ಅಕ್ಟೋಬರ್ 16 ಕ್ಕೆ ಹೊನ್ನಾಳಿ – ನ್ಯಾಮತಿ ತಾಲ್ಲೂಕಿನಲ್ಲಿ ಕಂದಾಯ ಸಚಿವರ ಗ್ರಾಮ ವಾಸ್ತವ್ಯಕ್ಕೆ ಸಿಎಂ ಬೊಮ್ಮಾಯಿ ಚಾಲನೆ – ಕಾರ್ಯಕ್ರಮದ ಬಗ್ಗೆ ರೇಣುಕಾಚಾರ್ಯ ಮಾಹಿತಿ

ಬೆಂಗಳೂರು: ಕಂದಾಯ ಸಚಿವ ಆರ್.ಅಶೋಕ್ ಈ ಹಿಂದೆ ಗ್ರಾಮವಾಸ್ತವ್ಯಕ್ಕೆ ಚಾಲನೆ ಕೊಟ್ಟಿದ್ದರಾದರೂ ಕೋವಿಡ್ ನಿಂದಾಗಿ ಅದು ಸ್ಥಗಿತವಾಗಿತ್ತು. ಇದೀಗ ಮತ್ತೆ ಗ್ರಾಮವಾಸ್ತವ್ಯಕ್ಕೆ ಕಂದಾಯಸಚಿವರು ಮುಂದಾಗಿದ್ದು, ಇದೇ 16 ರಂದು ತಮ್ಮ ಮತಕ್ಷೇತ್ರ ಹೊನ್ನಾಳಿಯಲ್ಲಿ ಕಂದಾಯ ಸಚಿವರ ಮಹತ್ವಕಾಂಕ್ಷೆಯ ಗ್ರಾಮವಾಸ್ತವ್ಯ ಪುನರಾರಂಭಗೊಳ್ಳಲಿದೆ ಎಂದು ರೇಣುಕಾಚಾರ್ಯ ಹೇಳಿದರು.
ಹೊನ್ನಾಳಿ- ನ್ಯಾಮತಿ ತಾಲೂಕಿನ ಸುರಹೊನ್ನೆ ಗ್ರಾಮದಿಂದ ಗ್ರಾಮವಾಸ್ತವ್ಯ ಆರಂಭವಾಗಲಿದ್ದು, ಸಿಎಂ ಬಸವರಾಜ ಬೊಮ್ಮಾಯಿ ಇದಕ್ಕೆ ಚಾಲನೆ ನೀಡಲಿದ್ದು, ಸಚಿವ ಕೆ.ಎಸ್.ಈಶ್ವರಪ್ಪ ಸಹ ಅವರೊಂದಿಗೆ ಇರಲಿದ್ದಾರೆ.
ಹೊನ್ನಾಳಿ ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ಗ್ರಾಮ ವಾಸ್ತವ್ಯ ಹಿನ್ನೆಲೆಯಲ್ಲಿ ಏರ್ಪಡಿಸಲಾಗಿದ್ದ ಅಧಿಕಾರಿಗಳ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ಮುಖ್ಯಮಂತ್ರಿಗಳು ಕುಂದೂರು ಗ್ರಾಮದಲ್ಲಿ ಮಧ್ಯಾಹ್ನ 3 ಗಂಟೆಗೆ ಗ್ರಾಮ ವಾಸ್ತವ್ಯಕ್ಕೆ ಚಾಲನೆ ನೀಡಿ ಗ್ರಾಮಸ್ಥರಿಂದ ಅಹವಾಲು ಸ್ವೀಕರಿಸಿ, ಪ್ರಸಕ್ತ ಸಾಲಿನಲ್ಲಿ ಸರ್ಕಾರ ರೈತರು, ಕಾರ್ಮಿಕರು, ಮಹಿಳೆಯರಿಗೆ ಹಾಕಿಕೊಂಡಿರುವ ಕಾರ್ಯಕ್ರಮಗಳು ಹಾಗೂ ವಿವಿಧ ಫಲಾನುಭವಿಗಳಿಗೆ ಸವಲತ್ತು ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ವಿವಿಧ ಇಲಾಖೆಗಳಿಂದ ಏರ್ಪಡಿಸಿರುವ ಮಾಹಿತಿ ಮಳಿಗೆಗಳನ್ನು ಉದ್ಘಾಟಿಸಲಿದ್ದಾರೆ ಎಂದರು.
ಈ ಕಾರ್ಯಕ್ರಮದ ಅಂಗವಾಗಿ ಮಾನ್ಯ ಮುಖ್ಯಮಂತ್ರಿಗಳು ಹಾಗೂ ಸಚಿವರನ್ನು ವಿಶೇಷ ಅಲಂಕೃತ ಚಕ್ಕಡಿಗಳಲ್ಲಿ ಸ್ಥಳೀಯ ಜಾನಪದ ಕಲಾವಿದರು ಹಾಗೂ ವಿವಿಧ ಕಲಾತಂಡಗಳೊಂದಿಗೆ ಆನೆ ಮೆರವಣಿಗೆಯೊಂದಿಗೆ ಸ್ವಾಗತಿಸಲಾಗುವುದು. ಈ ಹಿನ್ನೆಲೆಯಲ್ಲಿ ಗ್ರಾಮ ವಾಸ್ತವ್ಯ ಈ ಹಿಂದೆ ನಡೆದ ಗ್ರಾಮ ವಾಸ್ತವ್ಯಗಳಿಗಿಂತ ವೈವಿಧ್ಯ ಹಾಗೂ ವಿಶಿಷ್ಟವಾಗಿರಲಿದ್ದು ಕಾರ್ಯಕ್ರಮದ ಸದುಪಯೋಗವನ್ನು ಅವಳಿ ತಾಲ್ಲೂಕುಗಳ ಸಾರ್ವಜನಿಕರಿಗೆ ಸಿಗಬೇಕೆಂಬುದು ನಮ್ಮ ಸಂಕಲ್ಪವಾಗಿದೆ ಎಂದರು.
ಈ ನಿಟ್ಟಿನಲ್ಲಿ ಗ್ರಾಮಸ್ಥರು ವಿಶೇಷ ಕಾಳಜಿ ವಹಿಸಿ ಅಧಿಕಾರಿಗಳೊಂದಿಗೆ ಕೈ ಜೋಡಿಸಿ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಿಕೊಡಬೇಕು ಎಂದು ರೇಣುಕಾಚಾರ್ಯ ಮನವಿ ಮಾಡಿದರು.