ಮೊಟ್ಟೆ ಕೇಸ್ ಹಿನ್ನೆಲೆ ಆಗಸ್ಟ್ 25 ಕ್ಕೆ ಕರ್ನಾಟಕ ರಾಜ್ಯ ಅಂಗನವಾಡಿ ಸಂಘದಿಂದ ವಿಧಾನಸೌದ ಚಲೋ ಕಾರ್ಯಕ್ರಮ

ದಾವಣಗೆರೆ: ರಾಜ್ಯದ ಅಂಗನವಾಡಿ ಮಕ್ಕಳಿಗೆ ಕೋಳಿಮೊಟ್ಟೆ ಟೆಂಡರ್‌ನಲ್ಲಿ ನಡೆದಿರುವ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸುವುದು ಮತ್ತು ಇಲಾಖೆಯಿಂದಲೇ ಮೊಟ್ಟೆ ಸರಬರಾಜು ಮಾಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಆ.25ರಂದು ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ (ಸಿಐಟಿಯು)ದ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ವಿಧಾನ ಸೌದ ಚಲೋ ಹಮ್ಮಿಕೊಳ್ಳಲಾಗಿದೆ.
ಮಹಿಳಾ ಮಕ್ಕಳ ಅಭಿವೃದ್ದಿ ಇಲಾಖೆ ಶಿಫಾರಸ್ಸು ಮಾಡಿರುವ 339.48 ಲಕ್ಷ ಅನುದಾನ ಕೂಡಲೇ ಬಿಡುಗಡೆ ಮಾಡಬೇಕು, ಕೊರೋನ ಸಂದರ್ಭದಲ್ಲಿ ನಿಧನರಾದ ಕುಟುಂಬದವರಿಗೆ ಕಾರ್ಯಕರ್ತೆ ಅಥವಾ ಸಹಾಯಕಿ ಹುದ್ದೆ ನೀಡುವ ಜತೆಗೆ ಕೊರೋನಾದಿಂದ ನಿಧನರಾದ ಅಂಗನವಾಡಿ ನೌಕರರಿಗೆ ಕೂಡಲೇ 30 ಲಕ್ಷ ಪರಿಹಾರ ಬಿಡುಗಡೆ ಮಾಡಬೇಕು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಈ ಅನಿರ್ದಿಷ್ಟ ಹೋರಾಟ ಹಮ್ಮಿಕೊಳ್ಳಲಾಗಿದೆ.
ಈಗಾಗಲೇ ಕಳೆದ 16 ರಿಂದ 21 ರ ವರೆಗೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸಿ, ಸಂಬAಧ ಪಟ್ಟ ಇಲಾಖೆಯ ಸಚಿವರಿಗೆ, ಮುಖ್ಯಮಂತ್ರಿಗಳಿಗೆ, ಪ್ರಧಾನಮಂತ್ರಿಗಳಿಗೆ ಮನವಿಸಲ್ಲಿಸಿದ್ದರು, ರಾಜ್ಯ ಮತ್ತು ಕೇಂದ್ರ ಸರ್ಕಾರ ಬೇಡಿಕೆಗಳಿಗೆ ಸ್ಪಂದಿಸಿಲ್ಲ. ಆದ್ದರಿಂದ, ವಿಧಾನಸೌಧ ಚಲೊ ಅನಿರ್ಧಿಷ್ಟ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟನೆಯ ಆನಂದರಾಜ್ ತಿಳಿಸಿದ್ದಾರೆ.