ಜಿಲ್ಲೆಯ ಎಲ್ಲಾ ಕಚೇರಿಗಳಲ್ಲಿ ರಾಷ್ಟ್ರಧ್ವಜಾರೋಹಣ ಕಡ್ಡಾಯ; ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ

ದಾವಣಗೆರೆ: ಬರುವ ಆಗಸ್ಟ್ 15 ರಂದು ನಡೆಯುವ ಸ್ವಾತಂತ್ರ್ಯ ದಿನಾಚರಣೆ ಆಚರಣೆ ಮಾಡುವ ಮೂಲಕ ಎಲ್ಲಾ ಕಚೇರಿಗಳಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಬೇಕೆಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ. ತಿಳಿಸಿದರು.
ಅವರು ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲಾ ಆಡಳಿತದಿಂದ ಜಿಲ್ಲಾ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸಲಾಗುತ್ತದೆ. ಇಲ್ಲಿ ಆ.15 ರ ಬೆಳಗ್ಗೆ 9 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರು ರಾಷ್ಟ್ರಧ್ವಜಾರೋಹಣ ನೆರವೇರಿಸುವರು.
ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ರಾಷ್ಟ್ರಧ್ವಜ ಸಂಹಿತೆಯನ್ವಯ ಧ್ವಜಾರೋಹಣ ನೆರವೇರಿಸಬೇಕು, ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿಯು ಸಹ ರಾಷ್ಟ್ರಧ್ವಜಾರೋಹಣ ನೆರವೇರಿಸಬೇಕು. ಯಾವುದೇ ಕಚೇರಿಗಳಲ್ಲಿ ಸಹ ಅಗೌರವ ತೋರುವ ಪ್ರಕರಣಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕೆಂದು ವಿವಿಧ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಆಕರ್ಷಕ ಮತ್ತು ಸಂಭ್ರಮಾಚರಣೆ ಬಿಂಬಿಸುವ 3 ರಿಂದ 4 ಸಾಂಸ್ಕೃಂತಿಕ ಕಾರ್ಯಕ್ರಮಗಳನ್ನು ಆಯೋಜಿಸಲು ತಿಳಿಸಿ ಸಾಂಸ್ಕೃಂತಿಕ ಕಾರ್ಯಕ್ರಮಗಳಲ್ಲಿ ಹೆಚ್ಚು ಮಕ್ಕಳು ಭಾಗವಹಿಸುವಂತೆ ನೋಡಿಕೊಳ್ಳಬೇಕು. ಸ್ವಾತಂತ್ರ್ಯ ಹೋರಾಟಗಾರರಿಗೆ ಸನ್ಮಾನ ಸೇರಿದಂತೆ ಆಕರ್ಷಕ ಪಥಸಂಚಲನವನ್ನು ಆಯೋಜಿಸಲು ಪೊಲೀಸ್ ಇಲಾಖೆಗೆ ತಿಳಿಸಿದರು.
ಪಾಲಿಕೆಯಿಂದ ವೇದಿಕೆ, ಅಲಂಕಾರ, ಶಾಮಿಯಾನ, ಆಸನದ ವ್ಯವಸ್ಥೆ, ಹೂವಿನ ಅಲಂಕಾರ ಕೈಗೊಳ್ಳಲು ಸೂಚನೆ ನೀಡಿ ಎಲ್ಲಾ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕಡ್ಡಾಯವಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಕೃಷ್ಣನಾಯ್ಕ್, ಹೆಚ್ಚುವರಿ ರಕ್ಷಣಾಧಿಕಾರಿ ರಾಮಗೊಂಡ ಬಸರಗಿ, ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.