ಲಾಕ್‍ಡೌನ್ ಪರಿಣಾಮ ಅಸಂಘಟಿತ ಕಾರ್ಮಿಕರಿಗೆ ಸರಕಾರದ ನೆರವು: ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನ – ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ

ದಾವಣಗೆರೆ: ಕೋವಿಡ್ 2ನೇ ಅಲೆಯ ಲಾಕ್‍ಡೌನ್ ಪರಿಣಾಮ ಆರ್ಥಿಕವಾಗಿ ಸಂಕಷ್ಟದಲ್ಲಿರುವ ವಿವಿಧ ವಲಯದ ಅಸಂಘಟಿತ ಕಾರ್ಮಿಕರಿಗೆ ರಾಜ್ಯ ಸರ್ಕಾರವು 2 ಸಾವಿರ ರೂ. ಆರ್ಥಿಕ ನೆರವು ಘೋಷಿಸಿದ್ದು ನೆರವು ಪಡೆಯಲು ಕಾರ್ಮಿಕ ಇಲಾಖೆ ಮಾರ್ಗಸೂಚಿ ಪ್ರಕಟಿಸಿದೆ. ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನಾಂಕವಾಗಿದ್ದು, ಸಂಕಷ್ಟದಲ್ಲಿರುವ ನೈಜ ಫಲಾನುಭವಿಗಳು ಈ ಯೋಜನೆಯ ಸದುಪಯೋಗಪಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ತಿಳಿಸಿದರು.
ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಅಸಂಘಟಿತ ವಲಯದ ಕಾರ್ಮಿಕರಿಗೆ ಪರಿಹಾರÀ ನೀಡುವ ಕುರಿತು ಪೂರ್ವಪರಿಶೀಲನಾ ಸಭೆಯಲ್ಲಿ ವಿವಿಧ ಅಸಂಘಟಿತ ವಲಯದ ಪದಾಧಿಕಾರಿಗಳು ಹಾಗೂ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಮಾತನಾಡಿದ ಅವರು, ಸರ್ಕಾರದ ಮಾರ್ಗಸೂಚಿಯಂತೆ ಅಗಸರು, ಕ್ಷೌರಿಕರು, ಟೈಲರ್‍ಗಳು, ಹಮಾಲಿಗಳು, ಚಿಂದಿ ಆಯುವವರು, ಕುಂಬಾರರು, ಭಟ್ಟಿಕಾರ್ಮಿಕರು, ಅಕ್ಕಸಾಲಿಗರು, ಮೆಕ್ಯಾನಿಕ್ ಗಳು, ಕಮ್ಮಾರರು ಹಾಗೂ ಗೃಹ ಕಾರ್ಮಿಕರು ಈ 11 ವಲಯದ ವೃತ್ತಿಯಲ್ಲಿ ತೊಡಗಿರುವ ಅಸಂಘಟಿತ ಕಾರ್ಮಿಕರಿಗೆ ಯೋಜನೆಯ ಮೂಲಕ ಒಂದು ಬಾರಿ ಪರಿಹಾರವಾಗಿ 2 ಸಾವಿರ ರೂ. ಗಳ ಆರ್ಥಿಕ ನೆರವನ್ನು ನೀಡಲಾಗುತ್ತದೆ ಎಂದರು.
2020 ನೇ ಸಾಲಿನ ಕೋವಿಡ್ ಲಾಕ್‍ಡೌನ್ ಸಂದರ್ಭದಲ್ಲಿ ಆರ್ಥಿಕ ನೆರವು ಪಡೆದ ಫಲಾನುಭವಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಈ ಸಾಲಿನಲ್ಲಿ ನೆರವು ಪಡೆಯದ ಕುಟುಂಬದ ಓರ್ವ ಕಾರ್ಮಿಕ ಪರಿಹಾರಕ್ಕೆ ಅರ್ಜಿ ಸಲ್ಲಿಸಬಹುದು. ಅರ್ಜಿ ನೀಡಲು ಹಾಗೂ ಸಲ್ಲಿಸಲು ನಗರದಲ್ಲಿ ಪ್ರತ್ಯೇಕವಾಗಿ ವಿಶೇಷ ಕೌಂಟರ್ ಸ್ಥಾಪಿಸಬೇಕು ಹಾಗೂ ಅಗತ್ಯ ಸಿಬ್ಬಂದಿಗಳನ್ನು ಇದಕ್ಕಾಗಿಯೇ ನೇಮಿಸಿ, ಜನರಿಗೆ ತೊಂದರೆಯಾಗದಂತೆ ಉದ್ಯೋಗ ಪ್ರಮಾಣ ಪತ್ರ ಕೊಡಬೇಕು ಎಂದು ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ತಿಳಿಸಿದರು.
