ರಾಜ್ಯ ಕಾರ್ಯಕಾರಿಣಿಯಲ್ಲಿ ಸಿಎಂ ಜೊತೆ ಪದಾಧಿಕಾರಿಗಳ ಸಂವಾದ- ಕ್ಯಾಪ್ಟನ್ ಗಣೇಶ್ ಕಾರ್ಣಿಕ್
ಬೆಂಗಳೂರು: ಸೆಪ್ಟೆಂಬರ್ 19 ಭಾನುವಾರ ರಂದು ನಡೆಯುವ ಬಿಜೆಪಿ ರಾಜ್ಯ ಕಾರ್ಯಕಾರಿಣಿಯಲ್ಲಿ ಮಧ್ಯಾಹ್ನದ ಬಳಿಕ ಮುಖ್ಯ ಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ಅವರ ಜೊತೆ ಪದಾಧಿಕಾರಿಗಳ ಸಂವಾದವೂ ನಡೆಯಲಿದೆ ಎಂದು ರಾಜ್ಯ ಬಿಜೆಪಿ ಮುಖ್ಯ ವಕ್ತಾರರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಅವರು ತಿಳಿಸಿದರು.
ದಾವಣಗೆರೆಯಲ್ಲಿ ಇಂದು ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಇಂದು ಬೆಳಿಗ್ಗೆ ಪ್ರಭಾರಿಗಳು, ಸಹ ಪ್ರಭಾರಿಗಳ ಸಭೆ ನಡೆದಿದೆ. ಸಂಜೆ ರಾಜ್ಯ ಪದಾಧಿಕಾರಿಗಳ ಸಭೆ ನಡೆದಿದೆ. ಭಾನುವಾರ ಬೆಳಿಗ್ಗೆ 10ಕ್ಕೆ ರಾಜ್ಯಾಧ್ಯಕ್ಷರಾದ ಶ್ರೀ ನಳಿನ್‍ಕುಮಾರ್ ಕಟೀಲ್ ಅವರಿಂದ ಧ್ವಜಾರೋಹಣ, 10.30ಕ್ಕೆ ರಾಜ್ಯದ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಅವರಿಂದ ರಾಜ್ಯ ಕಾರ್ಯಕಾರಿಣಿಯ ಉದ್ಘಾಟನೆ ನಡೆಯಲಿದೆ. ರಾಜ್ಯದ ಉಸ್ತುವಾರಿಗಳಾದ ಶ್ರೀ ಅರುಣ್ ಸಿಂಗ್, ಮಾಜಿ ಮುಖ್ಯಮಂತ್ರಿ ಶ್ರೀ ಬಿ.ಎಸ್.ಯಡಿಯೂರಪ್ಪ ಅವರ ಉಪಸ್ಥಿತಿಯಲ್ಲಿ ಶ್ರೀ ನಳಿನ್‍ಕುಮಾರ್ ಕಟೀಲ್ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ ಎಂದರು.
ಮೊದಲನೇ ಗೋಷ್ಠಿಯಲ್ಲಿ ನಿರ್ಣಯಗಳ ಮಂಡನೆ- ಚರ್ಚೆ ಆಗಲಿದೆ. ಹಿಂದಿನ ಕಾರ್ಯಕಾರಿಣಿಯ ನಿರ್ಣಯಗಳು, ಬಳಿಕ ನಡೆದ ಕಾರ್ಯಕ್ರಮಗಳ ಕುರಿತು ಚರ್ಚೆ ನಡೆಯಲಿದೆ. ಸೇವಾ ಹೀ ಸಂಘಟನೆ, ಸೇವಾ ಸಮರ್ಪಣೆ ಅಭಿಯಾನ ಕುರಿತು ಚರ್ಚಿಸಲಾಗುವುದು ಎಂದರು.
