Hostel; ಜಿಲ್ಲೆಯಲ್ಲಿ 21,642ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಸರ್ಕಾರಿ ವಸತಿ ಸೌಲಭ್ಯ
ದಾವಣಗೆರೆ, ಆ. 29: ದಾವಣಗೆರೆ ಜಿಲ್ಲೆಯಲ್ಲಿ ಸರ್ಕಾರದ ವಿವಿಧ ಇಲಾಖೆಗಳಾದ ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿನ ಹಾಸ್ಟೆಲ್ (Hostel) ಮತ್ತು ವಸತಿ ಶಾಲೆಗಳ ಮೂಲಕ 21642ಕ್ಕೂ ಹೆಚ್ಚಿನ ವಿದ್ಯಾರ್ಥಿಗಳಿಗೆ ಊಟ, ವಸತಿ ಸೌಲಭ್ಯ ಮತ್ತು ಶಾಲೆಯ ಸೌಲಭ್ಯ ಕಲ್ಪಿಸಲಾಗಿದೆ.
ಸಮಾಜ ಕಲ್ಯಾಣ ಇಲಾಖೆ: ಸಮಾಜ ಕಲ್ಯಾಣ ಇಲಾಖೆಯಿಂದ ಮೆಟ್ರಿಕ್ ಪೂರ್ವ 38 ಹಾಗೂ ಮೆಟ್ರಿಕ್ ನಂತರದ 28 ಹಾಸ್ಟೆಲ್ ಗಳಿದ್ದು ಇವುಗಳಿಂದ 7050 ವಿದ್ಯಾರ್ಥಿಗಳಿಗೆ ಊಟ, ವಸತಿ ಸೌಲಭ್ಯವನ್ನು ಕಲ್ಪಿಸಲಾಗಿದೆ.
ಬಿಸಿಎಂ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 35 ಮೆಟ್ರಿಕ್ ಪೂರ್ವ ಮತ್ತು 45 ಮೆಟ್ರಿಕ್ ನಂತರ ಹಾಸ್ಟೆಲ್ ಗಳನ್ನು ನಡೆಸಲಾಗುತ್ತಿದ್ದು ಇವುಗಳಲ್ಲಿ 7000ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಊಟ, ವಸತಿ ಸೌಲಭ್ಯ ಕಲ್ಪಿಸಲಾಗಿದೆ.
ಪರಿಶಿಷ್ಟ ವರ್ಗಗಳ ಕಲ್ಯಾಣ: ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ದಾವಣಗೆರೆ, ಚನ್ನಗಿರಿ ಹಾಗೂ ಜಗಳೂರು ತಾಲ್ಲೂಕಿನಲ್ಲಿ ಒಟ್ಟು 14 ಮೆಟ್ರಿಕ್ ಪೂರ್ವ ಮತ್ತು ನಂತರದ ಹಾಸ್ಟೆಲ್ ಗಳನ್ನು ನಡೆಸಲಾಗುತ್ತಿದ್ದು ಒಟ್ಟು 1327 ವಿದ್ಯಾರ್ಥಿಗಳಿಗೆ ಊಟ, ವಸತಿ ಕಲ್ಪಿಸಲಾಗಿದೆ.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಜಿಲ್ಲೆಯಲ್ಲಿ ಒಟ್ಟು 7 ಮಟ್ರಿಕ್ ನಂತರದ ಬಾಲಕ, ಬಾಲಕಿಯರ ವಿದ್ಯಾರ್ಥಿ ನಿಲಯಗಳಿದ್ದು ಇವುಗಳಲ್ಲಿ 425 ವಿದ್ಯಾರ್ಥಿಗಳಿಗೆ ಊಟ, ವಸತಿ ಕಲ್ಪಿಸಲಾಗಿದೆ.
ವಸತಿ ಶಾಲೆಗಳು: ಜಿಲ್ಲೆಯಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಇಂದಿರಾಗಾಂಧಿ ವಸತಿ ಶಾಲೆ, ಡಾ; ಬಿ.ಆರ್.ಅಂಬೇಡ್ಕರ್ ವಸತಿ ಶಾಲೆ, ಪದವಿ ಪೂರ್ವ ವಸತಿ ಶಾಲೆ ಸೇರಿದಂತೆ ಒಟ್ಟು 23 ವಿವಿಧ ವಸತಿ ಶಾಲೆಗಳಿವೆ. ಈ ಶಾಲೆಗಳಲ್ಲಿ6ನೇ ತರಗತಿಯಿಂದ ದ್ವಿತೀಯ ಪಿ.ಯು.ಸಿ ವರೆಗೆ ಒಟ್ಟು 5840 ವಿದ್ಯಾರ್ಥಿಗಳಿಗೆ ವಸತಿಯುತ ಶಿಕ್ಷಣವನ್ನು ನೀಡಲಾಗುತ್ತಿದೆ.
Free Electricity; ನೇಕಾರರಿಗೆ 10 ಹೆಚ್.ಪಿ ವರೆಗೆ ಉಚಿತ ವಿದ್ಯುತ್ : ಮುಖ್ಯಮಂತ್ರಿ ಸಿದ್ದರಾಮಯ್ಯ
ಹಾಸ್ಟೆಲ್ ಸೌಲಭ್ಯ ಹೆಚ್ಚಿಸಲು ಈಗಾಗಲೇ ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿರುವ ಹಾಸ್ಟೆಲ್ ಗಳಿಗೆ ಸ್ವಂತ ಕಟ್ಟಡಗಳನ್ನು ನಿರ್ಮಾಣ ಮಾಡಲು ನಗರಾಭಿವೃದ್ಧಿ ಪ್ರಾಧಿಕಾರ ಮತ್ತು ಮಹಾನಗರ ಪಾಲಿಕೆಯಿಂದ ಹಾಗೂ ನಗರಾಭಿವೃದ್ಧಿ ಕೋಶದ ಮೂಲಕ ವಿವಿಧ 25 ಹಾಸ್ಟೆಲ್ ಗಳಿಗೆ ನಾಗರೀಕ ಸೌಲಭ್ಯವುಳ್ಳ ನಿವೇಶನವನ್ನು ಮಂಜೂರು ಮಾಡಿದೆ. ಆಯಾ ಇಲಾಖೆಯ ಅಧಿಕಾರಿಗಳು ನಿವೇಶನ ನೊಂದಾಯಿಸಿಕೊಂಡು ಕಟ್ಟಡವನ್ನು ನಿರ್ಮಾಣ ಮಾಡಲು ಜಿಲ್ಲಾಧಿಕಾರಿ ಡಾ: ವೆಂಕಟೇಶ್ ಎಂ.ವಿ. ಅವರು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಗುಂಜನ್ ಕೃಷ್ಣ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಸಭೆಯ ವೇಳೆ ಸೂಚನೆ ನೀಡಿದರು.
ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಇಟ್ನಾಳ್, ಜಿಲ್ಲಾ ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಕೆ.ನಾಗರಾಜ್, ಬಿ.ಸಿ.ಎಂ.ಜಿಲ್ಲಾ ಅಧಿಕಾರಿ ಗಾಯಿತ್ರಿ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಶಂಕರ ಬಂಕಾಪುರಮಠ, ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಮಲ್ಲಿಕಾರ್ಜುನ್ ಮಠದ್ ಉಪಸ್ಥಿತರಿದ್ದರು.