ಈ ವರ್ಷದಲ್ಲಿ ಜಿಲ್ಲೆಯಲ್ಲಿ 3 ಬಾಲ್ಯ ವಿವಾಹ : ಕಠಿಣ ಕ್ರಮಕ್ಕೆ ಜಿಲ್ಲಾಧಿಕಾರಿ ತಾಕೀತು

IMG-20210819-WA0027

ದಾವಣಗೆರೆ: ಜಿಲ್ಲೆಯಲ್ಲಿ ಈ ವರ್ಷ ಏಪ್ರಿಲ್‌ನಿಂದ ಈವರೆಗೆ ಒಟ್ಟು 41 ಬಾಲ್ಯ ವಿವಾಹ ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ 38 ವಿವಾಹಗಳನ್ನು ತಡೆಗಟ್ಟಿದ್ದು, 03 ವಿವಾಹಗಳು ಜರುಗಿವೆ. ಬಾಲ್ಯ ವಿವಾಹ ಪ್ರಕರಣಗಳಲ್ಲಿ ಅಧಿಕಾರಿಗಳು ಯಾವುದೇ ಕರುಣೆ, ದಾಕ್ಷಿಣ್ಯ ಅಥವಾ ಪ್ರಭಾವಕ್ಕೆ ಒಳಗಾಗದೆ ಕಠಿಣ ಕ್ರಮ ಜರುಗಿಸಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಸಂಬಂಧಿಸಿದ ಜಿಲ್ಲಾ ಮಟ್ಟದ ವಿವಿಧ ಸಮಿತಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ದಾವಣಗೆರೆ ತಾಲ್ಲೂಕಿನಲ್ಲಿ 10, ಜಗಳೂರು-02, ಹರಿಹರ-01, ಹೊನ್ನಾಳಿ ಮತ್ತು ಚನ್ನಗಿರಿ ತಾಲ್ಲೂಕಿನಲ್ಲಿ ತಲಾ 14 ಬಾಲ್ಯ ವಿವಾಹ ಪ್ರಕರಣಗಳು ದಾಖಲಾಗಿವೆ. ಈ ಪೈಕಿ ದಾವಣಗೆರೆ ತಾಲ್ಲೂಕಿನಲ್ಲಿ ಮಾತ್ರ 03 ಪ್ರಕರಣಗಳಲ್ಲಿ ಎಫ್‌ಐಆರ್ ದಾಖಲಾಗಿವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವಿಜಯಕುಮಾರ್ ಮಾಹಿತಿ ನೀಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ಹೊನ್ನಾಳಿ ಮತ್ತು ಚನ್ನಗಿರಿ ತಾಲ್ಲೂಕಿನಲ್ಲಿ ಅಧಿಕಾರಿಗಳು ಪಡೆದ ಮಾಹಿತಿ ಹಾಗೂ ಮಕ್ಕಳ ಸಹಾಯವಾಣಿ ಕಾರಣಗಳಿಂದ ಹೆಚ್ಚು ಪ್ರಕರಣಗಳು ಪತ್ತೆಯಾಗಿವೆ. ಆದರೆ ಉಳಿದ ತಾಲ್ಲೂಕಿನಲ್ಲಿ ಪ್ರಕರಣ ದಾಖಲಾಗಿಲ್ಲ ಎಂದರೆ, ಅಲ್ಲಿ ಬಾಲ್ಯ ವಿವಾಹ ನಡೆದಿಲ್ಲ ಎಂದರ್ಥವಲ್ಲ. ಉಳಿದ ತಾಲ್ಲೂಕುಗಳಲ್ಲಿ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡಿಲ್ಲ, ಹೀಗಾಗಿ ಪ್ರಕರಣಗಳು ಕಂಡುಬಂದಿಲ್ಲ ಎಂದು ದೂರಿದರು.

ಬಾಲ್ಯ ವಿವಾಹಕ್ಕೆ ಸಂಬಂಧಿಸಿದಂತೆ ಸಿಡಿಪಿಒ ಗಳು ಹೆಚ್ಚು ನಿಗಾವಹಿಸಿ, ತಮ್ಮ ವ್ಯಾಪ್ತಿಯ ಗ್ರಾಮಗಳಲ್ಲಿ ಜರುಗುವ ಬಾಲ್ಯ ವಿವಾಹಗಳ ಬಗ್ಗೆ ಅಂಗನವಾಡಿ ಕಾರ್ಯಕರ್ತೆಯರಿಂದ ಮಾಹಿತಿ ಪಡೆದುಕೊಳ್ಳಬೇಕು. ಬಾಲ್ಯ ವಿವಾಹ ಪ್ರಕರಣಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳು, ಆ ಮಕ್ಕಳ ಭವಿಷ್ಯದ ದೃಷ್ಟಿಯಿಂದ ಯಾವುದೇ ದಾಕ್ಷಿಣ್ಯ ಅಥವಾ ಕರುಣೆ, ಪ್ರಭಾವಕ್ಕೆ ಒಳಗಾಗದೆ ಕಠಿಣವಾಗಿ ಕ್ರಮ ವಹಿಸಬೇಕು ಎಂದು‌ ಸೂಚಿಸಿದರು.