ಮಧ್ಯಾಹ್ನದ ನಂತರ ಸಂಘಟನಾ ಪ್ರಧಾನ ಕಾರ್ಯದರ್ಶಿಯವರು ಮುಂದಿನ ಕಾರ್ಯಕ್ರಮಗಳ ಕುರಿತು ಮಾರ್ಗದರ್ಶನ ನೀಡಲಿದ್ದಾರೆ. ಸೇವೆ ಮತ್ತು ಸಮರ್ಪಣೆಗೆ ನಮೋ ಆ್ಯಪ್ ಬಳಕೆ ಕುರಿತು ಮಾಹಿತಿ ನೀಡಲಾಗುವುದು ಎಂದು ತಿಳಿಸಿದರು.
ಸಂಜೆ ಸಮಾರೋಪ ಸಮಾರಂಭ ನಡೆಯಲಿದ್ದು, ರಾಜ್ಯಾಧ್ಯಕ್ಷರು ಮಾರ್ಗದರ್ಶನ ನೀಡಲಿದ್ದಾರೆ ಎಂದು ತಿಳಿಸಿದರು. ಕೋವಿಡ್ ತೊಂದರೆಯಿಂದ ನೇರ ಪಾಲ್ಗೊಳ್ಳುವಿಕೆ ಮತ್ತು ವರ್ಚುವಲ್ ಭಾಗವಹಿಸುವಿಕೆ ಒಳಗೊಂಡ ಹೈಬ್ರಿಡ್ ಕಾರ್ಯಕಾರಿಣಿ ನಡೆಸಲಾಗುತ್ತಿತ್ತು. ದಾವಣಗೆರೆಯ ಕಾರ್ಯಕಾರಿಣಿಯಲ್ಲಿ ರಾಜ್ಯದ ಪದಾಧಿಕಾರಿಗಳು, ಎಲ್ಲ ಸಂಸದರು, ಎಲ್ಲ ಶಾಸಕರು, ಎಲ್ಲ ವಿಧಾನಪರಿಷತ್ ಸದಸ್ಯರು, ಜಿಲ್ಲಾ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಸಂಘಟನಾ ಕಾರ್ಯದರ್ಶಿಗಳು, ಸಹ ಸಂಘಟನಾ ಕಾರ್ಯದರ್ಶಿಗಳು ಭಾಗವಹಿಸಲಿದ್ದಾರೆ ಎಂದು ವಿವರಿಸಿದರು. 500ಕ್ಕೂ ಹೆಚ್ಚು ಮುಖಂಡರು ಭಾಗವಹಿಸುವ ನಿರೀಕ್ಷೆ ಇದೆ ಎಂದರು.
ಪಕ್ಷದ ರಾಜ್ಯ ಕಾರ್ಯಕಾರಿಣಿಯು ರಾಜ್ಯಾಧ್ಯಕ್ಷರಾದ ಶ್ರೀ ನಳಿನ್‍ಕುಮಾರ್ ಕಟೀಲ್ ಅವರ ನೇತೃತ್ವದಲ್ಲಿ ಅತ್ಯಂತ ಯೋಜನಾಬದ್ಧವಾಗಿ ದಾವಣಗೆರೆಯಲ್ಲಿ ನಡೆಯುತ್ತಿದೆ. ಅತ್ಯಂತ ಸುವ್ಯವಸ್ಥಿತವಾಗಿ ಕಾರ್ಯಕ್ರಮ ಆಯೋಜಿಸಿದ ಇಲ್ಲಿನ ಜಿಲ್ಲಾಧ್ಯಕ್ಷರು ಮತ್ತು ಕಾರ್ಯಕರ್ತರು ಅಭಿನಂದನಾರ್ಹರು ಎಂದು ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಅವರು ತಿಳಿಸಿದರು.
ರಾಜ್ಯಸಭಾ ಸದಸ್ಯರು ಮತ್ತು ರೈತ ಮೋರ್ಚಾ ರಾಜ್ಯ ಅಧ್ಯಕ್ಷರಾದ ಶ್ರೀ ಈರಣ್ಣ ಕಡಾಡಿ, ರಾಜ್ಯ ಮಾಧ್ಯಮ ಸಂಚಾಲಕರಾದ ಶ್ರೀ ಕರುಣಾಕರ ಖಾಸಲೆ, ಜಿಲ್ಲಾ ವಕ್ತಾರರಾದ ಶ್ರೀ ಶಿವಶಂಕರ್ ಅವರು ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು.