ದಾವಣಗೆರೆ: ದಾವಣಗೆರೆಗೆ ಸರ್ಕಾರಿ ಮೆಡಿಕಲ್ ಕಾಲೇಜ್ ಪ್ರಾರಂಭಿಸಬೇಕೆನ್ನುವ ಬೇಡಿಕೆ ಬಹಳ ದಿನಗಳಿಂದ ಇದ್ದು, ಕಾಲೇಜು ಸ್ಥಾಪಿಸಲು ವಿಳಂಬ ನೀತಿ ಅನುಸರಿಸುತ್ತಿರುವ ಸರ್ಕಾರಗಳ ಹಿಂದೆ ಬಂಡವಾಳಶಾಹಿಗಳ ಹಿತಾಸಕ್ತಿ ಅಡಗಿದೆ ಎಂದು ದಾವಣಗೆರೆ ಸರ್ಕಾರಿ ಮೆಡಿಕಲ್ ಕಾಲೇಜು ಹೋರಾಟ ಸಮಿತಿ ಆರೋಪಿಸಿದೆ.
ಅಕ್ಕಪಕ್ಕದ ಜಿಲ್ಲೆಗಳಾದ ಬಳ್ಳಾರಿ, ಚಿತ್ರದುರ್ಗ, ಶಿವಮೊಗ್ಗ ಜಿಲ್ಲಾ ಕೇಂದ್ರಗಳಲ್ಲಿ ಈಗಾಗಲೇ ಸರ್ಕಾರಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗಳು ಪ್ರಾರಂಭವಾಗಿ ಬಡ ಜನರ ಆರೋಗ್ಯ ಹಾಗೂ ಸಾಮಾನ್ಯ ಜನರು ವೈದ್ಯಕೀಯ ಶಿಕ್ಷಣವನ್ನು ಪಡೆಯುವಂತಾಗಿದೆ. ಆದರೆ, ಮಧ್ಯಕರ್ನಾಟಕದ ಕೇಂದ್ರಬಿಂದುವಾದ ದಾವಣಗೆರೆಗೆ ಮಾತ್ರ ಈವರೆಗೂ ಸರ್ಕಾರಿ ಮೆಡಿಕಲ್ ಕಾಲೇಜನ್ನು ಸ್ಥಾಪಿಸಲು ವಿಳಂಬವಾಗುತ್ತಿರುವುದರ ಹಿಂದೆ ಬಂಡವಾಳಶಾಹಿಗಳ ಹಿತಾಸಕ್ತಿ ಅಡಗಿದೆ ಎಂದು ಸಮಿತಿಯ ಪ್ರಧಾನ ಸಂಚಾಲಕ ಎಂ.ಟಿ. ಸುಭಾಷ್ ಚಂದ್ರ, ಸಂಚಾಲಕ ಇಬ್ರಾಹಿಂ ಖಲೀಲ್ ದೂರಿದ್ದಾರೆ.
ಈಗಾಗಲೇ ಸರ್ಕಾರಿ ಮೆಡಿಕಲ್ ಕಾಲೇಜು ಪ್ರಾರಂಭಿಸಿದ್ದೇವೆಂದು ಬಿಜೆಪಿ ಸರ್ಕಾರವಿದ್ದಾಗ ಸುಳ್ಳು ಭರವಸೆಯನ್ನ ನೀಡಿತ್ತು. ಪ್ರಧಾನಿ ನರೇಂದ್ರ ಮೋದಿಯವರು ಇಡೀ ದೇಶದಲ್ಲಿ ಜಿಲ್ಲೆಗೊಂದರಂತೆ ಸರ್ಕಾರಿ ಮೆಡಿಕಲ್ ಕಾಲೇಜನ್ನು ಪ್ರಾರಂಭಿಸುತ್ತೇವೆಂದು 9 ವರ್ಷಗಳಿಂದ ಹೇಳುತ್ತಲೇ ಬಂದಿದ್ದಾರೆ. ಆದರೆ ನಮ್ಮ ಜಿಲ್ಲೆಗೆ ಇದುವರೆಗೂ ಸರ್ಕಾರಿ ಮೆಡಿಕಲ್ ಕಾಲೇಜು ಪ್ರರಂಭಿಸುವ ಯಾವ ಲಕ್ಷಣಗಳು ಕಾಣುತ್ತಿಲ್ಲ. ಈಗ ರಾಜ್ಯ ವಿಧಾನಸಭಾ ಚುನಾವಣೆ ಬಂದಿರುವುದರಿಂದ ದಾವಣಗೆರೆಯ ಪ್ರಮುಖ ಪಕ್ಷಗಳ ಅಭ್ಯರ್ಥಿಗಳು ದಾವಣಗೆರೆಗೆ ಸರ್ಕಾರಿ ಮೆಡಿಕಲ್ ಕಾಲೇಜು ಪ್ರಾರಂಭಿಸುತ್ತೇವೆಂದು ಭರವಸೆಯನ್ನು ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಖಾಸಗಿ ಬಂಡವಾಳಶಾಹಿಗಳು ದಾವಣಗೆರೆಗೆ ಸರ್ಕಾರಿ ಮೆಡಿಕಲ್ ಕಾಲೇಜಾದರೆ ತಮ್ಮ ಹಿತಾಸಕ್ತಿಗೆ ಧಕ್ಕೆ ಬರಬಹುದೆಂದು ಇಲ್ಲಿ ಸರ್ಕಾರಿ ಮೆಡಿಕಲ್ ಆಸ್ಪತ್ರೆಗಳು ಮತ್ತು ಕಾಲೇಜನ್ನು ಪ್ರಾರಂಭಿಸಲು ಅಡ್ಡಿಪಡಿಸುತ್ತಿದ್ದಾರೆಂದು ಗುಮಾನಿ ಸಾರ್ವಜನಿಕರಲ್ಲಿದೆ. ಪ್ರಮುಖ ರಾಜಕೀಯ ಪಕ್ಷಗಳ ಪ್ರಮುಖರು ಮತ್ತು ಚುನಾವಣಾ ಕಣದಲ್ಲಿರುವ ಅಭ್ಯರ್ಥಿಗಳು ಈ ಕೂಡಲೆ ದಾವಣಗೆರೆಗೆ ಸರ್ಕಾರಿ ಮೆಡಿಕಲ್ ಕಾಲೇಜ್ ಪ್ರಾರಂಭಿಸಲು ಸರ್ಕಾರದ ಮೇಲೆ ಒತ್ತಡ ತರುತ್ತೇವೆಂದು ಘೋಷಿಸಬೇಕು. ಇಲ್ಲದಿದ್ದರೆ ತಾವು ಸರ್ಕಾರಿ ಮೆಡಿಕಲ್ ಕಾಲೇಜನ್ನು ಪ್ರಾರಂಭಿಸಲು ವಿರೋಧಿಗಳೆಂದು ಸಾಬೀತಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ದಾವಣಗೆರೆಗೆ ಸರ್ಕಾರಿ ಮೆಡಿಕಲ್ ಕಾಲೇಜ್ ಹೋರಾಟ ಸಮಿತಿಯು ಮುಂದಿನ ದಿನಗಳಲ್ಲಿ ಮೆಡಿಕಲ್ ಕಾಲೇಜು ಪ್ರಾರಂಭಕ್ಕೆ ಹೋರಾಟವನ್ನು ಪ್ರಾರಂಭಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