ಮಹಾನಗರಪಾಲಿಕೆ ಆಯುಕ್ತ ವಿಶ್ವನಾಥ.ಪಿ.ಮುದಜ್ಜಿ ಪ್ರತಿಕ್ರಿಯಿಸಿ, ನಗರದಲ್ಲಿ ಈಗಾಗಲೇ ಒಟ್ಟು ಮೂರು ಕಡೆ ವಿಶೇಷವಾಗಿ ಕೌಂಟರ್ ಸ್ಥಾಪಿಸಲಾಗಿದೆ. ರಾಜೀವ್ ಗಾಂಧಿ ನಗರ, ಮಹಾನಗರಪಾಲಿಕೆ ಕಾರ್ಯಲಯ ಹಾಗೂ ಶಾಮನೂರು ರಸ್ತೆಯಲ್ಲಿರುವ ಆಶ್ರಯ ರಸ್ತೆ ಪಕ್ಕದಲ್ಲಿ ಒಂದು ಕಚೇರಿಯನ್ನು ತೆರೆದಿದ್ದು ಈ ಮೂರು ಕಡೆ ಉದ್ಯೋಗ ಪ್ರಮಾಣ ಪತ್ರ ನೀಡಲಾಗುತ್ತಿದೆ. ಹಾಗೂ ಪ್ರತಿ ಕಚೇರಿಗೂ ಅಗತ್ಯ ಸಿಬ್ಬಂದಿಗಳನ್ನು ನೇಮಕ ಮಾಡಲಾಗಿದೆ ಎಂದರು.
ಜಿಲ್ಲಾಧಿಕಾರಿ ಮಾತನಾಡಿ, ಈ ಮೂರು ವಿಶೇಷ ಕಾರ್ಯಾಲಯದ ಮುಂದೆ ಜನರಿಗೆ ತಿಳಿಯುವಂತೆ ಫ್ಲೆಕ್ಸ್ ಪ್ರದರ್ಶನ ಫಲಕ ಹಾಕಬೇಕು. ಮಹಾನಗರಪಾಲಿಕೆ ಕಾರ್ಯಾಲಯದಲ್ಲಿ ಸಿಬ್ಬಂದಿಗಳನ್ನು ನೇಮಿಸಬೇಕು. ಸಂಬಂಧಿಸಿದ ಎಲ್ಲ ಅಧಿಕಾರಿಗಳು ಒಂದು ಸಮಯವನ್ನು ನಿಗದಿಪಡಿಸಿಕೊಂಡು ಆ ನಿರ್ದಿಷ್ಟ ಸಮಯದಲ್ಲಿ ಸ್ಥಳದಲ್ಲಿ ಹಾಜರಿದ್ದು, ಅರ್ಜಿದಾರರಿಗೆ ಉದ್ಯೋಗ ಪ್ರಮಾಣ ಪತ್ರ ನೀಡಬೇಕು. ಜನರನ್ನು ವಿನಾಕಾರಣ ಸುಮ್ಮನೆ ಕಾಯಿಸುವುದಾಗಲೀ, ಅನಗತ್ಯವಾಗಿ ಕಚೇರಿಗೆ ಅಲೆದಾಡುವ ರೀತಿ ಮಾಡಬಾರದು. ವಿಶೇಷ ಅಭಿಯಾನದ ರೀತಿಯಲ್ಲಿ ಈ ಕೆಲಸ ಆಗಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಕಟ್ಟಡ ಕಾರ್ಮಿಕರಿಗೆ ಈ ಯೋಜನೆಯಡಿ ಅವಕಾಶ ಇರುವುದಿಲ್ಲ. ಅವರಿಗಾಗಿ ಪ್ರತ್ಯೇಕ ಯೋಜನೆ ಇದ್ದು ಅದನ್ನು ಸದುಪಯೋಗಪಡಿಸಿಕೊಳ್ಳಬೇಕು. ಒಂದು ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಮಂದಿ ವೃತ್ತಿಯಲ್ಲಿ ತೊಡಗಿದಲ್ಲಿ ಒಬ್ಬರು ಮಾತ್ರ ಪರಿಹಾರ ಪಡೆಯಲು ಅರ್ಹರಿರುತ್ತಾರೆ. ಹಾಗೂ ಒಬ್ಬ ವ್ಯಕ್ತಿ ಅಗಸರು ಎಂದು ಅರ್ಜಿ ಸಲ್ಲಿಸಿ ತದನಂತರ ಅಕ್ಕಸಾಲಿಗ, ಹಮಾಲಿ ಎಂದೋ ಅರ್ಜಿ ಸಲ್ಲಿಸಲು ಬರುವುದಿಲ್ಲ. ಒಂದು ಬಿಪಿಎಲ್ ಕಾರ್ಡ್ ಗೆ ಒಬ್ಬರಿಗೆ ಮಾತ್ರ ಅವಕಾಶ ಎಂದರು.
ಜಿಲ್ಲಾ ಕಾರ್ಮಿಕ ಅಧಿಕಾರಿ ಜಿ.ಇಬ್ರಾಹಿಂ ಸಾಬ್ ಮಾತನಾಡಿ, ಜಿಲ್ಲೆಯಲ್ಲಿ ಅಂಬೇಡ್ಕರ್ ಸಹಾಯ ಹಸ್ತ ಯೋಜನೆಯಲ್ಲಿ ಜೂ.08 ರವರೆಗೆ 7306 ಅಸಂಘಟಿತ ಕಾರ್ಮಿಕರು ನೋಂದಾಯಿಸಿಕೊಂಡಿದ್ದು ಅವರು ಪ್ರತ್ಯೇಕವಾಗಿ ಅರ್ಜಿ ಸಲ್ಲಿಸುವ ಅವಶ್ಯಕತೆಯಿರುವುದಿಲ್ಲ. ಅವರ ಖಾತೆಗೆ ನೇರವಾಗಿ ಪರಿಹಾರವನ್ನು ಜಮಾ ಮಾಡಲಾಗುತ್ತದೆ. ಸೇವಾ ಸಿಂಧು ಪೋರ್ಟಲ್‍ನಲ್ಲಿ ಜಿಲ್ಲೆಗೆ ಸಂಬಂಧಿಸಿದಂತೆ ಜೂ.13 ರವರೆಗೆ 6452 ಅರ್ಜಿಗಳು ಸ್ವೀಕೃತಗೊಂಡಿರುತ್ತವೆ. 406 ಅರ್ಜಿಗಳಿಗೆ ಅನುಮೋದನೆ ನೀಡಲಾಗಿದೆ ಮತ್ತು 35 ಅರ್ಜಿಗಳನ್ನು ವಿವಿಧ ಕಾರಣಗಳಿಗೆ ತಿರಸ್ಕರಿಸಲಾಗಿದೆ ಎಂದು ಮಾಹಿತಿ ನೀಡಿದರು.
ಯೋಜನೆಯಡಿ ಸರ್ಕಾರದ ನೆರವನ್ನು ಅರ್ಹರು ಮಾತ್ರ ಪಡೆದುಕೊಳ್ಳಬೇಕು. ಸುಳ್ಳು ಮಾಹಿತಿ ಅಥವಾ ದಾಖಲೆ ನೀಡಿ, ಯೋಜನೆ ದುರುಪಯೋಗ ಪಡಿಸಿಕೊಳ್ಳುವವರು ದಾಖಲೆ ಸಮೇತ ಸಿಕ್ಕಿಬಿದ್ದರೆ ಅಂತಹವರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕ್ರಿಮಿನಲ್ ಕೇಸ್ ದಾಖಲಿಸಿ ಕಾಯ್ದೆ ಐಪಿಸಿ 420 ರಡಿ ಶಿಕ್ಷೆಗೆ ಒಳಪಡಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದರು.
