ಕಲಬುರ್ಗಿಗೆ ಪ್ರಧಾನಿ: 2500 ಬಸ್ ವ್ಯವಸ್ಥೆ

ಕಲಬುರಗಿ: ಜನವರಿ 19ರಂದು ಸೇಡಂ ತಾಲ್ಲೂಕಿನ ಮಳಖೇಡ ಸಮೀಪದ ರಾಜ್ಯ ಹೆದ್ದಾರಿಗೆ ಹೊಂದಿಕೊಂಡ 60 ಎಕರೆ ಪ್ರದೇಶದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಲಿದ್ದು, ವಿವಿಧ ಸ್ಥಳಗಳಿಂದ ಫಲಾನುಭವಿಗಳನ್ನು ಕರೆತರಲು 2,500 ಬಸ್ ವ್ಯವಸ್ಥೆ ಮಾಡಲಾಗುತ್ತಿದೆ.
ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಅವರು ಅಧಿಕಾರಿಗಳೊಂದಿಗೆ ಮಂಗಳವಾರ ಪೂರ್ವಭಾವಿ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಕೆಕೆಆರ್‌ಟಿಸಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ರಾಚಪ್ಪ ಅವರಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಕಲಬುರಗಿ, ಯಾದಗಿರಿ, ಬೀದರ್, ರಾಯಚೂರು, ವಿಜಯಪುರ ಜಿಲ್ಲೆಗಳ ತಾಂಡಾ ನಿವಾಸಿಗಳಿಗೆ ಪ್ರಧಾನಿ ಮೋದಿ ಅವರು ಹಕ್ಕುಪತ್ರ ವಿತರಿಸಿ, ಜಿಲ್ಲೆಯ ಜಲ್ ಜೀವನ್ ಮಿಷನ್ ಯೋಜನೆಯ ಕಾಮಗಾರಿಗಳಿಗೆ ಚಾಲನೆ ನೀಡುವರು’ ಎಂದು ಯಶವಂತ ವಿ.ಗುರುಕರ್ ತಿಳಿಸಿದರು.
ಕಾರ್ಯಕ್ರಮ ಸುಗಮ ನಿರ್ವಹಣೆ ಮತು ಯಶಸ್ಸಿಗೆ 10 ಸಮಿತಿಗಳನ್ನು ರಚಿಸಲಾಗಿದ್ದು, ಆಯಾ ಅಧಿಕಾರಿಗಳಿಗೆ ನೀಡಲಾಗುವ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು. ವೇದಿಕೆ, ಹೆಲಿಪ್ಯಾಡ್ ನಿರ್ಮಾಣ, ಪಾರ್ಕಿಂಗ್ ವ್ಯವಸ್ಥೆ, ಸುಗಮ ಸಂಚಾರ, ಸಾರ್ವಜನಿಕರ ಮತ್ತು ಗಣ್ಯರ ಆಸನದ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ, ಸ್ವಚ್ಛತೆ, ಭದ್ರತೆಯನ್ನು ಅಚ್ಚುಕಟ್ಟಾಗಿ ಇರಬೇಕು ಎಂದು ಅವರು ಸೂಚಿಸಿದರು.
ಪ್ರಧಾನಿಗಳ ಪ್ರವಾಸ ಹಿನ್ನೆಲೆಯಲ್ಲಿ ಜನವರಿ 20ರವರೆಗೆ ಜಿಲ್ಲೆಯ ಯಾವುದೇ ಅಧಿಕಾರಿ-ಸಿಬ್ಬಂದಿ ಕೇಂದ್ರಸ್ಥಾನ ಬಿಡುವಂತಿಲ್ಲ. ಪ್ರತಿ ಕಚೇರಿಯಲ್ಲಿ ಶೇ 100ರಷ್ಟು ಹಾಜರಾತಿಯೊಂದಿಗೆ ಕಾರ್ಯನಿರ್ವಹಿಸಬೇಕು. ಕೇಂದ್ರಸ್ಥಾನ ಬಿಡಬೇಕಾದಲ್ಲಿ ತಮ್ಮ ಅನುಮತಿ ಅಗತ್ಯ. ಇದು ಉಲ್ಲಂಘಿಸಿದಲ್ಲಿ ಶಿಸ್ತು ಕ್ರಮ ಅನಿವಾರ್ಯ ಎಂದು ಎಚ್ಚರಿಸಿದರು.

Leave a Reply

Your email address will not be published. Required fields are marked *

error: Content is protected !!