ಬೇಸಿಗೆಯಲ್ಲಿ ಲೋಡ್ ಶೆಡ್ಡಿಂಗ್ ಇಲ್ಲ
ಬೆಂಗಳೂರು: ಬೇಸಿಗೆಯಲ್ಲಿ ವಿದ್ಯುತ್ ಕಡಿತ ಇಲ್ಲವೇ ಲೋಡ್ ಶೆಡ್ಡಿಂಗ್ ಮಾಡದಿರಲು ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ ಎಂದು ಬೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹೇಳಿದ್ದಾರೆ.
ವಿದ್ಯಾರ್ಥಿಗಳು ಮತ್ತು ರೈತರ ಹಿತದೃಷ್ಟಿಯನ್ನು ಗಮನದಲ್ಲಿರಿಸಿ ಮುಂದಿನ ಮೂರು ತಿಂಗಳ ಅವಧಿಗೆ ಯಾವುದೇ ರೀತಿಯ ವಿದ್ಯುತ್ ಕಡಿತ ಮಾಡದಿರಲು ಎಲ್ಲಾ ಎಸ್ಕಾಂಗಳು ನಿರ್ಧರಿಸಿವೆ ಎಂದವರು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಹೇಳಿದರು.
ಬೇಸಿಗೆಯಲ್ಲಿ ವಿದ್ಯುತ್ ಬೇಡಿಕೆ ಹೆಚ್ಚಾಗಿದ್ದು, ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳು ಈಗಾಗಲೇ ಆರಂಭಗೊಂಡಿವೆ. ಅಲ್ಲದೇ ರೈತರಿಗೂ ಕೂಡ ಹೆಚ್ಚಿನ ವಿದ್ಯುತ್ ಪೂರೈಸುವ ಜವಾಬ್ದಾರಿ ಎಸ್ಕಾಂಗಳ ಮೇಲಿದೆ. ಬೇಸಿಗೆಯಲ್ಲಿ ತಡೆರಹಿತ ವಿದ್ಯುತ್ ಪೂರೈಸಲು ರೈತ ಪ್ರತಿನಿಧಿಗಳು ಇತ್ತೀಚೆಗೆ ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಿದ್ದರು. ಇದನ್ನು ಗಮನದಲ್ಲಿಟ್ಟುಕೊಂಡು ತೀರ್ಮಾನ ಕೈಗೊಂಡಿದ್ದೇವೆ ಎಂದರು.
ಈ ನಿಟ್ಟಿನಲ್ಲಿ ಮುಂದಿನ ಮೂರು ತಿಂಗಳ ಅವಧಿಗೆ ಬೇಕಾಗುವ ವಿದ್ಯುತ್ ಬೇಡಿಕೆ ಕುರಿತು ವೈಜ್ಞಾನಿಕವಾಗಿ ಅಧ್ಯಯನ ನಡೆಸಿರುವ ಎಲ್ಲಾ ಎಸ್ಕಾಂಗಳು ಅದಕ್ಕೆ ಬೇಕಾಗಿರುವ ವಿದ್ಯುತ್ ಖರೀದಿ ಮಾಡಿ ಗ್ರಾಹಕರಿಗೆ ಪೂರೈಸಲು ನಿರ್ಧರಿಸಿವೆ.
ಈ ಮೂರು ತಿಂಗಳ ಅವಧಿಯಲ್ಲಿ ವಿದ್ಯುತ್ ಬಳಕೆ ಹೆಚ್ಚಾಗಲಿದ್ದು, ವಿದ್ಯುತ್ ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ಕ್ರಮವಹಿಸಲು ಎಲ್ಲಾ ಎಸ್ಕಾಂಗಳು ನಿರ್ಧಾರ ಕೈಗೊಂಡಿವೆ.
ಬೇಸಿಗೆ ಕಾಲದಲ್ಲಿ ವಿದ್ಯುತ್ ಪೂರೈಕೆಯಲ್ಲಿ ಯಾವುದೇ ಅಡಚಣೆ ಉಂಟಾಗದಂತೆ ಕ್ರಮವಹಿಸಲು ಇಂಧನ ಇಲಾಖೆಯು ಕೆಪಿಟಿಸಿಎಲ್ ಮತ್ತು ಎಲ್ಲಾ ಎಸ್ಕಾಂಗಳಿಗೆ ನಿರ್ದೇಶನ ನೀಡಿದೆ.
ಬೇಸಿಗೆ ಕಾಲದಲ್ಲಿ ವಿದ್ಯುತ್ ಖರೀದಿಗೆ ಬೇಕಾಗುವ ಹಣಕಾಸಿನ ವ್ಯವಸ್ಥೆಯನ್ನು ಸಿದ್ಧತೆ ಮಾಡಿಕೊಳ್ಳುವಂತೆ ಇಂಧನ ಇಲಾಖೆ ಎಲ್ಲಾ ಎಸ್ಕಾಂಗಳಿಗೆ ಈಗಾಗಲೇ ಸೂಚನೆ ನೀಡಿದೆ. ಬೇಡಿಕೆಗೆ ಅನುಗುಣವಾಗಿ ವಿದ್ಯುತ್ ಪೂರೈಸಲು ಸಿದ್ಧತೆ ಮಾಡಿಕೊಂಡಿದೆ ಎಂದವರು ಹೇಳಿದರು.