ಸಾರ್ವಜನಿಕರಿಗೆ ಉತ್ತಮ ವೈದ್ಯಕೀಯ ಸೇವೆ ನೀಡುವಂತೆ ಆರೋಗ್ಯಾಧಿಕಾರಿಗಳಿಗೆ ಸಚಿವ ಭೈರತಿ ಸೂಚನೆ
ದಾವಣಗೆರೆ: ಚಿಗಟೇರಿ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಸಾರ್ವಜನಿಕರಿಗೆ ಉತ್ತಮ ವೈದ್ಯಕೀಯ ಸೇವೆ ದೊರಕಬೇಕು. ಮೂಲಭೂತ ಸೌಕರ್ಯಗಳ ನಿರ್ಮಾಣಕ್ಕೆ ಸರ್ಕಾರ ಮಂಜೂರು ಮಾಡಿರುವ ಯೋಜನೆಗಳನ್ನು ತ್ವರಿತವಾಗಿ ಅನುಷ್ಠಾನಗೊಳಿಸುವಂತೆ ಅಧಿಕಾರಿಗಳಿಗೆ ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ ಅವರು ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಜಿಲ್ಲಾ ಆರೋಗ್ಯ ರಕ್ಷಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಪರಿಶೀಲನೆ ನಡೆಸಿದ ಅವರು, ಸರ್ಕಾರದ ಆರೋಗ್ಯ ಯೋಜನೆಗಳು, ಸಾಮಾನ್ಯ ಜನರಿಗೆ ತಲುಪಬೇಕು. ಯಾವುದೇ ರೋಗಿಗಳು ಚಿಕಿತ್ಸೆ ಇಲ್ಲದೆ ತೊಂದರೆಗೊಳಗಾಗಬಾರದು. ಪ್ರತಿಯೊಬ್ಬ ನಾಗರಿಕರ ಆರೋಗ್ಯ ರಕ್ಷೆ ನಮ್ಮ ಕರ್ತವ್ಯವಾಗಿದೆ ಎಂದರು.
ಗ್ರಾಮೀಣ ಪ್ರದೇಶದಿಂದ ಹಾಗೂ ಹೊರ ಜಿಲ್ಲೆಗಳಿಂದ ಬರುವ ರೋಗಿಗಳಿಗೆ ಚಿಕಿತ್ಸೆ ಪಡೆಯುವಲ್ಲಿ ತೊಂದರೆಯಾಗಬಾರದು. ವಾಸ್ತವ್ಯ ಮತ್ತು ರೋಗಿಗಳಿಗೆ ಊಟದ ವ್ಯವಸ್ಥೆಗೆ ಯಾವುದೇ ತೊಂದರೆಯಾಗದಂತೆ ಕ್ರಮವಹಿಸಿ ಎಂದು ಸಲಹೆ ನೀಡಿದರು.
ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಅವರು ಮಾತನಾಡಿ, ಸರ್ಕಾರ ಚಿಗಟೇರಿ ಆಸ್ಪತ್ರೆಗೆ ಮಂಜೂರು ಮಾಡಿರುವ ಅನುದಾನ ಕೈಗೊಂಡಿರುವ ವಿವಿಧ ಕಾಮಗಾರಿಗಳು, ಕಲ್ಪಿಸಿರುವ ಮೂಲ ಸೌಕರ್ಯಗಳ ಕುರಿತಂತೆ ವಿವರವಾದ ವರದಿ ನೀಡುವಂತೆ ಆರೋಗ್ಯ ಇಲಾಖಾ ಅಭಿಯಂತರರಿಗೆ ಸೂಚನೆ ನೀಡಿದರು.
ಜಿಲ್ಲಾ ಆರೋಗ್ಯ ಇಲಾಖಾ ಅಧಿಕಾರಿಗಳು ಇಲಾಖಾ ಪ್ರಗತಿ ಮಾಹಿತಿಯನ್ನು ಸಭೆಗೆ ವಿವರಿಸಿದರು. ವಿಧಾನ ಪರಿಷತ್ ಸದಸ್ಯರಾದ ಅಬ್ದುಲ್ ಜಬ್ಬಾರ್, ಮಹಾ ಪೌರರಾದ ಶ್ರೀಮತಿ ಜಯಮ್ಮ ಗೋಪಿನಾಥ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಚನ್ನಪ್ಪ, ಜಿಲ್ಲಾ ಪೊಲೀಷ್ ವರಿಷ್ಠಾಧಿಕಾರಿ ರಿಷ್ಯಂತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗರಾಜ, ಆರೋಗ್ಯ ಇಲಾಖೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.