ಅರ್ಜಿ ಸಲ್ಲಿಕೆಗೆ ಷರತ್ತುಗಳು: ಪರವಾನಿಗೆ ಪಡೆದಿರುವ ಸಂಸ್ಥೆಯಲ್ಲಿ 4 ಕ್ಕಿಂತ ಹೆಚ್ಚು ಕಾರ್ಮಿಕರು, ಪರವಾನಿಗೆಯನ್ನು ಪಡೆಯದೆ ಇರುವ ಸಂಸ್ಥೆಯಲ್ಲಿ 2ಕ್ಕಿಂತ ಹೆಚ್ಚು ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರು ಅರ್ಜಿ ಸಲ್ಲಿಸಿದ್ದಲ್ಲಿ ತಪಾಸಣೆ ಕಡ್ಡಾಯವಾಗಿರುತ್ತದೆ. ಬೇರೆ ರಾಜ್ಯದ ಕಾರ್ಮಿಕರು ಸಹ ಪರಿಹಾರ ಪಡೆಯಲು ಅರ್ಹರಾಗಿರುತ್ತಾರೆ. ಆದರೆ, ಅಂತಹ ಫಲಾನುಭವಿ ಕಾರ್ಮಿಕರು ಕರ್ನಾಟಕ ಸರ್ಕಾರವು ನೀಡುವ ಬಿ.ಪಿ.ಎಲ್ ಕಾರ್ಡ್ ಹೊಂದಿರಬೇಕು. ಕುಟುಂಬದ ಒಬ್ಬರಿಗೆ ಮಾತ್ರ ಪರಿಹಾರ ನೀಡಲಾಗುವುದು. ಫಲಾನುಭವಿಗಳು ಸೇವಾ ಸಿಂಧು ಪೋರ್ಟಲ್‍ನಲ್ಲಿ ಮಾತ್ರ ಅರ್ಜಿ ಸಲ್ಲಿಸಬಹುದು. ಅರ್ಜಿದಾರರ ವಯೋಮಿತಿಯನ್ನು 18-65 ವರ್ಷಕ್ಕೆ ಸೀಮಿತಗೊಳಿಸಲಾಗಿದೆ. ಈ ಯೋಜನೆಯ ಸೌಲಭ್ಯವನ್ನು ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಮಾತ್ರ ಸೀಮಿತಗೊಳಿಸಲಾಗಿದೆ. ಅರ್ಜಿ ಸಲ್ಲಿಸುವ ಕಾರ್ಮಿಕರು ವೃತ್ತಿ ನಿರ್ವಹಿಸುತ್ತಿರುವ ಕುರಿತು ಸಂಬಂಧಿಸಿದ ಅಧಿಕಾರಿಗಳಿಂದ ಉದ್ಯೋಗ ಪ್ರಮಾಣ ಪತ್ರ ಪಡೆದಿರಬೇಕು.
