ಸದಾಶಿವ ಆಯೋಗ ವರದಿ ವಿರೋಧಿಸಿ ಕರ್ನಾಟಕ ರಾಜ್ಯ ಮೀಸಲಾತಿ ಸಂರಕ್ಷಣಾ ಒಕ್ಕೂಟದಿಂದ ಪ್ರತಿಭಟನೆ

ದಾವಣಗೆರೆ: ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿಯನ್ನು ರಾಜ್ಯ ಸರ್ಕಾರ ತಿರಸ್ಕರಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಮೀಸಲಾತಿ ಸಂರಕ್ಷಣಾ ಒಕ್ಕೂಟದಿಂದ ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.
ನಗರದ ಅಂಬೇಡ್ಕರ್ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ನಡೆಸಿದ ಮೀಸಲಾತಿ ಸಂರಕ್ಷಣಾ ಒಕ್ಕೂಟದ ಪದಾಧಿಕಾರಿಗಳು, ಕಾರ್ಯಕರ್ತರು ಜಿಲ್ಲಾಡಳಿತ ಭವನಕ್ಕೆ ತೆರಳಿ ಸದಾಶಿವ ಆಯೋಗದ ವರದಿಯನ್ನು ತಿರಸ್ಕರಿಸಬೇಕೆಂದು ಒತ್ತಾಯಿಸಿ ಜಿಲ್ಲಾಧಿಕಾರಿಗಳ ಮುಖಾಂತರ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿಯು ಅವೈಜ್ಞಾನಿಕವಾಗಿದೆ. ಈ ಆಯೋಗ ಮಾಡಿರುವ ವರದಿಯನ್ನು ರಾಜ್ಯ ಸರ್ಕಾರ ಅನುಷ್ಠಾನಗೊಳಿಸಿದರೆ, ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿರುವ 101 ಜಾತಿಗಳಲ್ಲಿ ಮಾದಿಗ ಸಮುದಾಯವನ್ನು ಹೊರತು ಪಡಿಸಿದರೆ, ಇನ್ನುಳಿದ 100 ಜಾತಿಯ ಜನರಿಗೆ ಅನ್ಯಾಯವಾಗಲಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗವು ಸಮೀಕ್ಷೆ ನಡೆಸಿದ ಸಂದರ್ಭದಲ್ಲಿ ವಾಸ್ತವವಾಗಿ ಸ್ಥಳ ಪರಿಶೀಲನೆ ನಡೆಸದೆ ಒಂದೇ ಸಮುದಾಯದ ವ್ಯಕ್ತಿಗಳಿಂದ ಎಲ್ಲಾ ಜಿಲ್ಲೆಗಳಲ್ಲೂ ಮಾಹಿತಿ ಪಡೆದು ವರದಿ ರಚಿಸಿದ್ದು, ಇದು ಅತ್ಯಂತ ಅವೈಜ್ಞಾನಿಕವಾಗಿದೆ. ಆದ್ದರಿಂದ ಯಾವುದೇ ಕಾರಣಕ್ಕೂ ರಾಜ್ಯ ಸರ್ಕಾರ ಈ ವರದಿಯನ್ನು ಅನುಷ್ಠಾನಗೊಳಿಸಬಾರದು ಎಂದು ಒತ್ತಾಯಿಸಿದರು.
ನಮ್ಮ ಪ್ರಬಲ ವಿರೋಧದ ನಡುವೆಯು ಈ ಆಯೋಗದ ವರದಿಯನ್ನು ಅನುಷ್ಠಾನಗೊಳಿಸದರೆ, ಮುಂದಿನ ಚುನಾವಣೆಯಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ಮೀಸಲಾತಿ ಸಂಕ್ಷಣಾ ಒಕ್ಕೂಟದ ಡಿ.ಬಸವರಾಜ್, ರಾಘವೇಂದ್ರ ನಾಯ್ಕ, ಎಸ್.ಜಿ.ಸೋಮಶೇಖರ್, ಕೆ.ಎನ್.ಓಂಕಾರಪ್ಪ, ನಂಜಾನಾಯ್ಕ, ಕೃಷ್ಣನಾಯ್ಕ, ಧನರಾಜನಾಯ್ಕ, ನಾಗರಾಜ್ ಇತರರು ಇದ್ದರು.

 
                         
                       
                       
                       
                       
                       
                       
                      