ಜೂ.4ರಂದು ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ
ದಾವಣಗೆರೆ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಜೂನ್. 4 ರಂದು ಬೆಳಿಗ್ಗೆ 10. 45ಕ್ಕೆ ನಗರದ ದೇವರಾಜು ಅರಸು ಬಡಾವಣೆಯಲ್ಲಿನ ಶಿವಧ್ಯಾನ ಮಂದಿರದಲ್ಲಿ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಇ.ಎಂ ಮಂಜುನಾಥ್ ಹೇಳಿದ್ದಾರೆ.
ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಕಾರ್ಯಕ್ರಮದಲ್ಲಿ 2022 ನೇ ಸಾಲಿನ ಮಾಧ್ಯಮ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಪ್ರದಾನ, ವಿವಿಧ ಪ್ರಶಸ್ತಿಗಳ ಪುರಸ್ಕೃತ ಪತ್ರಕರ್ತರಿಗೆ ಗೌರವಾರ್ಪಣೆ, ಮಹಿಳಾ ಪತ್ರಕರ್ತರಿಗೆ ಸನ್ಮಾನ ಹಾಗೂ ಪತ್ರಕರ್ತರಿಗೆ ಧನಸಹಾಯ ವಿತರಣಾ ಕಾರ್ಯಕ್ರಮ ಜರುಗಲಿದೆ ಎಂದು ಹೇಳಿದರು.
ಸಭಾ ಕಾರ್ಯಕ್ರಮಕ್ಕೂ ಮೊದಲು ಬೆಳಿಗ್ಗೆ 9.30ಕ್ಕೆ ಸಂಘದ ಜಿಲ್ಲಾ ಘಟಕದ 2022-23ನೇ ಸಾಲಿನ ವಾರ್ಷಿಕ ಸರ್ವ ಸದಸ್ಯರ ಮಹಾಸಭೆ ನಡೆಯಲಿರುವುದಾಗಿ ತಿಳಿಸಿದರು.
ಕಾರ್ಯಕ್ರಮವನ್ನು ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸ್ಥಳೀಯ ಸಂಚಾಲಕಿ ಬ್ರಹ್ಮಕುಮಾರಿ ಲೀಲಾಜಿ ಸಾನ್ನಿಧ್ಯದಲ್ಲಿ ಬ್ರಹ್ಯಾಕುಮಾರೀಸ್ ಸಂಸ್ಥೆಯ ಹುಬ್ಬಳ್ಳಿ ವಲಯದ ನಿರ್ದೇಶಕರಾದ ರಾಜಯೋಗಿ ಬ್ರಹ್ಮಾಕುಮಾರ ಬಸವರಾಜ ರಾಜಋಷಿ ಉದ್ಘಾಟಿಸುವರು.
ತೋಟಗಾರಿಕೆ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಅವರು ಮಾಧ್ಯಮ ಮಾಣಿಕ್ಯ ಪ್ರಶಸ್ತಿ ಪ್ರದಾನ ಮಾಡುವರು. ಬಾಪೂಜಿ ವಿದ್ಯಾಸಂಸ್ಥೆ ಆಡಳಿತ ಮಂಡಳಿ ಸದಸ್ಯೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಮಹಿಳಾ ಪತ್ರಕರ್ತೆಯರನ್ನು ಗೌರವಿಸುವರು. ಹಿರಿಯ ಕೈಗಾರಿಕೋದ್ಯಮಿ ಅಥಣಿ ವೀರಣ್ಣ ಮತ್ತು ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ವಿವಿಧ ಪ್ರಶಸ್ತಿಗಳ ಪುರಸ್ಕೃತ ಪತ್ರಕರ್ತರನ್ನು ಸನ್ಮಾನಿಸಲಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿರುವ ಪತ್ರಕರ್ತರಿಗೆ ಜನತಾವಾಣಿ ಪತ್ರಿಕೆ ಸಂಪಾದಕ ಎಂ. ಎಸ್. ವಿಕಾಸ್ ಮತ್ತು ಹೋಟೆಲ್ ಉದ್ಯಮಿ ಅಣಬೇರು ರಾಜಣ್ಣ ಅವರು ಸಹಾಯ ಧನದ ಚೆಕ್ ವಿತರಿಸುವರು. ಮಹಾನಗರ ಪಾಲಿಕೆ ಆಯುಕ್ತೆ ರೇಣುಕಾ, ಕೆಯುಡಬ್ಲ್ಯೂಜೆ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಸಿ. ಲೋಕೇಶ್, ಜಿಲ್ಲಾ ವರದಿಗಾರರ ಕೂಟದ ಅಧ್ಯಕ್ಷ ಕೆ. ಏಕಾಂತಪ್ಪ, ದಾವಣಗೆರೆ ಅರ್ಬನ್ ಕೋ- ಆಪರೇಟಿವ್ ಬ್ಯಾಂಕ್ ನಿರ್ದೇಶಕ ದೇವರಮನಿ ಶಿವಕುಮಾರ್, ಲಯನ್ಸ್ ಕ್ಲಬ್ ಅಧ್ಯಕ್ಷ ಎನ್.ಆರ್. ನಾಗಭೂಷಣರಾವ್, ಲಯನ್ಸ್ ಕ್ಲಬ್ ಉಪಾಧ್ಯಕ್ಷ ಮಹಾಂತೇಶ್ ಪಿ. ಒಣರೊಟ್ಟಿ, ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ರಾಷ್ಟ್ರೀಯ ಮಂಡಳಿ ಸದಸ್ಯ ಎಸ್.ಕೆ. ಒಡೆಯರ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದರು.