗೆಜೆಟ್ ಅಧಿಸೂಚನೆ ಹೊರಡಿಸದಿದ್ದರೆ 13ರಂದು ಶಿಗ್ಗಾವಿಯಲ್ಲಿ ಹೋರಾಟ: ಜಯಮೃತ್ಯುಂಜಯ ಶ್ರೀ

ಬೆಂಗಳೂರು: ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಜನವರಿ 12ರೊಳಗೆ ಗೆಜೆಟ್ ಅಧಿಸೂಚನೆ ಹೊರಡಿಸಬೇಕು. ಇಲ್ಲವಾದ್ರೆ ಜ. 13ರಂದು ಶಿಗ್ಗಾಂವಿಯಲ್ಲಿ 30 ಸಾವಿರ ಜನ ಸೇರಿಸಿ ಹೋರಾಟ ಮಾಡುವುದಾಗಿ ಕೂಡಲಸಂಗಮದ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.
ವೀರಶೈವ ಲಿಂಗಾಯತ ಸಮುದಾಯಕ್ಕೆ 2ಡಿ ಎಂಬ ಹೊಸ ವರ್ಗ ರೂಪಿಸಿ ಮೀಸಲಾತಿ ಕಲ್ಪಿಸುವುದಾಗಿ ರಾಜ್ಯ ಬಿಜೆಪಿ ಸರ್ಕಾರ ತೆಗೆದುಕೊಂಡಿರುವ ನಿರ್ಧಾರವನ್ನು ತಿರಸ್ಕರಿಸಿರುವುದಾಗಿ ಸ್ವಾಮೀಜಿ ಪತ್ರಕರ್ತರಿಗೆ ತಿಳಿಸಿದರು.
ಸಮುದಾಯದ ಮುಖಂಡರ ಜೊತೆ ಸಭೆ ನಡೆಸಿದ ನಂತರ ಪತ್ರಕರ್ತರೊಂದಿಗೆ ಮಾತನಾಡಿರುವ ಅವರು, 2ಎ ಮೀಸಲಾತಿ ಕಲ್ಪಿಸುವ ಬಗ್ಗೆ 24 ಗಂಟೆಗಳ ಒಳಗೆ ಮುಖ್ಯಮಂತ್ರಿ ಬೊಮ್ಮಾಯಿ ಸ್ಪಷ್ಟನೆ ನೀಡಬೇಕು. ಇಲ್ಲವಾದರೆ ಹೋರಾಟ ನಡೆಸಲಾಗುವುದು ಎಂದು ಹೇಳಿದರು.
ಈ ಹೋರಾಟ 2023ರ ಚುನಾವಣೆಯಲ್ಲಿ ಗಂಭೀರವಾದ ಪರಿಣಾಮ ಬೀರಲಿದೆ ಎಂದವರು ಎಚ್ಚರಿಸಿದ್ದಾರೆ.