ಮಕ್ಕಳ ಸಹಾಯವಾಣಿ 1098 ಬಗ್ಗೆ ವ್ಯಾಪಕ ಪ್ರಚಾರ ನೀಡಬೇಕು. ಬಾಲ್ಯ ವಿವಾಹ ದುಷ್ಪರಿಣಾಮಗಳ ಬಗ್ಗೆ ಹಾಗೂ ಕಠಿಣ ಕಾನೂನುಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು. ಈ ಬಗೆಗಿನ ಕಿರು ಚಿತ್ರಗಳನ್ನು ಗ್ರಾಮಗಳಲ್ಲಿ ಪ್ರದರ್ಶಿಸುವ ಕಾರ್ಯ ಆಗಬೇಕು ಎಂದರು.

ಇದಕ್ಕೆ ಪೂರಕವಾಗಿ ಮಾತನಾಡಿದ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಕೌಸರ್ ರೇಷ್ಮಾ ಅವರು, ಬಾಲ್ಯ ವಿವಾಹ ನಿಷೇಧ ಕುರಿತ ಕಿರು ಚಿತ್ರಗಳನ್ನು ನೀಡಿದಲ್ಲಿ, ಎಲ್ಲ ಹಾಸ್ಟೆಲ್‌ಗಳಲ್ಲಿ ಪ್ರದರ್ಶಿಸುವ ವ್ಯವಸ್ಥೆ ಮಾಡಲಾಗುವುದು ಎಂದರು.

ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಮೀನಾಕ್ಷಿ ಅವರು ಮಾತನಾಡಿ, ಜಿಲ್ಲೆಯಲ್ಲಿ ಈ ವರ್ಷ ಏಪ್ರಿಲ್‌ನಿಂದ ಈವರೆಗೆ 18 ವರ್ಷದೊಳಗಿನ ಒಟ್ಟು 141 ಗರ್ಭಿಣಿಯರ ಮಾಹಿತಿ ಆರ್‌ಸಿಹೆಚ್ ಪೋರ್ಟಲ್‌ನಲ್ಲಿ ದಾಖಲಾಗಿದೆ. ಚನ್ನಗಿರಿ ತಾಲ್ಲೂಕು ಒಂದರಲ್ಲೇ 58 ಅಪ್ರಾಪ್ತ ಗರ್ಭಿಣಿಯರು ದಾಖಲಾಗಿದ್ದಾರೆ. ಉಳಿದಂತೆ ದಾವಣಗೆರೆ-28, ಹರಿಹರ-14, ಹೊನ್ನಾಳಿ-16, ಜಗಳೂರು-25 ಅಪ್ರಾಪ್ತರು ಗರ್ಭಿಣಿಯರಾಗಿರುವುದು ದಾಖಲಾಗಿದೆ ಎಂದರು.

ಜಿಲ್ಲೆಯಲ್ಲಿ ಲಾಕ್‌ಡೌನ್ ಅವಧಿಯಲ್ಲಿ ಒಟ್ಟು 27 ಪೋಕ್ಸೋ ಕೇಸ್‌ಗಳನ್ನು ದಾಖಲಿಸಲಾಗಿದ್ದು, ಇವುಗಳನ್ನು ಮೊದಲು ಸಖಿ ಕೇಂದ್ರದಲ್ಲಿ ಪರಿಶೀಲಿಸಿ, ಅವರಿಗೆ ಸೂಕ್ತ ಆಪ್ತ ಸಮಾಲೋಚನೆ ಹಾಗೂ ಆರೋಗ್ಯ ನೆರವು ನೀಡಿ, ಅವರು ಮನೆಗೆ ತೆರಳಲು ನಿರಾಕರಿಸಿದಲ್ಲಿ ಬಾಲಕಿಯರ ಬಾಲಮಂದಿರಕ್ಕೆ ದಾಖಲು ಮಾಡಲಾಗುವುದು ಎಂದರು.

ಜಿಲ್ಲಾಧಿಕಾರಿಗಳು ಪ್ರತಿಕ್ರಿಯಿಸಿ, ಎಲ್ಲ 141 ಗರ್ಭಿಣಿಯರಿಗೆ ಸಂಬAಧಿಸಿದ ಮಾಹಿತಿಯನ್ನು ಆರೋಗ್ಯ ಇಲಾಖೆಯಿಂದ ಪಡೆದು, ಪ್ರತಿಯೊಂದು ಪ್ರಕರಣಗಳ ಬಗ್ಗೆ ಪರಿಶೀಲನೆ ನಡೆಸಿ, ಕೇಸ್ ದಾಖಲಿಸುವಂತೆ ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಆನಂದ್, ಡಿಹೆಚ್‌ಒ ಡಾ. ನಾಗರಾಜ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ರೇಷ್ಮಾ ಕೌಸರ್, ಸೇರಿದಂತೆ ಜಿಲ್ಲಾ ಮಟ್ಟದ ಸಮಿತಿಗಳ ನಾಮನಿರ್ದೇಶಿತ ಸದಸ್ಯರು, ಸಿಡಿಪಿಒ ಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!