ಉದ್ಯೋಗ ಧೃಡೀಕರಣ ನೀಡುವ ಅಧಿಕಾರಿಗಳು: ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಮಹಾನಗರ ಪಾಲಿಕೆ, ನಗರ ಸಭೆ, ಪುರ ಸಭೆ, ಪಟ್ಟಣ ಪಂಚಾಯ್ತಿಯ ಕಂದಾಯ ಅಧಿಕಾರಿ, ಕಂದಾಯ ನಿರೀಕ್ಷಕರು, ತಾಲ್ಲೂಕು ಮಟ್ಟದಲ್ಲಿ ಕಂದಾಯ ಇಲಾಖೆಯ ತಹಸಿಲ್ದಾರರು, ಉಪ ತಹಸಿಲ್ದಾರರು, ಕಂದಾಯ ಅಧಿಕಾರಿಗಳು, ಕಂದಾಯ ನಿರೀಕ್ಷಕರು, ಕಾರ್ಮಿಕ ಇಲಾಖೆಯ ಸಹಾಯಕ ಕಾರ್ಮಿಕ ಆಯುಕ್ತರು, ಕಾರ್ಮಿಕ ಅಧಿಕಾರಿಗಳು, ಹಿರಿಯ ಕಾರ್ಮಿಕ ನಿರೀಕ್ಷಕರು, ಕಾರ್ಮಿಕ ನಿರೀಕ್ಷಕರು, ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳು, ಹಮಾಲಿ ವೃತ್ತಿಯಲ್ಲಿ ತೊಡಗಿರುವ ಕಾರ್ಮಿಕರು ಮೇಲ್ಕಂಡ ಅಧಿಕಾರಿಗಳು ಅಥವಾ ತಾವು ಕೆಲಸ ನಿರ್ವಹಿಸುತ್ತಿರುವ ಇಲಾಖೆ, ಮಂಡಳಿ, ನಿಗಮದ ಅಧಿಕೃತ ಅಧಿಕಾರಿಗಳು, ಯಾವುದೇ ಇಲಾಖೆಯ ಪತ್ರಾಂಕಿತ ಅಧಿಕಾರಿಗಳಿಂದ ಉದ್ಯೋಗ ಪತ್ರ ಪಡೆಯಬಹುದು.
ಅರ್ಜಿ ಸಲ್ಲಿಸುವ ವಿಧಾನ: ಅರ್ಹ ಫಲಾನುಭವಿ ಕಾರ್ಮಿಕರು ಸೇವಾಸಿಂಧು ಪೋರ್ಟಲ್‍ನಲ್ಲಿ ಮಾತ್ರ ಅಗತ್ಯ ಮಾಹಿತಿ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು. ನಿಗಧಿ ಪಡಿಸಿದ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡುವುದು. ಆಧಾರ್ ಕಾರ್ಡ್, ವಿಳಾಸ ದೃಢಿಕರಣ, ಮೊಬೈಲ್ ಸಂಖ್ಯೆ, ಜನ್ಮ ದಿನಾಂಕ, ಬಿಪಿಎಲ್ ಕಾರ್ಡ್, ಪಾಸ್‍ಪೋರ್ಟ್ ಅಳತೆಯ ಭಾವಚಿತ್ರ, ಬ್ಯಾಂಕ್ ಖಾತೆಯ ವಿವರ, ಸ್ವಯಂ ಘೋಷಣೆ, ಅರ್ಜಿದಾರರ ವೃತ್ತಿಯ ಕುರಿತು ಉದ್ಯೋಗ ಪ್ರಮಾಣ ಪತ್ರಗಳನ್ನು ಸೇವಾ ಸಿಂಧು ಪೋರ್ಟಲ್‍ನಲ್ಲಿ ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿಗಳು ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸಿಇಒ ಡಾ.ವಿಜಯ ಮಹಾಂತೇಶ ದಾನಮ್ಮನವರ್, ಮಹಾನಗರಪಾಲಿಕೆ ಆಯುಕ್ತ ವಿಶ್ವನಾಥ.ಪಿ.ಮುದಜ್ಜಿ, ನಗರಾಭಿವೃದ್ಧಿ ಇಲಾಖೆ ಯೋಜನಾ ನಿರ್ದೇಶಕಿ ನಜ್ಮ.ಜಿ., ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಕೌಸರ್ ರೇಷ್ಮಾ.ಜಿ., ನಗರಸಭೆ ಪೌರಾಯುಕ್ತೆ ಲಕ್ಷ್ಮೀ.ಎಸ್., ಎಪಿಎಂಸಿ ಕಾರ್ಯದರ್ಶಿ ಕೆ.ಸಿ.ದೊರೆಸ್ವಾಮಿ, ಕೃಷಿ ಮಾರಾಟ ಇಲಾಖೆ ಸಹಾಯಕ ನಿರ್ದೇಶಕ ಜೆ.ಪ್ರಭು ಸೇರಿದಂತೆ ವಿವಿಧ ವಲಯದ ಅಸಂಘಟಿತ ಕಾರ್ಮಿಕ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಪಾಲ್ಗೊಂಡಿದ್ದರು.