ಲೋಕಸಭೆ ಚುನಾವಣೆ 2024: ಸುಮಲತಾ ಅಂಬರೀಶ್ ಬಿಜೆಪಿ ಸೇರ್ಪಡೆ
ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬೆಂಬಲ ವ್ಯಕ್ತಪಡಿಸಿದ್ದ ಸುಮಲತಾ ಅಂಬರೀಶ್ ಅವರು ಇಂದು (ಏ.05) ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಜೊತೆಗೆ ಕ್ರಿಕೆಟಿಗ ದೊಡ್ಡ ಗಣೇಶ ಮತ್ತು ಕೊಪ್ಪಳ ಮಾಜಿ ಸಂಸದ ಶಿವರಾಮಗೌಡ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಪಕ್ಷದ ಕಚೇರಿಯಲ್ಲಿ ಬಿಜೆಪಿ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸಮ್ಮುಖದಲ್ಲಿ ಬಿಜೆಪಿ ಸೇರಿದರು.
ನಮ್ಮೆಲ್ಲರ ನೆಚ್ಚಿನ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವ ಹಾಗೂ ಅವರ ಪರಿಕಲ್ಪನೆ ಮತ್ತು ಕನಸುಗಳ ಕಾರಣದಿಂದಾಗಿ ನಾನು ಭಾರತೀಯ ಜನತಾ ಪಕ್ಷವನ್ನು ಸೇರುತ್ತಿದ್ದೇನೆ ಎಂದಿದ್ದಾರೆ ನಟಿ, ಸಂಸದೆ ಸುಮಲತಾ ಅಂಬರೀಶ್ . ಇಂದು ಅವರ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಅಧಿಕೃತವಾಗಿ ಸೇರಿದ್ದಾರೆ. ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ರಾಧಾ ಮೋಹನ್ ದಾಸ್ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವ ಪತ್ರ ನೀಡಿ ಸುಮಲತಾ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.
ಬಿಜೆಪಿ ಸೇರ್ಪಡೆಗೂ ಮುನ್ನ ಸುಮಲತಾ ಅಂಬರೀಶ್ ಅವರು, “ಮಂಡ್ಯ ಜಿಲ್ಲೆಯ ಸಮಗ್ರ ಅಭಿವೃದ್ಧಿಯೇ ನನ್ನ ಮೂಲ ಮಂತ್ರವಾಗಿದೆ. ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿ ಎಂಬ ಆಶಯದಿಂದ ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದೇನೆ. ಮಂಡ್ಯದ ನನ್ನ ಅಭಿಮಾನಿಗಳು, ನಟ ದಿ.ಅಂಬರೀಶ್ ಅಭಿಮಾನಿಗಳು ಹಿತೈಷಿಗಳ ಹಾರೈಕೆ ಮತ್ತು ಆಶೀರ್ವಾದವಿರಲಿ” ಎಂದು ಮಂಡ್ಯ ಸೊಸೆ ಸುಮಲತಾ ಅಂಬರೀಶ್ ಅವರು ಸಾಮಾಜಿಕ ಜಾಲತಾಣದ ಮೂಲಕ ಮನವಿ ಮಾಡಿದ್ದಾರೆ.