ರಾಜ್ಯ ಸುದ್ದಿ

ಆಶಾ ಕಾರ್ಯಕರ್ತೆಯರ ಮೇಲೆ ಲಾಠಿಚಾರ್ಜ್; ಪೊಲೀಸರ ಕ್ರಮಕ್ಕೆ ಖಂಡನೆ

ಬೆಂಗಳೂರು: ಆಶಾ ಕಾರ್ಯಕರ್ತೆಯರ ಮೇಲೆ ಪಶ್ಚಿಮ ಬಂಗಾಳದಲ್ಲಿ ಪೊಲೀಸರು ನಡೆಸಿರುವ ಲಾಠಿಚಾರ್ಜ್ ಬಗ್ಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ.
ಪಶ್ಚಿಮ ಬಂಗಾಳದ ಆಶಾ ಕಾರ್ಯಕರ್ತೆಯರು ತಮ್ಮ ನ್ಯಾಯಯುತ ಬೇಡಿಕೆಗಳಿಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ಪೊಲೀಸರು ಲಾಠಿಚಾರ್ಜ್ ನಡೆಸಿರುವುದು ಸರಿಯಾದ ಕ್ರಮವಲ್ಲ ಎಂದು ಸ್ಕೀಮ್ ವರ್ಕರ್ಸ್ ಫೆಡರೇಶನ್ ಆಫ್ ಇಂಡಿಯಾ (SWFI)ದ ಕರ್ನಾಟಕ ರಾಜ್ಯ ಘಟಕದ ಪ್ರಮುಖರು ಆಕ್ರೋಶ ಹೊರಹಾಕಿದ್ದಾರೆ.
ಈ ಕುರಿತಂತೆ ಮಾಧ್ಯಮ ಹೇಳಿಕೆ ನೀಡಿರುವ ಸ್ಕೀಮ್ ವರ್ಕರ್ಸ್ ಫೆಡರೇಶನ್ ಆಫ್ ಇಂಡಿಯಾ (SWFI) ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷರಾದ ಡಿ.ನಾಗಲಕ್ಷ್ಮಿ ಹಾಗೂ ರಾಜ್ಯ ಕಾರ್ಯದರ್ಶಿ ಸಂಧ್ಯಾ.ಪಿ.ಯಸ್, ಪಶ್ಚಿಮ ಬಂಗಾಳದ ಆಶಾ ಕಾರ್ಮಿಕ ಒಕ್ಕೂಟದ ನೇತೃತ್ವದಲ್ಲಿ ಸಾವಿರಾರು ಆಶಾ ಕಾರ್ಯಕರ್ತೆಯರು ತಮ್ಮ 14 ಅಂಶಗಳನ್ನೊಳಗೊಂಡ ಬೇಡಿಕೆಗಳಿಗೆ ಆಗ್ರಹಿಸಿ ಕಲ್ಕತ್ತಾದ ಆರೋಗ್ಯ ಭವನದ ಮುಂಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. ಆ ಸಂದರ್ಭದಲ್ಲಿ ಪೊಲೀಸ್ ದಾಳಿಗೊಳಗಾಗಿ ಮೂರು ಜನ ಆಶಾ ಕಾರ್ಯಕರ್ತೆಯರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಬೇಕಾಯಿತು ಎಂದಿದ್ದಾರೆ.
ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಆಶಾ ಕಾರ್ಯಕರ್ತೆಯರ ಮೇಲೆ ಅಮಾನವೀಯವಾಗಿ ದಾಳಿ ನಡೆಸಲು ಕಾರಣರಾದವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸ್ಕೀಮ್ ವರ್ಕಸ್ ಫೆಡರೇಶನ್ ಆಫ್ ಇಂಡಿಯಾದ ಕರ್ನಾಟಕ ಘಟಕ ಪಶ್ಚಿಮ ಬಂಗಾಳ ಸರ್ಕಾರವನ್ನು ಒತ್ತಾಯಿಸುತ್ತದೆ ಹಾಗೂ ಹೋರಾಟ ನಿರತ ಆಶಾ ಕಾರ್ಯಕರ್ತೆಯರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸುತ್ತದೆ ಎಂದವರು ಹೇಳಿದ್ದಾರೆ.
ಕರ್ನಾಟಕದಲ್ಲೂ ಕೋಲ್ಕತಾ ರೀತಿಯಲ್ಲೇ ಆಶಾ ಕಾರ್ಯಕರ್ತೆಯರು ತಮ್ಮ ಬಹುಕಾಲದ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಹಲವು ಹಂತಗಳಲ್ಲಿ ಹೋರಾಟ ನಡೆಸಿದ್ದಾರೆ. ಕೆಲವು ದಿನಗಳ ಹಿಂದೆ ಅಧಿಕಾರಿಗಳು ಮಾತುಕತೆ ನಡೆಸಿ ಬೇಡಿಕೆ ಈಡೇರಿಕೆ ಬಗ್ಗೆ ಭರವಸೆ ನೀಡಿದ್ದರು.

Click to comment

Leave a Reply

Your email address will not be published. Required fields are marked *

Most Popular

To Top
error: Content is protected !!