ಜೆಡಿಎಸ್ ತೊರೆದು ಅಧಿಕೃತವಾಗಿ ಕೈ ಹಿಡಿದ ಗುಬ್ಬಿ ಶ್ರೀನಿವಾಸ್

ಬೆಂಗಳೂರು: ಗುಬ್ಬಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎಸ್.ಆರ್. ಶ್ರೀನಿವಾಸ್ ಗುರುವಾರ ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರಿದರು.
ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಪಕ್ಷದ ಶಾಲು ಮತ್ತು ಬಾವುಟ ನೀಡುವ ಮೂಲಕ ಶ್ರೀನಿವಾಸ್ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸ್ವಾಗತಿಸಿದರು.
ಜೆಡಿಎಸ್‌ನಿಂದ ಗುಬ್ಬಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಸತತವಾಗಿ ನಾಲ್ಕು ಬಾರಿ ಆಯ್ಕೆಯಾಗಿದ್ದ ಶ್ರೀನಿವಾಸ್, ಕೆಲವು ತಿಂಗಳುಗಳಿಂದ ಪಕ್ಷದ ಚಟುವಟಿಕೆಗಳಿಂದ ದೂರ ಉಳಿದಿದ್ದರು. ಸೋಮವಾರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ತಮ್ಮ ನೂರಾರು ಬೆಂಬಲಿಗರೊಂದಿಗೆ ಗುರುವಾರ ಕಾಂಗ್ರೆಸ್ ಸೇರಿದರು.
ಈ ಸಂದರ್ಭದಲ್ಲಿ ಎಸ್.ಆರ್. ಶ್ರೀನಿವಾಸ್ ಮಾತನಾಡಿ, ‘ಎಚ್.ಡಿ. ಕುಮಾರಸ್ವಾಮಿ ಅವರು ನನ್ನನ್ನು ಜೆಡಿಎಸ್ ಪಕ್ಷದಲ್ಲಿ ಮೂಲೆಗುಂಪು ಮಾಡಿದ್ದರು. ನಾನು ಶಾಸಕನಾಗಿರುವಾಗಲೇ ಬೇರೆ ಅಭ್ಯರ್ಥಿಯನ್ನು ಘೋಷಿಸಿದ್ದರು. ಅವರಿಂದ ಆದ ಅವಮಾನಕ್ಕೆ ಬೇಸತ್ತು ಕಾಂಗ್ರೆಸ್ ಸೇರಿದ್ದೇನೆ. ನಾನು ಮೂಲತಃ ಕಾಂಗ್ರೆಸ್ ಪಕ್ಷದವನು. ಈಗ ಬಿಜೆಪಿ ಸೇರಲು ಇಷ್ಟ ಆಗಲಿಲ್ಲ. ಆದ್ದರಿಂದ ಕಾಂಗ್ರೆಸ್ ಪಕ್ಷಕ್ಕೆ ಬಂದಿದ್ದೇನೆ ಎಂದರು.