ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ:ಚಿತ್ರದುರ್ಗ ಜಿಲ್ಲಾಡಳಿತದಿಂದ ಸರಳವಾಗಿ ಆಚರಣೆ

ಚಿತ್ರದುರ್ಗ
ಕೋವಿಡ್-19 ಸಾಂಕ್ರಾಮಿಕ ರೋಗ ಹರಡದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಲಾಕ್ಡೌನ್ ಜಾರಿಯಲ್ಲಿರುವ ಹಿನ್ನಲೆಯಲ್ಲಿ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿಯನ್ನು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಸರಳವಾಗಿ ಆಚರಿಸಲಾಯಿತು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ನಗರಸಭೆ ವತಿಯಿಂದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮವನ್ನು ಸರಳವಾಗಿ ಹಮ್ಮಿಕೊಳ್ಳಲಾಗಿತ್ತು.
ಅಪರ ಜಿಲ್ಲಾಧಿಕಾರಿ ಈ.ಬಾಲಕೃಷ್ಣ, ಜಿಲ್ಲಾ ವಾರ್ತಾಧಿಕಾರಿ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಬಿ.ಧನಂಜಯ ಅವರು ಹೇಮರೆಡ್ಡಿ ಮಲ್ಲಮ್ಮ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಸಮರ್ಪಿಸಿದರು.
ನಂತರ ಮಾತನಾಡಿದ ಅಪರ ಜಿಲ್ಲಾಧಿಕಾರಿ ಈ.ಬಾಲಕೃಷ್ಣ ಅವರು, ಸಂಕಷ್ಟದ ಸಂದರ್ಭದಲ್ಲೂ ಎಲ್ಲರ ಒಳಿತನ್ನೇ ಬಯಸಿದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಆದರ್ಶ ಜೀವನ ನಡೆಸಿ ಎಲ್ಲರಿಗೂ ಆದರ್ಶವಾಗಿದ್ದಾರೆ. ಮಲ್ಲಮ್ಮ ಅವರ ಜೀವನದ ಮೌಲ್ಯಗಳು ಸ್ತ್ರೀಕುಲಕ್ಕೆ ಅಮೂಲ್ಯ ಕಾಣಿಕೆಯಾಗಿವೆ ಎಂದು ಹೇಳಿದರು.
ಸಮಾಜದ ಪ್ರತಿಯೊಬ್ಬರು ಮಹಾಸಾದ್ವಿ ಹೇಮರೆಡ್ಡಿ ಮಲ್ಲಮ್ಮ ಅವರ ಆದರ್ಶ ಅರಿತು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಜಿಲ್ಲಾ ವಾರ್ತಾಧಿಕಾರಿ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಬಿ.ಧನಂಜಯ ಮಾತನಾಡಿ, ಸಮಸ್ಯೆಗಳನ್ನು ಧೈರ್ಯವಾಗಿ ಎದುರಿಸಿ ಬದುಕುವುದೇ ನಿಜವಾದ ಜೀವನ. ಸಮಸ್ಯೆ, ಸಂಕಷ್ಟಗಳ ನಡುವೆಯೂ ಶಿವಶರಣೆ ಮಲ್ಲಮ್ಮ ಅವರು ಸಮಾಜಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ. ಅವರ ತತ್ವ, ಸಿದ್ದಾಂತಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.