ಬಿಜೆಪಿಗೆ ಜನಾಶೀರ್ವಾದ ಖಂಡಿತ: ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ ನೀಡಿದ ನಡ್ಡಾ
ಚಾಮರಾಜನಗರ : ಕರ್ನಾಟಕದಲ್ಲಿ ಬಿಜೆಪಿ ವಿಜಯ ಪತಾಕೆ ಹಾರಿಸಲಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದ್ದಾರೆ.
ಬುಧವಾರ ಇಲ್ಲಿನ ಮಹದೇಶ್ವರ ಬೆಟ್ಟದಲ್ಲಿ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ ನೀಡಿ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮಲೆಮಹದೇಶ್ವರ ಸ್ವಾಮಿಯ ಆಶೀರ್ವಾದ ಪಡೆದು ಯಾತ್ರೆ ಆರಂಭಿಸಿದ್ದೇವೆ. ರಾಜ್ಯದಲ್ಲಿ ಬಿಜೆಪಿಗೆ ಜನರ ಆಶೀರ್ವಾದ ಖಂಡಿತವಾಗಿಯೂ ಸಿಗಲಿದೆ ಎಂದು ಹೇಳಿದರು.
ವಿಧಾನಸಭಾ ಚುನಾವಣೆಗೆ ಪೂರ್ವಭಾವಿಯಾಗಿ ನಾಲ್ಕು ಕಡೆಗಳಿಂದ ವಿಜಯ ಸಂಕಲ್ಪ ಯಾತ್ರೆ ಹೊರಡಲಿದೆ. ನಾನು ಮಹದೇಶ್ವರ ಬೆಟ್ಟದಲ್ಲಿ ಚಾಲನೆ ನೀಡಿದ್ದೇನೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಗುರುವಾರ ಬೆಳಗಾವಿಯಲ್ಲಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇನ್ನೆರಡು ಕಡೆಗಳಲ್ಲಿ ಯಾತ್ರೆ ಉದ್ಘಾಟಿಸಲಿದ್ದಾರೆ ಎಂದರು.
ರಾಜ್ಯದ ಎಲ್ಲ 224 ಕ್ಷೇತ್ರಗಳಿಗೂ ಯಾತ್ರೆ ಸಂಚರಿಸಲಿದೆ. 20 ದಿನಗಳಲ್ಲಿ 8000 ಕಿ.ಮೀ ಕ್ರಮಿಸಲಿದೆ. 75 ಸಮಾವೇಶ, 150ಕ್ಕೂ ಹೆಚ್ಚು ರೋಡ್ ಶೋಗಳು ನಡಯಲಿವೆ ‘ ಎಂದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ, ವಿಜಯಸಂಕಲ್ಪ ಯಾತ್ರೆಯಿಂದ ನಮ್ಮ ಆತ್ಮ ವಿಶ್ವಾಸ, ಶಕ್ತಿ ಇಮ್ಮಡಿಯಾಗಿದೆ. ಜನ ಸಂಕಲ್ಪದಿಂದ ವಿಜಯ ಸಂಕಲ್ಪ. ವಿಜಯ ಸಂಕಲ್ಪದಿಂದ ದಿಗ್ವಿಜಯವನ್ನು ಬಿಜೆಪಿ ಸಂಪಾದಿಸಲಿದೆ ಎಂದರು.
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸೂರ್ಯ, ಚಂದ್ರ ಇರುವುದು ಎಷ್ಟು ಸತ್ಯವೋ, ಬಿಜೆಪಿ 140ಕ್ಕೂ ಹೆಚ್ಚು ಸೀಟುಗಳನ್ನು ಗೆದ್ದು ಬಿಜೆಪಿ ಅಧಿಕಾರಕ್ಕೆ ಬರುವುದು ಅಷ್ಟೇ ಸತ್ಯ. ಯಾವುದೇ ಶಕ್ತಿ ಬಿಜೆಪಿ ಅಧಿಕಾರಕ್ಕೆ ಬರುವುದನ್ನು ತಡೆಯಲು ಸಾಧ್ಯವಿಲ್ಲ ಎಂದರು.
ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ , ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಪ್ರಧಾನ ಕಾರ್ಯದರ್ಶಿ ರವಿಕುಮಾರ್, ಸಂಸದ ಬಿ.ವೈ.ರಾಘವೇಂದ್ರ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಎಂ.ರಾಜೇಂದ್ರ, ಶಾಸಕ ನಿರಂಜನಕುಮಾರ್, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಇತರ ಮುಖಂಡರು ಇದ್ದರು.