ಎಲ್ಲ ನ್ಯಾಯಾಲಯಗಳಲ್ಲಿ ಮಾ. 12 ರಂದು ರಾಷ್ಟ್ರೀಯ ಲೋಕ್ ಅದಾಲತ್

ದಾವಣಗೆರೆ: ರಾಷ್ಟ್ರೀಯ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೆಶನದ ಮೇರೆಗೆ ದಾವಣಗೆರೆ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಮಾ. 12 ರಂದು ರಾಷ್ಟ್ರೀಯ ಲೋಕ್ ಅದಾಲತ್ ಆಯೋಜಿಸಲಾಗಿದ್ದು, ನ್ಯಾಯಾಲಯದಲ್ಲಿರುವ ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಈ ಸಂದರ್ಭದಲ್ಲಿ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ.
ರಾಷ್ಟ್ರೀಯ ಲೋಕ್ ಅದಾಲತ್ ಮೂಲಕ ಅತಿ ಹೆಚ್ಚು ಪ್ರಕರಣಗಳನ್ನು ವಿಲೇವಾರಿ ಮಾಡಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕೆಂದು ಉದ್ದೇಶಿಸಲಾಗಿದ್ದು, ದಾವಣಗೆರೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಜಿಲ್ಲೆಯಲ್ಲಿರುವ ಎಲ್ಲಾ ನ್ಯಾಯಾಲಯಗಳು ತಮ್ಮ ತಮ್ಮ ವ್ಯಾಪ್ತಿಯಲ್ಲಿ ಮಾ. 12 ರಂದು ಲೋಕ್ ಅದಾಲತ್‍ನ್ನು ಆಯೋಜಿಸಲಿವೆ.

ನ್ಯಾಯಾಲಯದಲ್ಲಿ ಚಾಲ್ತಿಯಲ್ಲಿರುವ ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಕಡಿಮೆ ಖರ್ಚಿನಲ್ಲಿ ಶೀಘ್ರವಾಗಿ ಲೋಕ್ ಅದಾಲತ್‍ನಲ್ಲಿ ಪರಿಹರಿಸಿಕೊಳ್ಳಲು ಸಾರ್ವಜನಿಕರಿಗೆ ಅವಕಾಶ ಕಲ್ಪಿಸಿಕೊಡಲಾಗಿದೆ. ರಾಜಿಯಾಗಬಲ್ಲ ಎಲ್ಲಾ ಸಿವಿಲ್ ಹಾಗೂ ಕ್ರಿಮಿನಲ್ ಪ್ರಕರಣಗಳು, ಮೊಟಾರ್ ವಾಹನ ಅಪಘಾತ ಪರಿಹಾರ ಪ್ರಕರಣಗಳು, ಚೆಕ್ ಅಮಾನ್ಯ ಪ್ರಕರಣಗಳು, ಭೂಸ್ವಾಧೀನ ಪರಿಹಾರ ಪ್ರಕರಣಗಳು, ಬ್ಯಾಂಕ್ ಸಾಲ ವಸೂಲಾತಿ ಪ್ರಕರಣಗಳು, ಎಂ.ಎಂ.ಡಿ.ಆರ್. ಕಾಯ್ದೆಯಡಿಯ ಪ್ರಕರಣಗಳನ್ನು ಲೋಕ್ ಅದಾಲತ್ ನಲ್ಲಿ ಪರಿಹರಿಸಿಕೊಳ್ಳಬಹುದು. ಕೌಟುಂಬಿಕ ನ್ಯಾಯಾಲಯದ ಪ್ರಕರಣಗಳು(ವಿಚ್ಛೇಧನ ಹೊರತುಪಡಿಸಿ), ಪಿಂಚಣಿ ಪ್ರಕರಣಗಳು, ವೇತನ ಭತ್ಯೆ ಸಂಬಂಧಿಸಿದ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕ, ಕೈಗಾರಿಕೆ ಕಾರ್ಮಿಕರ ವೇತನ, ಕಾರ್ಮಿಕ ವಿವಾದ ಇತ್ಯಾದಿ ಪ್ರಕರಣಗಳನ್ನು ಪರಸ್ಪರ ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳಬಹುದು.

ಸಾರ್ವಜನಿಕರು ರಾಷ್ಟ್ರೀಯ ಲೋಕ್ ಅದಾಲತ್‍ನ ಸಂಪೂರ್ಣ ಸದುಪಯೋಗ ಪಡೆದುಕೊಳ್ಳಬೇಕು ಹಾಗೂ ಹೆಚ್ಚಿನ ಮಾಹಿತಿಗಾಗಿ ದಾವಣಗೆರೆ ಹಳೆಯ ನ್ಯಾಯಾಲಯ ಸಂಕೀರ್ಣದಲ್ಲಿರುವ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ದಾವಣಗೆರೆ ಇವರನ್ನು ಅಥವಾ ದೂರವಾಣಿ ಸಂಖ್ಯೆ: 08192-296364, ತಾಲ್ಲೂಕು ಕಾನೂನು ಸೇವಾ ಸಮಿತಿಗಳಾದ ಹರಿಹರ 08192-296885, ಹೊನ್ನಾಳಿ ಚನ್ನಗಿರಿ 08189-229195 ಮತ್ತು ಜಗಳೂರು ದೂರವಾಣಿ ಸಂಖ್ಯೆ: 08196-227600 ಇವರನ್ನು ಸಂಪರ್ಕಿಸಬಹುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರವೀಣ ನಾಯಕ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!