ಫೆ. 21ರಂದು ಕರವೇಯಿಂದ ಕನ್ನಡ ಜಾಗೃತಿ ಬೃಹತ್ ಜಾಥಾ
ದಾವಣಗೆರೆ: ಇದೇ ಫೆ.21ರಂದು ಕರ್ನಾಟಕ ರಕ್ಷಣಾ ವೇದಿಕೆಯಿಂದ ಕನ್ನಡ ಜಾಗೃತಿ ಬೃಹತ್ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧ್ಯಕ್ಷ ರಾಮೇಗೌಡ ತಿಳಿಸಿದ್ದಾರೆ.
ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಜಿಲ್ಲಾಧಿಕಾರಿ ಡಾ.ಎಂ.ವಿ. ವೆಂಕಟೇಶ್ ಅವರು ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಜಾಥಾಕ್ಕೆ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು.
ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ. ವಾಮದೇವಪ್ಪ, ಮಾಜಿ ಅಧ್ಯಕ್ಷ ಮಂಜುನಾಥ್ ಕುರ್ಕಿ, ಹಿರಿಯ ಪತ್ರಕರ್ತ ಬಾ.ಮ ಬಸವರಾಜಯ್ಯ ಉಪಸ್ಥಿತರಿರಲಿದ್ದಾರೆ ಎಂದರು.
ಶೇ.60ರಷ್ಟು ಕನ್ನಡ ಭಾಷೆಯಲ್ಲಿ ನಾಮಫಲಕ ಹಾಕದಿರುವವರ ವಿರುದ್ಧ ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಮಾ.5ರಂದು ಪಾಲಿಕೆಗೆ ಬೀಗ ಹಾಕಿ ಪ್ರತಿಭಟಿಸಲಾಗುವುದು. ಇದಕ್ಕೂ ಸ್ಪಂದಿಸದಿದ್ದರೆ ಕರಾವೇಯಿಂದ ಮಾ.15ರಂದು ಆಂಗ್ಲ ನಾಮಫಲಕಗಳನ್ನು ಕಿತ್ತು ಹಾಕಲಾಗುವುದು ಎಂದು ಎಚ್ಚರಿಕೆ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಕರಾವೇ ಜಿಲ್ಲಾ ಗೌರವ ಅಧ್ಯಕ್ಷ ವಾಸುದೇವ ರಾಯ್ಕರ್, ಮಲ್ಲಿಕಾರ್ಜುನ್, ರವಿ ಕುಮಾರ್, ಎನ್.ಟಿ. ಹನುಮಂತಪ್ಪ, ಎಂ.ಡಿ. ರಫೀಕ್, ಜಬಿವುಲ್ಲಾ ಪೈಲ್ವಾನ್, ಆಟೋ ರಫೀಕ್ ಮತ್ತಿತರರು ಉಪಸ್ಥಿತರಿದ್ದರು.