ಹಿಜಾಬ್ ಮತ್ತು ಕೇಸರಿ ಶಾಲು ವಿವಾದ ದಾವಣಗೆರೆ ನಗರ ಹಾಗೂ ಹರಿಹರ ತಾಲ್ಲೂಕಿನ ಫೆ. 11 ರವರೆಗೆ ನಿಷೇಧಾಜ್ಞೆ ವಿಸ್ತರಣೆ 

ದಾವಣಗೆರೆ: ಹಿಜಾಬ್ ಮತ್ತು ಕೇಸರಿ ಶಾಲು ವಿವಾದ ಹಿನ್ನೆಲೆಯಲ್ಲಿ ಶಾಂತಿ ಪಾಲನೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ದಾವಣಗೆರೆ ಮಹಾನಗರಪಾಲಿಕೆ ಹಾಗೂ ಹರಿಹರ ತಾಲ್ಲೂಕಿನಾದ್ಯಂತ ನಿಷೇಧಾಜ್ಞೆಯನ್ನು ಫೆ.11 ರ ಮಧ್ಯರಾತ್ರಿ 12 ಗಂಟೆಯವರೆಗೆ ವಿಸ್ತರಣೆಗೊಳಿಸಿ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ಆದೇಶ ಹೊರಡಿಸಿದ್ದಾರೆ.

ರಾಜ್ಯದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯು ಶಾಲಾ ಕಾಲೇಜುಗಳಲ್ಲಿ ವಸ್ತ್ರ ಸಂಹಿತೆಯನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ. ಆದರೆ ಕೆಲವು ವಿದ್ಯಾರ್ಥಿಗಳು, ಸಂಘಟನೆಗಳು ಪ್ರತಿಭಟನೆ ನಡೆಸುತ್ತಿರುವುದು ಕಂಡುಬಂದಿದ್ದು, ದಾವಣಗೆರೆ ನಗರದಲ್ಲಿ ಪರ ಮತ್ತು ವಿರೋಧದ ಪ್ರತಿಭಟನೆಗಳು ಜರುಗಿವೆ. ಈ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಚರ್ಚಿಸಿದ್ದು, ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಕಾನೂನು ಮತ್ತು ಸುವ್ಯವಸ್ಥೆ ಪಾಲನೆ ಹಿತದೃಷ್ಟಿಯಿಂದ ದಾವಣಗೆರೆ ಮಹಾನಗರಪಾಲಿಕೆ ಹಾಗೂ ಹರಿಹರ ತಾಲ್ಲೂಕಿನಾದ್ಯಂತ ಫೆ.11 ರಂದು ಮಧ್ಯರಾತ್ರಿ 12 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ನಿಷೇಧಿತ ವ್ಯಾಪ್ತಿಯಲ್ಲಿ ಕಾನೂನು ಭಂಗ ಉಂಟುಮಾಡುವ ಉದ್ದೇಶದಿಂದ ಐದಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಯಾವುದೇ ಮೆರವಣಿಗೆ, ಸಭೆ, ಸಮಾರಂಭ, ವಿಜಯೋತ್ಸವ, ಇತರೆ ಸಾರ್ವಜನಿಕ ಸಮಾವೇಶಗಳನ್ನು ನಿಷೇಧಿಸಲಾಗಿದೆ. ಶಸ್ತ್ರ, ದೊಣ್ಣೆ, ಕತ್ತಿ, ಕಲ್ಲು, ಚಾಕು ಮತ್ತಿತರೆ ಮಾರಕಾಸ್ತ್ರಗಳನ್ನು ಅಥವಾ ದೈಹಿಕ ಹಿಂಸೆ ಉಂಟುಮಾಡುವ ಯಾವುದೇ ವಸ್ತುಗಳು, ಸ್ಫೋಟಕ ವಸ್ತುಗಳನ್ನು ಒಯ್ಯುವುದು ಅಥವಾ ಶೇಖರಿಸುವುದನ್ನು ನಿಷೇಧಿಸಿದೆ. ಯಾವುದೇ ವ್ಯಕ್ತಿಗಳ ಅಥವಾ ಶವಗಳ ಪ್ರತಿಕೃತಿ ಪ್ರದರ್ಶನ ಮಾಡುವುದು, ಪ್ರಚೋದಿಸಬಹುದಾದಂತಹ ಬಹಿರಂಗ ಘೋಷಣೆ ಕೂಗುವುದು, ಸಂಜ್ಞೆ ಮಾಡುವುದು, ಹಾಡುವುದು, ಸಂಗೀತ ನುಡಿಸುವುದು, ಚಿತ್ರಗಳನ್ನು ಸಂಕೇತಗಳನ್ನು, ಭಿತ್ತಿಪತ್ರ ಅಥವಾ ಇತರೆ ಯಾವುದೇ ವಸ್ತುಗಳನ್ನು ಅಥವಾ ಪದಾರ್ಥಗಳನ್ನು ಪ್ರದರ್ಶಿಸುವುದನ್ನು ನಿಷೇಧಿಸಿದೆ. ಯಾವುದೇ ಖಾಸಗಿ, ಸಾರ್ವಜನಿಕ ಆಸ್ತಿಗಳನ್ನು ಹಾನಿಗೊಳಿಸುವ, ವಿರೂಪಗೊಳಿಸುವ ಎಲ್ಲ ರೀತಿಯ ಚಟುವಟಿಕೆಗಳನ್ನು ನಿಷೇಧಿಸಿದೆ. ಯಾವುದೇ ವ್ಯಕ್ತಿ ಜಾತಿ, ಧರ್ಮ, ಕೋಮು, ಪಂಥಗಳಿಗೆ ಅಥವಾ ಸಾರ್ವಜನಿಕ ನೈಜಕತೆಗೆ ಬಾಧಕ ಉಂಟು ಮಾಡಬಹುದಾದಂತಹ ಚಟುವಟುಕೆಗಳನ್ನು ನಿಷೇಧಿಸಿದೆ. ಸರ್ಕಾರಿ ಸಂಸ್ಥೆಗಳು, ಸಂಘಟನೆಗಳು, ಹಾಗೂ ಕಾರ್ಯನಿರತ ಅಧಿಕಾರಿ, ಸಿಬ್ಬಂದಿ ವಿರುದ್ಧ ನಿಂದಿಸುವಂತಹ ಅವಹೇಳನಕಾರಿಯಾದಂತಹ ಯಾವುದೇ ಘೋಷಣೆ, ಭಾಷಣ, ಪ್ರಕಟಣೆ, ಅವಾಚ್ಯ ಶಬ್ದಗಳ ಬಳಕೆ, ಪ್ರಚೋದನಾಕಾರಿ ಭಾಷಣ, ಗಾಯನ ಇತ್ಯಾದಿ ಚಟುವಟಿಕೆಗಳನ್ನು ನಿಷೇಧಿಸಿದೆ. ಈಗಾಗಲೆ ಸರ್ಕಾರದ ಕಾರ್ಯಕ್ರಮಗಳು ನಿಗದಿಯಾಗಿದ್ದಲ್ಲಿ ಜಿಲ್ಲಾಧಿಕಾರಿಗಳ ಅನುಮತಿಯಿಲ್ಲದೆ ಮುಂದುವರೆಯತಕ್ಕದ್ದಲ್ಲ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!