ಫೆ.11 ರಂದು ಲೋಕ ಅದಾಲತ್

ಲೋಕ ಅದಾಲತ್

ದಾವಣಗೆರೆ: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರವು ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಫೆ.11 ರಂದು ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಲಾಗಿದೆ.
ರಾಷ್ಟ್ರೀಯ ಲೋಕ್ ಅದಾಲತ್ ಮೂಲಕ ಅತಿ ಹೆಚ್ಚು ಪ್ರಕರಣಗಳನ್ನು ವಿಲೇವಾರಿ ಮಾಡಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕೆಂದು ಉದ್ದೇಶಿಸಲಾಗಿದೆ. ಇದಕ್ಕೆ ಪೂರಕವಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಜಿಲ್ಲೆಗಳಲ್ಲಿರುವ ಎಲ್ಲಾ ನ್ಯಾಯಾಲಯಗಳಲ್ಲಿ ಲೋಕ್ ಅದಾಲತ್‍ನ್ನು ಆಯೋಜಿಸಲಾಗಿದೆ.
ಈ ಲೋಕ್ ಅದಾಲತ್‍ನಲ್ಲಿ ನ್ಯಾಯಾಲಯದಲ್ಲಿ ಚಾಲ್ತಿಯಲ್ಲಿರುವ ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಕಡಿಮೆ ಖರ್ಚಿನಲ್ಲಿ ಶೀಘ್ರವಾಗಿ ಪರಿಹರಿಸಿಕೊಳ್ಳಲು ಸಹಕಾರಿಯಾಗಲಿದೆ. ಮತ್ತು  ರಾಜಿಯಾಗಬಲ್ಲ, ಎಲ್ಲಾ ಸಿವಿಲ್ ಹಾಗೂ ಕ್ರಿಮಿನಲ್ ಪ್ರಕರಣಗಳು, ಮೋಟಾರು ವಾಹನ ಅಪಘಾತ ಪರಿಹಾರ ಪ್ರಕರಣಗಳು, ಚೆಕ್ ಅಮಾನ್ಯ ಪ್ರಕರಣಗಳು, ಭೂಸ್ವಾಧೀನ ಪರಿಹಾರ ಪ್ರಕರಣಗಳು, ಬ್ಯಾಂಕ್ ಸಾಲ ವಸೂಲಾತಿ ಪ್ರಕರಣಗಳನ್ನು ಎಂ.ಎಂ.ಡಿ.ಆರ್ ಕಾಯ್ದೆಯಡಿ ಲೋಕ್ ಅದಾಲತ್‍ನಲ್ಲಿ ಪರಿಹರಿಸಿಕೊಳ್ಳಬಹುದು.
ವಿಚ್ಛೆಧನ ಹೊರತುಪಡಿಸಿ, ಕೌಟುಂಬಿಕ ನ್ಯಾಯಾಲಯದ ಪ್ರಕರಣಗಳು, ಪಿಂಚಣಿ ಪ್ರಕರಣಗಳು, ವೇತನ ಭತ್ಯೆಗೆ ಸಂಬಂಧಿಸಿದ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕ, ಕೈಗಾರಿಕೆ ಕಾರ್ಮಿಕರ ವೇತನ, ಕಾರ್ಮಿಕ ವಿವಾದ ಇತ್ಯಾದಿ ಪ್ರಕರಣಗಳನ್ನು ಪರಸ್ಪರ ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳಬಹುದು.
ಪೋಲೀಸ್ ಇಲಾಖೆಯ ಸಂಚಾರಿ ಇ-ಚಲನ್‍ನಲ್ಲಿ ದಾಖಲಾದ ಬಾಕೀ ಪ್ರಕರಣಗಳ ಮೊತ್ತದಲ್ಲಿ ಫೆ. 11 ರವರೆಗೆ ಮಾತ್ರ ಅನ್ವಯವಾಗುವಂತೆ ಶೇ. 50 ರಷ್ಟು ರಿಯಾಯಿತಿ ನೀಡಿ ಆದೇಶಿಸಲಾಗಿದ್ದು, ವಾಹನ ಸವಾರರು ಸೌಲಭ್ಯದ ಉಪಯೋಗ ಪಡೆದುಕೊಳ್ಳಲು ಕೋರಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಮೀಪದ ನ್ಯಾಯಾಲಯ ಅಥವಾ ಪೋಲೀಸ್ ಠಾಣೆ ಸಂಪರ್ಕಿಸಲು ಹಿರಿಯ ಸಿವಿಲ್ ನ್ಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರವೀಣ್ ನಾಯಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!